ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರದ ಜಾಹೀರಾತು ನಿಷೇಧ: ನಿಯಮ ಉಲ್ಲಂಘಿಸಿಲ್ಲವೆಂದ ಡಿಕೆ ಶಿವಕುಮಾರ್

ತೆಲಂಗಾಣದ ಪತ್ರಿಕೆಗಳಲ್ಲಿ ಕರ್ನಾಟಕ ಸರ್ಕಾರದ ಜಾಹೀರಾತುಗಳನ್ನು ನೀಡುವುದನ್ನು ನಿಷೇಧಿಸಿರುವ ಚುನಾವಣಾ ಆಯೋಗದ ನಡೆಯ ಬಗ್ಗೆ ಡಿಸಿಎಂ ಡಿಕೆ ಶಿಚವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರ್ಕಾರವು ನಿಯಮ ಉಲ್ಲಂಘಿಸಿಲ್ಲ ಎಂದು ಬೆಂಗಳೂರಿನಲ್ಲಿ ಅವರು ಹೇಳಿದ್ದಾರೆ.

ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರದ ಜಾಹೀರಾತು ನಿಷೇಧ: ನಿಯಮ ಉಲ್ಲಂಘಿಸಿಲ್ಲವೆಂದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

Updated on: Nov 28, 2023 | 4:24 PM

ಬೆಂಗಳೂರು, ನವೆಂಬರ್ 28: ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದ (Telangana) ದಿನಪತ್ರಿಕೆಗಳಲ್ಲಿ ಕರ್ನಾಟಕ ಸರ್ಕಾರದ ಯೋಜನೆಗಳ ಕುರಿತು ನೀಡಿರುವ ಜಾಹೀರಾತುಗಳೂ ನಿಯಮವನ್ನು ಉಲ್ಲಂಘಿಸಿಲ್ಲ. ಏಕೆಂದರೆ ಕರ್ನಾಟಕ ಸರ್ಕಾರ ಅಲ್ಲಿನ ಜನರಲ್ಲಿ ಮತ ಕೇಳುವುದಿಲ್ಲ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮಂಗಳವಾರ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚುನಾವಣಾ ಆಯೋಗದ ಪತ್ರಕ್ಕೆ ಸರಕಾರ ಪ್ರತಿಕ್ರಿಯಿಸಲಿದೆ ಎಂದೂ ಅವರು ಹೇಳಿದ್ದಾರೆ.

ನವೆಂಬರ್ 30 ರಂದು ನಡೆಯಲಿರುವ ವಿಧಾನಸಭೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ತೆಲಂಗಾಣ ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸುವ ಕರ್ನಾಟಕ ಕಾಂಗ್ರೆಸ್ ಸರಕಾರ ಪ್ರಜಾಪ್ರತಿನಿಧಿ ಕಾಯ್ದೆ ಮತ್ತು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದೆ ಎಂದು ಆರೋಪಿಸಿ ಬಿಜೆಪಿ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು.

ತಕ್ಷಣವೇ ಕ್ರಮ ಕೈಗೊಂಡ ಚುನಾವಣಾ ಆಯೋಗ, ತೆಲಂಗಾಣದ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸುವುದನ್ನು ನಿಲ್ಲಿಸುವಂತೆ ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಸೂಚನೆ ನೀಡಿತ್ತು. ಮಾದರಿ ನೀತಿ ಸಂಹಿತೆ ಅಡಿಯಲ್ಲಿ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯದೆ ಜಾಹೀರಾತು ನೀಡಿದ್ದಕ್ಕಾಗಿ ವಿವರಣೆಯನ್ನು ಕೇಳಿತ್ತು.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಕರ್ನಾಟಕ ಸರ್ಕಾರವು ಯಾವುದೇ ‘ಗ್ಯಾರಂಟಿ ಯೋಜನೆ’ಗಳನ್ನು ಜಾರಿಗೆ ತಂದಿಲ್ಲ ಎಂಬ ವಿರೋಧ ಪಕ್ಷಗಳ ಆರೋಪಗಳಿಗೆ ಉತ್ತರವಾಗಿ ಸರ್ಕಾರ ಮಾಡಿದ ಕೆಲಸವನ್ನು ಬಿಂಬಿಸುವ ಗುರಿಯನ್ನು ಮಾತ್ರ ಜಾಹೀರಾತುಗಳು ಹೊಂದಿವೆ ಎಂದು ಹೇಳಿದ್ದಾರೆ.

‘ನಾವು ನಿಯಮ ಉಲ್ಲಂಘನೆ ಮಾಡಿಲ್ಲ, ಕರ್ನಾಟಕ ಸರ್ಕಾರ ಯಾರನ್ನೂ ಮತ ಕೇಳಿಲ್ಲ. ನಾವೇನು ​​ಉಲ್ಲಂಘನೆ ಮಾಡಿದ್ದೇವೆ?’ ಎಂದು ಚುನಾವಣಾ ಆಯೋಗದ ನಿರ್ದೇಶನದ ಕುರಿತ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರದ ಜಾಹೀರಾತುಗಳನ್ನು ನಿಷೇಧಿಸಿದ ಚುನಾವಣಾ ಆಯೋಗ

‘ನಾವು ಏನು ಕೆಲಸ ಮಾಡಿದ್ದೇವೆಯೋ ಅವುಗಳ ಬಗ್ಗೆ ವಿವಿಧ ರಾಜ್ಯಗಳಿಗೆ ಮಾಹಿತಿ ನೀಡುತ್ತಿದ್ದೇವೆ. ಆ ವಿಚಾರವಾಗಿ ಕರ್ನಾಟಕ, ತಮಿಳುನಾಡು ಅಥವಾ ತೆಲಂಗಾಣದಲ್ಲಿ ಪತ್ರಿಕೆ ಓದುಗರಿಗೆ ಯಾವುದೇ ತೊಂದರೆ ಇಲ್ಲ’ ಎಂದು ಅವರು ಹೇಳಿದ್ದಾರೆ.

ತೆಲಂಗಾಣ ವಿಧಾನಸಭಾ ಚುನಾವಣೆಯು ನವೆಂಬರ್ 30 ರಂದು ನಡೆಯಲಿದೆ. ಮತಗಳ ಎಣಿಕೆ ಮತ್ತು ಫಲಿತಾಂಶ ಡಿಸೆಂಬರ್ 3 ರಂದು ಪ್ರಕಟವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us