ವೃತ್ತಿಪರ ಕಾಲೇಜುಗಳಾಗಿ ಪರಿವರ್ತನೆಗೊಳ್ಳಲಿವೆ ಸರ್ಕಾರಿ ಪದವಿ ಕಾಲೇಜುಗಳು! ಸಚಿವ ಎಂಸಿ ಸುಧಾಕರ್ ಮಹತ್ವದ ಸುಳಿವು
ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ನೀಡುವುದಕ್ಕಾಗಿ ಮತ್ತು ಸರ್ಕಾರಿ ಕಾಲೇಜುಗಳಲ್ಲಿ ವೃತ್ತಿಶಿಕ್ಷಣ ನೀಡುವ ನಿಟ್ಟಿನಲ್ಲಿ ಮಹತ್ವದ ಬದಲಾವಣೆಯೊಂದನ್ನು ಮಾಡಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಎಲ್ಲ ಸರ್ಕಾರಿ ಕಾಲೇಜುಗಳನ್ನು ವೃತ್ತಿಪರ ಕಾಲೇಜುಗಳನ್ನಾಗಿ ಪರಿವರ್ತಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಸುಳಿವು ನೀಡಿದ್ದಾರೆ.
ಬೆಂಗಳೂರು, ಮಾರ್ಚ್ 4: ವಿದ್ಯಾರ್ಥಿಗಳಿಗೆ ಉದ್ಯೋಗ ಆಧಾರಿತ ಕೋರ್ಸ್‌ಗಳನ್ನು ನೀಡುವುದಕ್ಕಾಗಿ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳನ್ನು (Government Degree Colleges) ವೃತ್ತಿಪರ ಕಾಲೇಜುಗಳನ್ನಾಗಿ (Professional Colleges) ಪರಿವರ್ತಿಸಲು ಸರ್ಕಾರ ಯೋಜಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ (MC Sudhakar) ಹೇಳಿದ್ದಾರೆ. ಮೈಸೂರಿನಲ್ಲಿ ಭಾನುವಾರ ನಡೆದ ಮೈಸೂರು ವಿಶ್ವವಿದ್ಯಾನಿಲಯದ 104 ನೇ ಘಟಿಕೋತ್ಸವದಲ್ಲಿ ಅವರು ಮಾತನಾಡಿದ್ದಾರೆ. ಉನ್ನತ ಶಿಕ್ಷಣದಲ್ಲಿ ಬದಲಾವಣೆಯನ್ನು ತರಲು ‘ಸೆಂಟರ್ ಫಾರ್ ರಿಸರ್ಚ್ ಇನ್ ಸ್ಕೀಮ್ಸ್ ಅಂಡ್ ಪ್ರೋಗ್ರಾಮ್ಸ್ ಜೊತೆ ಕೈಜೋಡಿಸುತ್ತಿದ್ದೇವೆ. ವೃತ್ತಿಪರವಲ್ಲದ ಕಾಲೇಜುಗಳನ್ನು ವೃತ್ತಿಪರ ಕಾಲೇಜುಗಳಾಗಿ ಪರಿವರ್ತಿಸುವ ಮೂಲಕ ಪದವಿ ಕಾಲೇಜುಗಳಲ್ಲಿ ಉದ್ಯೋಗ ಆಧಾರಿತ ಶಿಕ್ಷಣವನ್ನು ನೀಡಲು ನಾವು ಯೋಜಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಎರಡು ವರ್ಷಗಳ ಪದವಿಯೊಂದಿಗೆ ಅಪ್ರೆಂಟಿಸ್‌ಶಿಪ್ ಸಂಯೋಜಿತ ಪದವಿ ಕಾರ್ಯಕ್ರಮವನ್ನು ಮತ್ತು ಒಂದು ವರ್ಷಕ್ಕೆ 11,000 ರೂ.ಗಳಿಂದ 17,000 ರೂ.ವರೆಗೆ ಸ್ಟೈಫಂಡ್‌ನೊಂದಿಗೆ ಇಂಟರ್ನ್‌ಶಿಪ್ ಅವಕಾಶ ನೀಡುವ ಬಗ್ಗೆಯೂ ಯೋಜಿಸುತ್ತಿದ್ದೇವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ರಮೇಶ್ ವಾಧ್ವಾನಿ ಫೌಂಡೇಶನ್‌ನೊಂದಿಗೆ ಒಪ್ಪಂದ
ಸರ್ಕಾರವು ರಮೇಶ್ ವಾಧ್ವಾನಿ ಫೌಂಡೇಶನ್‌ನೊಂದಿಗೆ ಕೌಶಲ್ಯ ಮತ್ತು ಉದ್ಯೋಗ-ಆಧಾರಿತ ವೃತ್ತಿಪರ ಕೋರ್ಸ್‌ಗಳನ್ನು ನೀಡಲು ಒಪ್ಪಂದ ಮಾಡಿಕೊಂಡಿದೆ. ಸರ್ಕಾರಿ ಕಾಲೇಜುಗಳ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕೋರ್ಸ್‌ಗಳಂತಹ ಕೌಶಲ್ಯಗಳ ತರಬೇತಿಯನ್ನು ಪ್ರಾರಂಭಿಸುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ಈ ಉಪಕ್ರಮವನ್ನು ಬೆಂಗಳೂರಿನ ಆರ್‌ಸಿ ಕಾಲೇಜಿನಲ್ಲಿ ಆರಂಭಿಸಿ, ನಂತರ ಮೈಸೂರು ವಿಶ್ವವಿದ್ಯಾನಿಲಯ, ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ವಿಸ್ತರಿಸಿ ನಂತರ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುತ್ತಿದೆ. ಯುವಕರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಸರ್ಕಾರ ಉನ್ನತ ಶಿಕ್ಷಣದಲ್ಲಿ ಸಾಕಷ್ಟು ಬದಲಾವಣೆಗಳನ್ನು ತರುತ್ತಿದೆ ಎಂದು ಸಚಿವರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಇಲಾಖೆಯು ಬಹಳಷ್ಟು ವಿದೇಶಿ ವಿಶ್ವವಿದ್ಯಾನಿಲಯಗಳು ಮತ್ತು ವಿವಿಧ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತಿದೆ ಎಂದು ಅವರು ಹೇಳಿರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ.
ಶೈಕ್ಷಣಿಕ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಗೆ ಬದಲಾಗಿ ರಾಜ್ಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವುದಾಗಿ ಸರ್ಕಾರ ಮೊದಲಿಗೆ ಘೋಷಣೆ ಮಾಡಿತ್ತು.. ಅನೇಕ ವಿಶ್ವವಿದ್ಯಾಲಯಗಳ ಕುಲಪತಿಗಳ, ಶಿಕ್ಷಣ ತಜ್ಞರ ಆಕ್ಷೇಪದ ನಡುವೆಯೂ ಸರ್ಕಾರ ಈ ತೀರ್ಮಾನ ಕೈಗೊಂಡಿದ್ದು. ಇದೇ ರೀತಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಕೆಲವು ಪ್ರಮುಖ ನಿರ್ಧಾರಗಳನ್ನು ಸರ್ಕಾರ ಕೈಗೊಳ್ಳುತ್ತಿದೆ.
ಇದನ್ನೂ ಓದಿ: 19 ಲಕ್ಷ ವಿದ್ಯಾರ್ಥಿನಿಯರಿಗೆ ಶುಭ ಸುದ್ದಿ: ಕರ್ನಾಟಕದಲ್ಲಿ ಮತ್ತೆ ಆರಂಭವಾಯ್ತು ಶುಚಿ ಯೋಜನೆ
ಮುಟ್ಟಿನ ನೈರ್ಮಲ್ಯಕ್ಕೆ ಸಂಬಂಧಿಸಿದ ‘ಶುಚಿ ಯೋಜನೆ’ಗೆ ಕೆಲವು ದಿನಗಳ ಹಿಂದಷ್ಟೇ ಸರ್ಕಾರ ಮರು ಚಾಲನೆ ನೀಡಿತ್ತು. ಕಳೆದ ನಾಲ್ಕು ವರ್ಷಗಳಿಂದ ಈ ಯೋಜನೆ ಸ್ಥಗಿತಗೊಂಡಿತ್ತು. ಮುಟ್ಟಿನ ನೈರ್ಮಲ್ಯಕ್ಕಾಗಿ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ಗಳನ್ನು ವಿತರಿಸುವ ಯೋಜನೆ ಇದಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:31 am, Mon, 4 March 24