ಹೊಸದಾಗಿ 1 ಸಾವಿರ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ಯೋಜನೆ; ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯಲು ನಿರ್ಧಾರ

| Updated By: Skanda

Updated on: Jul 03, 2021 | 10:07 AM

ಈ ವರ್ಷ ಬರೋಬ್ಬರಿ 1 ಸಾವಿರ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಎಲ್​ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಸುಮಾರು 1,000 ಶಾಲೆಗಳನ್ನು ಹೊಸದಾಗಿ ಆರಂಭಿಸಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಹೊಸದಾಗಿ 1 ಸಾವಿರ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ಯೋಜನೆ; ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯಲು ನಿರ್ಧಾರ
ಸಾಂಕೇತಿಕ ಚಿತ್ರ
Follow us on

ಬೆಂಗಳೂರು: ಕೊರೊನಾ ಕಾರಣದಿಂದ ಸರ್ಕಾರಿ ಶಾಲೆಗಳಿಗೆ ದಾಖಲಾತಿ ಪ್ರಮಾಣ ಹೆಚ್ಚುತ್ತಿರುವ ಬೆನ್ನಲ್ಲೇ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯಲು ಶಿಕ್ಷಣ ಇಲಾಖೆ ಮತ್ತೊಂದು ತೀರ್ಮಾನ ತೆಗೆದುಕೊಂಡಿದೆ. ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಬೆಂಗಳೂರು ಸೇರಿದಂತೆ ಹಲವೆಡೆ ಬೇಡಿಕೆ ಹೆಚ್ಚಾಗುತ್ತಿರುವ ಕಾರಣ ಈ ವರ್ಷ ಬರೋಬ್ಬರಿ 1 ಸಾವಿರ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. 2018ರಲ್ಲಿ ಆರಂಭವಾದ ಕರ್ನಾಟಕ ಪಬ್ಲಿಕ್ ಸ್ಕೂಲ್ (KPS) ಇದೀಗ ಭಾರೀ ಬೇಡಿಕೆ ಗಿಟ್ಟಿಸಿಕೊಳ್ಳುತ್ತಿರುವ ಕಾರಣ ಶಾಲೆಗಳ ಸಂಖ್ಯೆ ಹೆಚ್ಚಿಸುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಹೇಳಿಕೆ ನೀಡಿದ್ದಾರೆ.

ಕೊರೊನಾದಿಂದಾಗಿ ಜನರ ಆರ್ಥಿಕತೆಯ ಮೇಲೆ ಹೊಡೆತ ಬಿದ್ದಿರುವ ಪರಿಣಾಮ ಲಕ್ಷಾಂತರ ಹಣ ಸುರಿದು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದು ಕಷ್ಟವಾಗಿದೆ. ಹೀಗಾಗಿ, ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಸಹಜವಾಗಿಯೇ ಬೇಡಿಕೆ ಹೆಚ್ಚಾಗಿದ್ದು, ಈ ಪರಿಸ್ಥಿತಿಯನ್ನು ಸದುಪಯೋಗ ಪಡಿಸಿಕೊಂಡರೆ ಸರ್ಕಾರಿ ಶಾಲೆಗಳು ಅಧಿಕ ಸಂಖ್ಯೆಯಲ್ಲಿ ಮಕ್ಕಳನ್ನು ಸೆಳೆಯುವುದು ಸಾಧ್ಯ. ಇದೇ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್​ಗಳ ಸಂಖ್ಯೆ ಹೆಚ್ಚಿಸಲಾಗುತ್ತಿದ್ದು, ಇದು ತ್ವರಿತವಾಗಿ ಆದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ಅತ್ಯಧಿಕ ಪ್ರಮಾಣದಲ್ಲಿ ಮಕ್ಕಳು ಸೇರುವ ನಿರೀಕ್ಷೆಯಿದೆ.

ಖಾಸಗಿ ಶಾಲೆಗಳ ಶುಲ್ಕಕ್ಕೆ ರೋಸಿ ಹೋಗಿರುವ ಪೋಷಕರು, ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗೆ ಮಕ್ಕಳನ್ನು ಸೇರಿಸುವಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚು ಆಸಕ್ತಿ ತೋರಿಸಿದ್ದಾರೆ. ಈ ವರ್ಷ ಶೇ.30ರಷ್ಟು ಬೇಡಿಕೆ ಹೆಚ್ಚಾಗಿದ್ದು, ಬೆಂಗಳೂರಿನಲ್ಲಿ ಸರ್ಕಾರಿ ಇಂಗ್ಲೀಷ್ ಮಾಧ್ಯಮಕ್ಕೆ ಸೇರುವ ಮಕ್ಕಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಹೀಗಾಗಿ ಎಲ್​ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಸುಮಾರು 1,000 ಶಾಲೆಗಳನ್ನು ಹೊಸದಾಗಿ ಆರಂಭಿಸಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಳ
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2021-22ನೇ ಸಾಲಿನ ಶೈಕ್ಷಣಿಕ ವರ್ಷದ ದಾಖಲಾತಿಯಲ್ಲಿ ಹೆಚ್ಚಳ ಕಂಡುಬಂದಿದೆ. 1ರಿಂದ 10ನೇ ತರಗತಿವರೆಗೂ ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಪ್ರಾರಂಭವಾಗಿ ಕೇವಲ 15 ದಿನದಲ್ಲೇ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜೂನ್ 15ರಿಂದ ಈವರೆಗೆ ಸರ್ಕಾರಿ ಶಾಲೆಗಳಿಗೆ 16 ಲಕ್ಷಕ್ಕೂ ಹೆಚ್ಚು ಮಕ್ಕಳು ದಾಖಲಾಗಿದ್ದಾರೆ. ಖಾಸಗಿ ಶಾಲೆಯಿಂದ ಸರ್ಕಾರಿ‌ ಶಾಲೆಯತ್ತ ಮುಖ ಮಾಡುತ್ತಿರುವ ಮಕ್ಕಳ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ.

ಜೂನ್ 15ರಿಂದ ಈವರೆಗೆ ಒಟ್ಟು 16,52,613 ಮಕ್ಕಳು ಸರ್ಕಾರಿ ಶಾಲೆಗೆ ಸೇರ್ಪಡೆಯಾಗಿದ್ದಾರೆ. ಅನುದಾನಿತ ಶಾಲೆಗಳಲ್ಲಿ 3,10,883 ಮಕ್ಕಳು ದಾಖಲಾಗಿದ್ದರೆ, ಖಾಸಗಿ ಶಾಲೆಗಳಲ್ಲಿ 4,48,699 ಮಕ್ಕಳು ಸೇರಿದ್ದಾರೆ. ಈ ವರ್ಷ‌ ದಾಖಲಾತಿಗೆ ಮತ್ತಷ್ಟು ಸಮಯಾವಕಾಶ ನೀಡಿರುವ ಹಿನ್ನೆಲೆಯಲ್ಲಿ ಈ ಪ್ರಮಾಣವೂ ಮತ್ತಷ್ಟು ಹೆಚ್ಚಾಗಬಹುದಾದ ನಿರೀಕ್ಷೆಯಿದೆ.

ಇದನ್ನೂ ಓದಿ:
ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಸರ್ಕಾರಿ ಶಾಲೆಗಳು: ದಾಖಲಾತಿ ಪ್ರಮಾಣದಲ್ಲಿ ಹೆಚ್ಚಳ

Published On - 9:59 am, Sat, 3 July 21