ಬೆಂಗಳೂರು, ಆಗಸ್ಟ್ 17: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಸಂಕಷ್ಟ ತಂದೊಡ್ಡಿದೆ. ಪ್ರಾಸಿಕ್ಯೂಷನ್ಗೆ ಅನುಮತಿ ಬೆನ್ನಲ್ಲೇ ಕಾನೂನು ಸಲಹೆಗಾರ ಪೊನ್ನಣ್ಣ ಜತೆ ಸಮಾಲೋಚನೆ ನಡೆಸಿರುವ ಸಿಎಂ ಸಿದ್ದರಾಮಯ್ಯ, ಇಂದು ಸಂಜೆ 5 ಗಂಟೆಗೆ ಸಚಿವ ಸಂಪುಟ ವಿಶೇಷ ಸಭೆ ಕರೆದಿದ್ದಾರೆ. ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆ ಕರೆದಿರುವುದನ್ನು ಸಚಿವರೂ ದೃಢಪಡಿಸಿದ್ದಾರೆ.
ಸಂಜೆ ಸಿಎಂ ಸಿದ್ದರಾಮಯ್ಯ ವಿಶೇಷ ಸಂಪುಟ ಸಭೆ ಕರೆದಿದ್ದಾರೆ. ಸಂಜೆ 5 ಗಂಟೆಗೆ ಬೆಂಗಳೂರಿಗೆ ಬರುವಂತೆ ಬುಲಾವ್ ಬಂದಿದೆ ಎಂದು ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಹೀಗಾಗಿ ರಾಜ್ಯಪಾಲರ ಪ್ರಾಸಿಕ್ಯೂಷನ್ ವಿರುದ್ಧ ಸರ್ಕಾರದ ತೀರ್ಮಾನ ಏನಿರಲಿದೆ ಎಂಬುದು ಸಂಜೆ ವೇಳೆಗೆ ಗೊತ್ತಾಗಲಿದೆ.
ಪ್ರಾಸಿಕ್ಯೂಷನ್ಗೆ ಅನುಮತಿ ವಿರೋಧಿಸಿ ಸಂಪುಟದಲ್ಲಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಇಂದಿನ ಸಂಪುಟ ಸಭೆಗೂ ಸಿಎಂ ಸಿದ್ದರಾಮಯ್ಯ ಗೈರಾಗುವ ಸಾಧ್ಯತೆ ಇದೆ. ಈ ಹಿಂದೆ ರಾಜ್ಯಪಾಲರ ಕ್ರಮ ವಿರೋಧಿಸಿ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ಕೂಡ ಸಿದ್ದರಾಮಯ್ಯ ಸಂಪುಟ ಸಭೆಯಿಂದ ಹೊರಗುಳಿದಿದ್ದರು. ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಬಗ್ಗೆ ಬೆಂಗಳೂರಿನಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಪ್ರತಿಕ್ರಿಯಿಸಿದ್ದು, ನಿಶ್ಚಿತವಾಗಿ ಕಾನೂನು ಹೋರಾಟದಲ್ಲಿ ನಾವು ಜಯ ಗಳಿಸುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ: ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ, ಕಾನೂನು ಸಮಾಲೋಚನೆಯಲ್ಲಿ ಸಿಎಂ
ನಾವು ಕಾನೂನು ಹೋರಾಟದಲ್ಲಿ ಜಯಗಳಿಸಲಿದ್ದೇವೆ. ಇದರ ಪರಿಣಾಮ ಕೇಂದ್ರ ಸರ್ಕಾರ ಕೂಡ ಪಶ್ಚಾತ್ತಾಪ ಪಡಲಿದೆ. ರಾಜ್ಯಪಾಲರು ಕೇಂದ್ರದ ಕೈಗೊಂಬೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ. ನಾವೆಲ್ಲ ಸಚಿವರು, ಶಾಸಕರು ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದೇವೆ. ಸಿದ್ದರಾಮಯ್ಯ ನೇತೃತ್ವದಲ್ಲೇ ನಾವು 136 ಸೀಟುಗಳನ್ನು ಗೆದ್ದಿದ್ದೇವೆ. ಅರಸು ಬಳಿಕ 5 ವರ್ಷ ಪೂರೈಸಿದ ಹಿಂದುಳಿದ ವರ್ಗದ ನಾಯಕ ಎಂದು ಎಂಬಿ ಪಾಟೀಲ್ ಹೇಳಿದರು.
ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ