ಬೆಂಗಳೂರು, (ಸೆಪ್ಟೆಂಬರ್ 22): ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದ ಕೆಂಪಣ್ಣ ಆಯೋಗದ ವರದಿ ಮತ್ತೆ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ‘ರೀಡೂ’ ಹೆಸರಿನಲ್ಲಿ ಅರ್ಕಾವತಿ ಬಡಾವಣೆಯ ಭೂಮಿ ಡಿನೋಟಿಫಿಕೇಶನ್ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ಆಯೋಗದ ವರದಿ ಮತ್ತು ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರ ಮತ್ತು ರಾಜಭವನದ ಮಧ್ಯೆ ಸಂಘರ್ಷದ ಬೆನ್ನಲ್ಲೇ 2013-18ರ ಅವಧಿಯ ವಿವರಣೆಯನ್ನು ರಾಜ್ಯಪಾಲರು ಕೇಳಿದ್ದಾರೆ. ಇದರೊಂದಿಗೆ ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಜಂಗೀಕುಸ್ತಿ ಮತ್ತೊಂದು ಹಂತಕ್ಕೆ ಹೋಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿ ಮೇಲಿನ ತೀರ್ಪು ಅನ್ನು ಹೈಕೋರ್ಟ್ ನೀಡಲು ಬಾಕಿ ಇರುವ ಮಧ್ಯೆಯೇ, ಅರ್ಕಾವತಿ ಬಡಾವಣೆಗೆ ಸಂಬಂಧಿಸಿದಂತೆ ಕೆಂಪಣ್ಣ ವಿಚಾರಣಾ ಆಯೋಗದ ವರದಿಯನ್ನು ರಾಜ್ಯಪಾಲರು ಕೇಳಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ, ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲರು
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ರಾಜ್ಯಪಾಲರು ಬರೆದಿರುವ ಪತ್ರವನ್ನು ಉಲ್ಲೇಖಿಸಿ, ಆಯೋಗದ ವರದಿಗೆ ಸಂಬಂಧಿಸಿದ ಕಡತವನ್ನು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನಗರಾಭಿವೃದ್ಧಿ ಇಲಾಖೆ ಇದೇ 11ರಂದು ಸಲ್ಲಿಸಿದೆ.
ಸದ್ಯ ನಗರಾಭಿವೃದ್ಧಿ ಇಲಾಖೆಯು ಅರ್ಕಾವತಿ ಹಗರಣದ ಕೆಂಪಣ್ಣ ವಿಚಾರಣಾ ಆಯೋಗದ ವರದಿಯನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸಲ್ಲಿಸಿದೆ. ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ರಾಜೇಶ್ ಎಸ್.ಸೂಳಿಕೇರಿ ಅವರು ಸೆ.11ರಂದು ವರದಿ ಜೊತೆಗೆ ಸಂಬಂಧಪಟ್ಟ ಕಡತವನ್ನು ಡಿಸಿಎಂ ಡಿಕೆ ಶಿವಕುಮಾರ್ಗೆ ಸಲ್ಲಿಕೆ ಮಾಡಿದ್ದಾರೆ.
ಇದರ ಮಧ್ಯ ಕೆಂಪಣ್ಣ ವರದಿ ಬಹಿರಂಗಕ್ಕೆ ಈಗಾಗಲೇ ಮುಖ್ಯಮಂತ್ರಿಗೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪತ್ರ ಬರೆದಿದ್ದಾರೆ. ಇದೀಗ ಆ ವರದಿ ಡಿಕೆ ಶಿವಕುಮಾರ್ ಹಾಗೂ ಸರ್ಕಾರ ಏನೂ ಮಾಡುತ್ತೆ ಎಂಬ ಬಗ್ಗೆ ಕುತೂಹಲ ಮೂಡಿಸಿದೆ.
ಅರ್ಕಾವತಿ ಬಡಾವಣೆ ನಿರ್ಮಾಣಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸ್ವಾಧೀನಪಡಿಸಿಕೊಂಡಿದ್ದ ಜಮೀನಿನಲ್ಲಿ 540 ಎಕರೆಯನ್ನು ಹಿಂದೆ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ‘ರೀಡೂ’ ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫೈ ಮಾಡಿದ್ದಾರೆ ಎಂದು, ಅಂದು ವಿರೋಧ ಪಕ್ಷದ ನಾಯಕರಾಗಿದ್ದ ಜಗದೀಶ ಶೆಟ್ಟರ್ ಅವರು ವಿಧಾನಸಭೆ ಅಧಿವೇಶನದಲ್ಲಿಯೇ ಆರೋಪ ಮಾಡಿದ್ದರು.
ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ಜಟಾಪಟಿಗೆ ಕಾರಣವಾಗಿದ್ದ ಈ ಪ್ರಕರಣದ ವಿಚಾರಣೆಗೆ 2014ರ ಆಗಸ್ಟ್‌ನಲ್ಲಿ ನ್ಯಾ. ಕೆಂಪಣ್ಣ ನೇತೃತ್ವದಲ್ಲಿ ಆಯೋಗವನ್ನು ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೇಮಿಸಿತ್ತು. ಅರ್ಕಾವತಿ ಬಡಾವಣೆಗೆ ಸ್ವಾಧೀನಪಡಿಸಿಕೊಂಡಿದ್ದ ಜಮೀನಿನಲ್ಲಿ 2004ರಿಂದ 2014ರವರೆಗೆ 983 ಎಕರೆ ವಿಸ್ತೀರ್ಣವನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಹೊರಗಿಟ್ಟಿರುವ ಕುರಿತು ವಿಚಾರಣೆ ನಡೆಸಿ ವರದಿ ನೀಡುವಂತೆ ಆಯೋಗಕ್ಕೆ ಸೂಚಿಸಿತ್ತ
2017ರ ಆಗಸ್ಟ್‌ನಲ್ಲಿ ಆಯೋಗವು 1,861 ಪುಟಗಳ ವರದಿಯನ್ನು ರಾಜ್ಯ ಸರ್ಕಾರದ ಅಂದಿನ ಮುಖ್ಯ ಕಾರ್ಯದರ್ಶಿ ಸುಭಾಶ್‌ಚಂದ್ರ ಕುಂಠಿಯಾ ಅವರಿಗೆ ಸಲ್ಲಿಸಿತ್ತು. ಈ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಅಂದಿನ ಸರ್ಕಾರ ಮಂಡಿಸಿತ್ತು. ಅದನ್ನು ಒಪ್ಪಿದೆಯೋ ಅಥವಾ ತಿರಸ್ಕರಿಸಿದೆಯೋ ಎಂಬುದನ್ನು ಬಹಿರಂಗಪಡಿಸಿರಲಿಲ್ಲ. ನಿಯಮಾನುಸಾರ, ವಿಧಾನ ಮಂಡಲದ ಉಭಯ ಸದನಗಳಲ್ಲಿಯೂ ಮಂಡಿಸಿರಲಿಲ್ಲ. ಆ ಬಳಿಕ, ಅಧಿಕಾರಕ್ಕೆ ಬಂದ ಎಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಗಳು ಇದರ ಬಗ್ಗೆ ಮೌನ ವಹಿಸಿದ್ದವು. ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ, ಕಾಂಗ್ರೆಸ್ ಪಕ್ಷವು ಶೇ 40ರಷ್ಟು ಕಮಿಷನ್ ಆರೋಪ ಮಾಡಿತ್ತು. ಅದಕ್ಕೆ ತಿರುಗೇಟು ನೀಡಿದ್ದ ಬೊಮ್ಮಾಯಿ, ಅರ್ಕಾವತಿ ಹಗರಣವನ್ನು ಹೊರತಂದು ಶಿಕ್ಷೆಗೆ ಗುರಿಪಡಿಸುತ್ತೇವೆ ಎಂದು ಎಚ್ಚರಿಸಿದ್ದರು. ಆದರೆ, ಯಾವುದೇ ಕ್ರಮವೂ ಆಗಿರಲಿಲ್ಲ. ಕೆಂಪಣ್ಣ ಆಯೋಗವು ತಮ್ಮನ್ನು ದೋಷಮುಕ್ತಗೊಳಿಸಿ ವರದಿ ನೀಡಿದೆ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ