
ಬೆಂಗಳೂರು, (ಅಕ್ಟೋಬರ್ 14): ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಸ್ಟಿಂಗ್ ಆಪರೇಷನ್ ಆರೋಪ ಪ್ರತ್ಯಾರೋಪಗಳ ನಡುವೆ ಕೇಂದ್ರ ಸರ್ಕಾರ ಕುಮಾರಸ್ವಾಮಿ ವಿರುದ್ಧದ ಪ್ರಕರಣಕ್ಕೆ ರಾಜ್ಯ ಸರ್ಕಾರ ಎಸ್ಪಿಪಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕುಮಾರಸ್ವಾಮಿ ವಿರುದ್ಧದ ಹಲಗೇವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಪರ ವಾದಿಸಲು ಎಸ್ಪಿಪಿಯಾಗಿ ಅಶೋಕ್ ಎನ್. ನಾಯ್ಕ್ ಅವರನ್ನು ನೇಮಕ ಮಾಡಿ ಸರ್ಕಾರ ಇಂದು (ಆಕ್ಟೋಬರ್ 14) ಆದೇಶಿಸಿದೆ. ಈ ಮೂಲಕ ಕೆಲ ಗಂಭೀರ ಆರೋಪಗಳನ್ನು ಮಾಡುತ್ತಿರುವ ಕುಮಾಎಸ್ವಾಮಿಗೆ ರಾಜ್ಯ ಸರ್ಕಾರ ಶಾಕ್ ಕೊಟ್ಟಿದೆ.
ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರು 2006ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಂಗಳೂರಿನ ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಮಾಡಿದ ಜಮೀನು ಖರೀದಿಸಿದ್ದಾರೆ ಎಂದು ಆರೋಪಿಸಿ ಎಂ.ಎಸ್.ಮಹದೇವಸ್ವಾಮಿ ಖಾಸಗಿ ದೂರು ದಾಖಲಿಸಿದ್ದರು. ಆದ್ರೆ, ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ತಿರಸ್ಕರಿಸಿ ಸಮನ್ಸ್ ಜಾರಿಗೊಳಿಸಿತ್ತು. ಪ್ರಾಸಿಕ್ಯೂಷನ್ ಪರ ವಾದಿಸಲು ಎಸ್ಪಿಪಿಯಾಗಿ ಅಶೋಕ್ ಎನ್ ನಾಯ್ಕ್ ಅವರನ್ನು ನೇಮಿಸಲಾಗಿದೆ. ಇನ್ನು ವಿಶೇಷ ಅಂದ್ರೆ, ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದಲ್ಲೂ ಸಹ ಅಶೋಕ್ ಎನ್ ನಾಯ್ಕ್ ಎಸ್ಪಿಪಿಯಾಗಿದ್ದಾರೆ.
2006ರಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿ ಬಿಡಿಎ ಬಡಾವಣೆಗಾಗಿ ವಶಪಡಿಸಿಕೊಂಡಿದ್ದ 3 ಎಕರೆ 34 ಗುಂಟೆ ಜಮೀನನ್ನು ನಿಯಮ ಬಾಹಿರವಾಗಿ ಡಿನೋಟಿಫೈ ಮಾಡಲಾಗಿದೆ ಎಂದು ಆರೋಪಿಸಿ ಆರ್ಟಿಐ ಕಾರ್ಯಕರ್ತ ಎಂ ಎಸ್ ಮಹದೇವಸ್ವಾಮಿ ಅವರು ಲೋಕಾಯುಕ್ತಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.ದೂರಿನ ಮೇರೆಗೆ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು 2019ರ ಜನವರಿಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ʼಬಿʼ ರಿಪೋರ್ಟ್ ಸಲ್ಲಿಸಿದ್ದರು. ಇದಕ್ಕೆ ಆಕ್ಷೇಪಿಸಿ ದೂರುದಾರ ಮಹಾದೇವಸ್ವಾಮಿ ಸಲ್ಲಿಸಿದ್ದ ಪ್ರತಿಭಟನಾ ಅರ್ಜಿ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯವು 2019ರ ಜುಲೈ 20ರಂದು ಬಿ ರಿಪೋರ್ಟ್ ರದ್ದುಪಡಿಸಿ, ಕುಮಾರಸ್ವಾಮಿ ಸೇರಿ 19 ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಿತ್ತು.
ಸದ್ಯ ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಸಂಚಲನ ಮೂಡಿಸಿರುವ ನಡುವೆ ರಾಜ್ಯ ಸರ್ಕಾರ, ಕುಮಾರಸ್ವಾಮಿ ವಿರುದ್ಧ ಪ್ರಕರಣಕ್ಕೆ ಎಸ್ಪಿಪಿ ಅವರನ್ನು ನೇಮಕ ಮಾಡಿದ್ದು ಬೇರೆ ಬೇರೆ ರೀತಿಯ ಚರ್ಚೆಗೆ ಗ್ರಾಸವಾಗಿದೆ.
Published On - 10:07 pm, Wed, 14 October 26