ರಾಜ್ಯದಲ್ಲಿನ 9 ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಂಪುಟ ಉಪಸಮಿತಿ ತೀರ್ಮಾನ!

ಕರ್ನಾಟಕ ಸರ್ಕಾರವು ಬಿಜೆಪಿ ಆಡಳಿತಾವಧಿಯಲ್ಲಿ ಸ್ಥಾಪಿಸಲಾದ ಹತ್ತು ಹೊಸ ವಿಶ್ವವಿದ್ಯಾಲಯಗಳ ಪೈಕಿ ಒಂಭತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲು ನಿರ್ಧರಿಸಿದೆ. ಆರ್ಥಿಕ ಸಂಕಷ್ಟ ಮತ್ತು ಭೂ ಕೊರತೆಯೇ ಇದಕ್ಕೆ ಕಾರಣ ಎಂದು ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಬೀದರ್ ವಿಶ್ವವಿದ್ಯಾಲಯವನ್ನು ಮಾತ್ರ ಉಳಿಸಿಕೊಳ್ಳಲಾಗಿದೆ.

ರಾಜ್ಯದಲ್ಲಿನ 9 ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಂಪುಟ ಉಪಸಮಿತಿ ತೀರ್ಮಾನ!
ಸಾಂದರ್ಭಿಕ ಚಿತ್ರ
Edited By: ವಿವೇಕ ಬಿರಾದಾರ

Updated on: Feb 14, 2025 | 12:40 PM

ಬೆಂಗಳೂರು, ಫೆಬ್ರವರಿ 14: ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು (University) ಮುಚ್ಚಲು ಸಚಿವ ಸಂಪುಟ ಉಪಸಮಿತಿ ತೀರ್ಮಾನಿಸಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅಧ್ಯಕ್ಷತೆಯ ಈ ಉಪಸಮಿತಿ ತೀರ್ಮಾನ ಕೈಗೊಂಡಿದೆ. ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಕುರಿತು ಗುರುವಾರ ಮೊದಲ ಸಭೆ ನಡೆಯಿತು. ಸಭೆಯಲ್ಲಿ ಬೀದರ್ ವಿಶ್ವವಿದ್ಯಾಲಯ ಹೊರತುಪಡಿಸಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ಮತ್ತು ನೃಪತುಂಗ ವಿಶ್ವವಿದ್ಯಾಲಯ ಸೇರಿ ಎಲ್ಲಾ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ಕೈಗೊಳ್ಳಲಾಗಿದೆ.

ಬೀದರ್ ವಿಶ್ವವಿದ್ಯಾಲಯ 150 ಸಂಯೋಜಿತ ಕಾಲೇಜುಗಳನ್ನು ಹೊಂದಿದ್ದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ವಿಶ್ವವಿದ್ಯಾಲಯ ಸುಗಮವಾಗಿ ನಡೆಯಲು ಸಂಯೋಜಿತ ಕಾಲೇಜುಗಳ ಶುಲ್ಕ ಮುಖ್ಯ. ಆದ್ದರಿಂದ ಈ ವಿಶ್ವವಿದ್ಯಾಲಯ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ವರದಿಯಲ್ಲಿದೆ.

ಇದನ್ನೂ ಓದಿ: ಸಾಂಚಿ ವಿಶ್ವವಿದ್ಯಾಲಯದ ಕುಲಾಧಿಪತಿಗಳಾಗಿ ಕರ್ನಾಟಕದ ಪ್ರೊ. ಯಜ್ಞೇಶ್ವರ ಶಾಸ್ತ್ರಿ ನೇಮಕ

ಹೊಸ ವಿಶ್ವವಿದ್ಯಾಲಯಗಳನ್ನು ನಡೆಸಲು ಸರ್ಕಾರ ದೊಡ್ಡ ಮೊತ್ತದ ಹಣ ನೀಡಬೇಕು. ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ ಮತ್ತು ಕಾರ್ಯಾಚರಣೆಗೆ 342 ಕೋಟಿ ಅಗತ್ಯವಿದೆ. ವಿಶ್ವವಿದ್ಯಾಲಯಗಳ ಸ್ಥಾಪನೆಗೆ 100 ರಿಂದ 200 ಎಕರೆ ಅಗತ್ಯವಿದೆ. ಬಹುತೇಕ ವಿಶ್ವವಿದ್ಯಾಲಯಗಳಿಗೆ ಅಷ್ಟು ಪ್ರಮಾಣದ ಜಮೀನು ಲಭ್ಯವಿಲ್ಲ. 342 ಕೋಟಿ ಮೊತ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ವೇತನ ಮೂಲಸೌಕರ್ಯ ಸಲಕರಣೆ ವಾಹನ ಪೀಠೋಪಕರಣ ಇತರೆ ವಸ್ತುಗಳ ಖರೀದಿಸಲು ಅಗತ್ಯವಿದೆ ಎಂದು ವರದಿಯಲ್ಲಿ ಹೇಳಿತ್ತು.

ಯಾವ್ಯಾವ ವಿಶ್ವವಿದ್ಯಾಲಯ ಮುಚ್ಚಲು ನಿರ್ಧಾರ?

ಹಾಸನ, ಚಾಮರಾಜನಗರ ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಹಾರಾಣಿ ಕ್ಲಸ್ಟರ್, ಮಂಡ್ಯ ಮತ್ತು ನೃಪತುಂಗ ವಿಶ್ವವಿದ್ಯಾಲಯಗಳಿಗೆ ಬೀಗ ಬೀಳುವ ಸಾಧ್ಯತೆ ಇದೆ.

ಈ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ಇದು ರಾಜ್ಯದ ವಿಚಾರ, ವೈಯಕ್ತಿಕ ಉದ್ದೇಶವೇನಿಲ್ಲ. ವಿದ್ಯಾರ್ಥಿಗಳ ಭವಿಷ್ಯ ನಮಗೆ ಮುಖ್ಯ. ಉಪನ್ಯಾಸಕರು ಚಾಮರಾಜನಗರ, ಮಂಡ್ಯಗೆ ಹೋಗಲು ತಯಾರಿಲ್ಲ. ಸೀನಿಯಾರಿಟಿಗೆ ತೊಂದರೆಯಾಗುತ್ತೆಂಬ ಆತಂಕ ಅವರಿಗಿದೆ. ಈ ವಿಚಾರವನ್ನು ಸಂಪುಟ ಮುಂದೆ ಇಡುತ್ತೇನೆ, ಆಮೇಲೆ ತಿಳಿಸುತ್ತೇನೆ. ಈ ಹಿಂದೆ ಒಂದು ವಿಶ್ವವಿದ್ಯಾಲಯಕ್ಕೆ 2 ಕೋಟಿ ರೂ. ಮೀಸಲು ಇಡಲಾಗಿತ್ತು. ಈಗ ಹೊಸ ವಿವಿಗೆ ಜಮೀನು ಇಲ್ಲ, ಅಲ್ಲಿಗೆ ಹೋಗುವವರೂ ಇಲ್ಲ ಅಂತ ಸಭೆಯಲ್ಲಿ ಸಚಿವರು, ಅಧಿಕಾರಿಗಳು ಅಭಿಪ್ರಾಯ ತಿಳಿಸಿದ್ದಾರೆ. ಮುಖ್ಯಮಂತ್ರಿಗಳಿಗೂ  ವಿವರಣೆ ನೀಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:34 am, Fri, 14 February 25

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us