
ಕರ್ನಾಟಕ ಸರ್ಕಾರಿ ಕೆಲಸವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಉತ್ತಮ ಅವಕಾಶ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಖಾಲಿ ಇರುವ 21 ಸ್ಟೆನೋಗ್ರಾಫರ್ ಗ್ರೇಡ್-3 (Stenographer Grade-III) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 21 ಸ್ಟೆನೋಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 44,425 ರಿಂದ 83,700ರೂ. ಶ್ರೇಣಿಯಲ್ಲಿ ವೇತನ ದೊರೆಯಲಿದೆ. ಉದ್ಯೋಗದ ಸ್ಥಳ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿ, ಪಿಯುಸಿ (PUC) ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ಜೊತೆಗೆ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಯಾಗಿರಬೇಕು. ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.
ಸರ್ಕಾರದ ನಿಯಮಾವಳಿಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಪ್ರವರ್ಗ 2A, 2B, 3A, ಮತ್ತು 3B ಅಭ್ಯರ್ಥಿಗಳಿಗೆ 3 ವರ್ಷ ಹಾಗೂ SC, ST ಮತ್ತು Cat-I ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಇರಲಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200ರೂ. ಮತ್ತು OBC ಅಭ್ಯರ್ಥಿಗಳಿಗೆ 100ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ
ಅಭ್ಯರ್ಥಿಗಳನ್ನು ಶೀಘ್ರಲಿಪಿ, ಬೆರಳಚ್ಚು ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಆಸಕ್ತರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆಗಸ್ಟ್ 17ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿದೆ. ಕೊನೆಯ ದಿನದವರೆಗೂ ಕಾಯದೆ ಅರ್ಹ ಉದ್ಯೋಗಾಕಾಂಕ್ಷಿಗಳು ತಕ್ಷಣವೇ ಅರ್ಜಿ ಸಲ್ಲಿಸುವುದು ಸೂಕ್ತ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ bengalururural.dcourts.gov.in ಭೇಟಿ ನೀಡಿ.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:27 pm, Fri, 21 August 26