Power Tariff Hike: ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್ ದರ ಹೆಚ್ಚಳ..ಯೂನಿಟ್ಗೆ ಎಷ್ಟು ಗೊತ್ತಾ?
Electricity Price Hike In Karnataka: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಹಾಲು, ಮೊಸರಿನ ದರ ಏರಿಕೆ ದೊಡ್ಡ ಹೊರೆಯಾದಂತಾಗಿದೆ. ಇದರ ಬೆನ್ನಲ್ಲೇ ಇದೀಗ ವಿದ್ಯುತ್ ದರ ಹೆಚ್ಚಳವಾಗಿದೆ. ಈ ಬಗ್ಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಇಂದು (ಮಾರ್ಚ್ 27) ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಜನರಿಗೆ ವಿದ್ಯುತ್ ಶಾಕ್ ಕೊಟ್ಟಿದೆ. ಹಾಗಾದ್ರೆ, ಪ್ರತಿ ಯೂನಿಟ್ ವಿದ್ಯುತ್ಗೆ ಎಷ್ಟು ಹೆಚ್ಚಳ ಮಾಡಲಾಗಿದೆ ಎನ್ನುವ ಮಾಹಿತಿ ಇಲ್ಲಿದೆ.

ಬೆಂಗಳೂರು, (ಮಾರ್ಚ್ 27): ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು(ಮಾರ್ಚ್ 27) ನಡೆದ ಸಚಿವ ಸಂಪುಟದಲ್ಲಿ ನಂದಿನಿ ಹಾಲು (Nandini Milk) ಹಾಗೂ ಮೊಸರು ದರ ಏರಿಕೆಗೆ ಗ್ರೀನ್ ಸಿಗ್ನಲ್ ನೀಡಿದೆ. ಹೀಗಾಗಿ ನಂದಿನಿ ಹಾಲು ಮತ್ತು ಮೊಸರು ಪ್ರತಿ ಲೀಟರ್ಗೆ ಬರೋಬ್ಬರಿ 4 ರೂಪಾಯಿ ಏರಿಕೆ ಮಾಡಲಾಗಿದೆ. ಇದರ ಬೆನ್ನಲ್ಲೇ ಇಂದೇ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಜನರಿಗೆ ವಿದ್ಯುತ್ ಶಾಕ್ ಕೊಟ್ಟಿದೆ. ಹೌದು…ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿ ಕೆಇಆರ್‌ಸಿ ಇಂದು (ಗುರುವಾರ) ಅಧಿಕೃತ ಆದೇಶ ಹೊರಡಿಸಿದ್ದು, ಪರಿಷ್ಕೃತ ವಿದ್ಯುತ್ ದರ ಏಪ್ರಿಲ್ 1ರಿಂದಲೇ ಅನ್ವಯವಾಗಲಿದೆ. ಮುಂದಿನ ಮೂರು ವರ್ಷಗಳಿಗೆ ದರ ಏರಿಕೆ ಮಾಡಿ ಪಟ್ಟಿ ಆದೇಶಿಸಿದೆ.
ಯೂನಿಟ್‍ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ ಕೊನೆಯ ವಾರದಲ್ಲಿ ಎಸ್ಕಾಂಗಳು ಕೆಇಆರ್‌ಸಿ ಪ್ರಸ್ತಾವನೆ ಸಲ್ಲಿಸಿದ್ದವು. ಪ್ರಸ್ತಾವನೆಯಂತೆ ಉತ್ಪಾದನೆಯ ಖರ್ಚು-ವೆಚ್ಚ ಮತ್ತು ನಿರ್ವಹಣೆಯ ನಷ್ಟ ಸರಿದೂಗಿಸುವ ನಿಟ್ಟಿನಲ್ಲಿ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಹೀಗಾಗಿ ಇಂದು (ಮಾರ್ಚ್ 27) ಕೆಇಆರ್‌ಸಿ ಅಧಿಕೃತವಾಗಿ ಪ್ರತಿ ಯೂನಿಟ್ ವಿದ್ಯುತ್ಗೆ 36 ಪೈಸೆ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್ 1 ರಿಂದಲೇ ಹೊಸ ದರ ಜಾರಿಯಾಗಲಿದ್ದು, ರಾಜ್ಯದ ಜನರಿಗೆ ವಿದ್ಯುತ್ ದರದ ಬಿಸಿ ತಟ್ಟಲಿದೆ.
ಇದನ್ನೂ ಓದಿ: Nandini Milk Price: ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬರೆ: ನಂದಿನಿ ಹಾಲು ಮತ್ತಷ್ಟು ದುಬಾರಿ, ಎಷ್ಟು ಗೊತ್ತಾ?
ಇತ್ತೀಚೆಗಷ್ಟೇ ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆ ಮಾಡಲಾಗಿತ್ತು. ಅದಕ್ಕೂ ಮುನ್ನ ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರವೂ ಹೆಚ್ಚಿಸಲಾಗಿತ್ತು. ಹಾಗೇ ಮದ್ಯದ ದರ ಏರಿಕೆ. ಹೀಗೆ ಸಾಲು ಸಾಲು ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಇಂದು ಹಾಲು ಹಾಗೂ ಮೋಸರು ದರ ಏರಿಕೆ ಬಿಸಿ ಮುಟ್ಟಿದೆ. ಇದರ ಬೆನ್ನಲ್ಲೇ ಇದೀಗ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಕೂಡ ವಿದ್ಯುತ್ ಶಾಕ್ ಕೊಟ್ಟಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:25 pm, Thu, 27 March 25