ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಯ ನಿವೃತ್ತ ನೌಕರರಿಗೆ ಶಾಕ್ ಕೊಟ್ಟ ಸರ್ಕಾರ
ಸರ್ಕಾರದ ಸಚಿವಾಲಯ ಮತ್ತು ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿ ಮತ್ತು ನೌಕರರಿಗೆ ರಾಜ್ಯ ಸರ್ಕಾರ ಶಾಕ್ ಕೊಟ್ಟಿದೆ.
ಬೆಂಗಳೂರು, (ಜನವರಿ 23): ಸರ್ಕಾರದ ಸಚಿವಾಲಯ ಮತ್ತು ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿ ಮತ್ತು ನೌಕರರನ್ನು (retired employees) ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಆದೇಶಿಸಿದ್ದಾರೆ. ಆ ಹುದ್ದೆಗೆ ಹಾಲಿ ಸರ್ಕಾರಿ ಅಧಿಕಾರಿಗಳು, ನೌಕರರನ್ನೇ ನಿಯೋಜಿಸಲು ಆದೇಶದಲ್ಲಿ ಸೂಚಿಸಿದ್ದಾರೆ.
ನಿವೃತ್ತ ನೌಕರರ ನೇಮಕಕ್ಕೆ ಕಡಿವಾಣ ಹಾಕಲು ಸೂಚಿಸಿದ್ದ ಸಿಎಂ
ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನಿವೃತ್ತ ಸರ್ಕಾರಿ ನೌಕರರನ್ಜು ತಕ್ಷಣ ಕರ್ತವ್ಯದಿಂದ ಬಿಡುಗಡೆಗೊಳಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಸೇರಿದಂತೆ ರಾಜ್ಯ ಸರ್ಕಾರ ಕೆಲವು ಇಲಾಖೆಗಳಲ್ಲಿ ಮತ್ತು ಸಚಿವಾಲಯದಲ್ಲಿ ಅನಗತ್ಯ ಹುದ್ದೆಗಳನ್ನು ಸೃಷ್ಟಿಸಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ನೌಕರರನ್ನು ಸಮಾಲೋಚಕರು, ವಿಶೇಷ ಸಂಪನ್ಮೂಲ ವ್ಯಕ್ತಿಗಳಾಗಿ ನೇಮಿಸಿಕೊಳ್ಳಲಾಗಿದೆ. ಗ್ರೂಪ್ ವೃಂದದ ಕೆಲವು ಹುದ್ದೆಗಳಿಗೂ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಹೀಗೆ ನೇಮಿಸಿಕೊಂಡ ನಿವೃತ್ತ ನೌಕರರಿಗೆ ವೇತನ, ವಾಹನ ಸೇರಿದಂತೆ ಮತ್ತಿರ ಸೌಲಭ್ಯ ನೀಡಲಾಗುತ್ತಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಆರ್ಥಿಕ ಹೊರೆ ಆಗುತ್ತಿದೆ. ಅಲ್ಲದೇ ಕಾರ್ಯಕ್ಷಮತೆಯ ಗುಣಮಟ್ಟ ಹಾಗೂ ಉತ್ತರದಾಯಿತ್ವದ ಕೊರತೆಯೂ ಎದ್ದು ಕಾಣುತ್ತಿದೆ ಎಂದು ಮುಖ್ಯ ಕಾರ್ಯದರ್ಶಿಗೆ ಬರೆದ ಟಿಪ್ಪಣಿಯಲ್ಲಿ ಸಿಎಂ ಸಿದ್ದರಾಮಯ್ಯ ಉಲೇಖಿಸಿದ್ದರು.
ಅಲ್ಲದೇ ಗುತ್ತಿಗೆ, ಹೊರ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡವರನ್ನು ಬಿಡುಗಡೆ ಮಾಡಿ ಈ ಹುದ್ದೆಗಳಿಗೆ ಹಾಲಿ ಸರ್ಕಾರಿ ಕರ್ತವ್ಯದಲ್ಲಿರುವ ಅಧಿಕಾರಿ, ಸಿಬ್ಬಂದಿಯನ್ನು ನಿಯೋಜನೆ ಮಾಡಬೇಕೆಂದು ಸಿಎಂ ತಿಳಿಸಿದ್ದರು.
ಅದರಂತೆ ಇದೀಗ ಮುಖ್ಯ ಕಾರ್ಯದರ್ಶಿ, ಸರ್ಕಾರದ ಸಚಿವಾಲಯ ಮತ್ತು ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿ ಮತ್ತು ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸುವಂತೆ ಆದೇಶಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.