ಈ ಬಾರಿಯ ಬೇಸಿಗೆ ಸುಲಭವಿಲ್ಲ! ಕುಡಿಯುವ ನೀರಿಗೆ ಎದುರಾಗಲಿದೆ ಹಾಹಾಕಾರ, 26 ಜಿಲ್ಲೆಗಳ ಸ್ಥಿತಿ ಶೋಚನೀಯ

ಕರ್ನಾಟಕದ 26 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ದಟ್ಟವಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ನೀರಿನ ಪೂರೈಕೆಯಲ್ಲಿ ಲೋಪವಾದರೆ ಅಧಿಕಾರಿಗಳನ್ನೇ ಹೊಣೆ ಮಾಡುವುದಾಗಿ ಎಚ್ಚರಿಕೆ ನೀಡಿರುವ ಅವರು, ಕುಡಿಯುವ ನೀರಿನ ಸಂಬಂಧಿತ ಕಾರ್ಯಗಳಿಗಾಗಿ 419 ಕೋಟಿ ರೂ. ಅನುದಾನ ಲಭ್ಯವಿರುವುದಾಗಿ ತಿಳಿಸಿದ್ದಾರೆ.

ಈ ಬಾರಿಯ ಬೇಸಿಗೆ ಸುಲಭವಿಲ್ಲ! ಕುಡಿಯುವ ನೀರಿಗೆ ಎದುರಾಗಲಿದೆ ಹಾಹಾಕಾರ, 26 ಜಿಲ್ಲೆಗಳ ಸ್ಥಿತಿ ಶೋಚನೀಯ
ಸಾಂದರ್ಭಿಕ ಚಿತ್ರ
Image Credit source: tv9

Updated on: Apr 17, 2026 | 10:00 AM

ಬೆಂಗಳೂರು, ಏಪ್ರಿಲ್ 17: ಕರ್ನಾಟಕದಲ್ಲಿ ಈ ವರ್ಷ ಮುಂಗಾರು ಮಳೆ (Monsoon Rain) ಕ್ಷೀಣಿಸುವ ಮುನ್ಸೂಚನೆ ದೊರೆತಿದೆ. ಈ ಹಿನ್ನೆಲೆಯಲ್ಲಿ 26 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಸೃಷ್ಟಿಯಾಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಳವಳ ವ್ಯಕ್ತಪಡಿಸಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು, ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಡಿಸಿಗಳೇ ಜವಾಬ್ದಾರರು: ಸಿಎಂ ಎಚ್ಚರಿಕೆ

ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾದರೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ. ಮಳೆ ಕೊರತೆಯಿಂದಾಗಿ ರಾಜ್ಯದ 213 ತಾಲ್ಲೂಕುಗಳು ಮತ್ತು 2,410 ಗ್ರಾಮ ಪಂಚಾಯತ್‌ಗಳಲ್ಲಿ ನೀರಿನ ಸಮಸ್ಯೆ ಉಂಟಾಗಬಹುದು ಎಂದು ಗುರುತಿಸಲಾಗಿದೆ. ಸದ್ಯ 114 ತಾಲ್ಲೂಕುಗಳಲ್ಲಿ ಈಗಾಗಲೇ ನೀರಿನ ಅತೀ ಹೆಚ್ಚಿನ ಸಮಸ್ಯೆ ಕಂಡುಬಂದಿದ್ದು, 137 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ.

ಹಣದ ಕೊರತೆಯಿಲ್ಲ, ಕುಡಿಯುವ ನೀರಿಗೆ ಆದ್ಯತೆ ನೀಡಿ: ಸಿಎಂ ಸೂಚನೆ

ಕುಡಿಯುವ ನೀರು ನಿರ್ವಹಣೆಗೆ ಜಿಲ್ಲಾಧಿಕಾರಿಗಳ ಪಿಡಿ (PD) ಖಾತೆಯಲ್ಲಿ ಒಟ್ಟು 419.5 ಕೋಟಿ ರೂಪಾಯಿ ಹಣ ಲಭ್ಯವಿದ್ದು, ಅನುದಾನದ ಕೊರತೆಯಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಕೃಷಿಗಿಂತ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು. ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸಲು ಆದ್ಯತೆ ನೀಡಿ, ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಟ್ಯಾಂಕರ್ ಬಳಸುವಂತೆ ಸೂಚಿಸಿದ್ದಾರೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಏಪ್ರಿಲ್‌ನಿಂದ ಜೂನ್‌ವರೆಗೆ ಅತೀ ಹೆಚ್ಚು ಶಾಖದ ಅಲೆ (Heatwave) ಇರುವುದರಿಂದ ಸಾರ್ವಜನಿಕರಿಗೆ ನೆರಳು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಇದನ್ನೂ ಓದಿ: ಬಿಸಿಲ ಝಳದಿಂದ ತತ್ತರಿಸಿದ ಜನತೆ: ಇನ್ನೂ 3 ದಿನ ಉಷ್ಣ ಅಲೆ, ಬೆಂಗಳೂರಿಗೂ ತಟ್ಟಲಿದೆ ತಾಪಮಾನ ಏರಿಕೆ ಬಿಸಿ

ಪ್ರಸ್ತುತ, ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ 321.93 ಟಿಎಂಸಿ ಅಡಿ ನೀರು ಲಭ್ಯವಿದೆ. ಇದು ಒಟ್ಟು ಸಾಮರ್ಥ್ಯದ ಸುಮಾರು ಶೇ 36 ಆಗಿದೆ. ಸಾರ್ವಜನಿಕ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವುದು, ತಾಲ್ಲೂಕು ಮತ್ತು ವಾರ್ಡ್ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸುವುದು ಮತ್ತು 24X7 ವಿದ್ಯುತ್ ಪೂರೈಕೆಯೊಂದಿಗೆ ಆರ್‌ಒ ಘಟಕಗಳ ನಿರಂತರ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ನಿರ್ದೇಶನ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us