ಪಂಚಮಸಾಲಿ, ಕುರುಬ, ಒಕ್ಕಲಿಗ ಸಮುದಾಯಗಳಿಗೆ ಮೀಸಲಾತಿ ಪರಾಮರ್ಶನೆಗೆ ಉನ್ನತ ಮಟ್ಟದ ಸಮಿತಿ ರಚನೆ
ಸಮಿತಿಯ ನೇತೃತ್ವವನ್ನು ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಸುಭಾಷ್ ಅಡಿ ಅವರಿಗೆ ವಹಿಸಲಾಗಿದೆ.
ಬೆಂಗಳೂರು: ಕರ್ನಾಟಕದಲ್ಲಿ ಪಂಚಮಸಾಲಿ ಮತ್ತು ಕುರುಬ ಸಮುದಾಯಗಳಿಗೆ ಮೀಸಲಾತಿ ಒದಗಿಸುವ ಕೂಗು ಬಲ ಪಡೆದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ ಸಮುದಾಯಗಳಿಗೆ ಮೀಸಲಾತಿಯನ್ನು ಪರಾಮರ್ಶಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಸದ್ಯ 3ಬಿ ಮೀಸಲಾತಿಗೆ ಒಳಪಟ್ಟಿರುವ ಪಂಚಮಸಾಲಿ ಸಮುದಾಯವನ್ನು 2ಎ ಅಡಿ ತರಬಹುದೇ ಎಂಬುದರ ಈ ಸಮಿತಿ ಪರಾಮರ್ಶಿಸಲಿದೆ. ನ್ಯಾ. ಎಚ್ಎ.ನ್.ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೆ ತರಲು ಅಗತ್ಯ ಸಲಹೆ ಸೂಚನೆಗಳನ್ನು ಸಹ ಈ ಸಮಿತಿ ನೀಡಲಿದೆ. ಸಮಿತಿಯ ನೇತೃತ್ವವನ್ನು ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಸುಭಾಷ್ ಅಡಿ ಅವರಿಗೆ ವಹಿಸಲಾಗಿದೆ.
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಸಹ ಉನ್ನತ ಮಟ್ಟದ ಸಮಿತಿ ಪರಾಮರ್ಶನೆ ನಡೆಸಲಿದೆ. ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸುವ ಕುರಿತು ಸಮಿತಿ ಅಧ್ಯಯನ ನಡೆಸಲಿದೆ. ಜತೆಗೆ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿಯ ಕುರಿತು ಸಹ ಪರಾಮರ್ಶನೆ ನಡೆಸುವ ಜವಾಬ್ದಾರಿಯನ್ನು ಸಮಿತಿಗೆ ವಹಿಸಲಾಗಿದೆ. ಅಷ್ಟೇ ಅಲ್ಲದೇ ಈ ಸಮುದಾಯಗಳಿಗೆ ಮೀಸಲಾತಿ ಒದಗಿಸಲು ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಮೀಸಲಾತಿ ಪರಾಮರ್ಶನೆಗೆ ರಚಿಸಲಾಗಿರುವ ಉನ್ನತ ಮಟ್ಟದ ಸಮಿತಿಯ ಸದಸ್ಯರನ್ನಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತ್ ಕುಮಾರ್, ಎಂ. ಆರ್.ಕಾಂಬ್ಳೆ ಅವರನ್ನು ನೇಮಿಸಲಾಗಿದೆ.
ಇದನ್ನೂ ಓದಿ:
ಬ್ರಾಹ್ಮಣರಿಂದ ಹಿಡಿದು ಕುರುಬರವರೆಗೆ ಮೀಸಲಾತಿ ಕೇಳ್ತಾರೆ, ದೊಡ್ಡ ಮೀನು ಸಣ್ಣ ಮೀನನ್ನು ನುಂಗಬಾರದು: ಸಿದ್ದರಾಮಯ್ಯ
(Karnataka Government forms high level committee for the review of reservation for the Panchamasali Kuruba and Vokkaliga communities)
Published On - 10:05 pm, Mon, 30 August 21