AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಾದ್ಯಂತ ವರುಣನ ರೌದ್ರಾವತಾರ: ಸಿಡಿಲಿಗೆ ಇಬ್ಬರು ಬಲಿ; ಮರ-ಕಂಬಗಳು ಬಿದ್ದು ಭಾರೀ ಅವಾಂತರ

ಕರ್ನಾಟಕದ ಹಲವೆಡೆ ಗಾಳಿ ಸಮೇತ ಭಾರಿ ಮಳೆ ಅಬ್ಬರಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಅವಾಂತರಗಳು ಸಂಭವಿಸಿವೆ. ಸಿಡಿಲು ಬಡಿದು ರಾಯಚೂರಿನ ಲಿಂಗಸಗೂರು ಮತ್ತು ಧಾರವಾಡದ ಕವಲಗೇರಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಉತ್ತರ ಕನ್ನಡದಲ್ಲಿ ಮೂರು ಹಸುಗಳು ಬಲಿಯಾಗಿವೆ. ಭಾರೀ ಮಳೆಗೆ ಹಲವೆಡೆ ರಸ್ತೆಗಳು ಜಲಾವೃತಗೊಂಡು, ಮರಗಳು ಉರುಳಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ರಾಜ್ಯಾದ್ಯಂತ ವರುಣನ ರೌದ್ರಾವತಾರ: ಸಿಡಿಲಿಗೆ ಇಬ್ಬರು ಬಲಿ; ಮರ-ಕಂಬಗಳು ಬಿದ್ದು ಭಾರೀ ಅವಾಂತರ
ಮಳೆ Image Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on: May 17, 2026 | 10:04 PM

Share

ಬೆಂಗಳೂರು, ಮೇ 17: ರಾಜ್ಯದ ಹಲವೆಡೆ ಮಳೆ ಆರ್ಭಟಿಸುತ್ತಿದೆ. ಮಳೆ (Rain) ಗಾಳಿಗೆ ಜನ ತತ್ತರಿಸಿ ಹೋಗಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ಸಿಡಿಲು ಬಡಿದು 45 ವರ್ಷದ ಕರಿಯಪ್ಪ ಎಂಬುವವರು ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್‌ಗೆ ಗೊಬ್ಬರ ತುಂಬುತ್ತಿದ್ದಾಗ ಸಿಡಿಲು ಬಡಿದಿದ್ದು, ಮತ್ತೊಬ್ಬರಿಗೆ ಗಾಯವಾಗಿದೆ. ಧಾರವಾಡದ ಕವಲಗೇರಿಯಲ್ಲಿ 36 ವರ್ಷದ ಜಯಶ್ರಿ ಎಂಬುವವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ (death).

ಸಿಡಿಲು ಬಡಿದು ವ್ಯಕ್ತಿ ಸಾವು: ಮತ್ತೊಬ್ಬರಿಗೆ ಗಂಭೀರ ಗಾಯ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಕೋಮಲಾಪುರ ಗ್ರಾಮದ ಕರಿಯಪ್ಪ ಗೆನ್ನಾಕಿಹಾಳ್ (45) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಬಸವರಾಜ್ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Karnataka Weather Forecast: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ, ಎಲ್ಲೆಲ್ಲಿ?

ಗ್ರಾಮದಲ್ಲಿ ಟ್ರ್ಯಾಕ್ಟರ್‌ಗೆ ಗೊಬ್ಬರ ತುಂಬುತ್ತಿದ್ದ ವೇಳೆ ಏಕಾಏಕಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಕರಿಯಪ್ಪ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಜೊತೆಗಿದ್ದ ಬಸವರಾಜ್‌ಗೂ ಸಿಡಿಲು ಬಡಿದು ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದುಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಮಹಿಳೆ ಸಾವು

ಇನ್ನು ಧಾರವಾಡ ಜಿಲ್ಲೆಯಲ್ಲಿ ಸುರಿದ ಭಾರೀ ಸಿಡಿಲು ಸಹಿತ ಮಳೆಗೆ ಓರ್ವ ಮಹಿಳೆ ಬಲಿಯಾಗಿದ್ದಾರೆ. ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಮೃತ ಮಹಿಳೆಯನ್ನು ಕವಲಗೇರಿಯ ಜಯಶ್ರೀ ಶಿರಸಂಗಿ (36) ಎಂದು ಗುರುತಿಸಲಾಗಿದೆ. ಪತಿ ಹನುಮಂತಪ್ಪ ಶಿರಸಂಗಿ ಜೊತೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಜಯಶ್ರೀ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಹನುಮಂತಪ್ಪ ಅವರಿಗೂ ಗಾಯಗಳಾಗಿದ್ದು, ಅವರನ್ನು ಕೂಡಲೇ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಡಿಲು ಬಡಿದು ಮೂರು ಹಸುಗಳು ಸಾವು

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ಸಿಡಿಲು ಬಡಿದು ಮೂರು ಹಸುಗಳು ಸ್ಥಳದಲ್ಲೇ ಮೃತಪಟ್ಟಿವೆ. ಜೊತೆಗೆ ಮಂಗಳವಾಡದ ಸರ್ಕಾರಿ ಪ್ರೌಢಶಾಲೆ ಕಟ್ಟಡಕ್ಕೂ ಹಾನಿಯಾಗಿದೆ. ಮೃತಪಟ್ಟ ಹಸುಗಳು ಗ್ರಾಮದ ರೋಮನ್ ಬಾವಟಿಸ್ ದಾಲ್ಮತ್ ಎಂಬುವವರಿಗೆ ಸೇರಿದ್ದಾಗಿವೆ. ಸಿಡಿಲಿನ ತೀವ್ರತೆಗೆ ಸರ್ಕಾರಿ ಪ್ರೌಢಶಾಲೆ ಕಟ್ಟಡದ ಮೇಲ್ಛಾವಣಿಗೂ ಹಾನಿಯಾಗಿದೆ.

ಮಳೆ ಆರ್ಭಟ: ಉರುಳಿದ ಮರ, ರಸ್ತೆ ಜಲಾವೃತ; ಜನಜೀವನ ಅಸ್ತವ್ಯಸ್ತ

ರಾಜ್ಯದ ಹಲವೆಡೆ ಭಾರಿ ಗಾಳಿ-ಮಳೆ ಅಬ್ಬರಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ್ದು, ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಭಾರಿ ಗಾಳಿ ಮಳೆಗೆ ಹುಬ್ಬಳ್ಳಿಯ ಮಂಜುನಾಥ ನಗರ ಹಾಗೂ ಆನಂದ ನಗರ ರಸ್ತೆಯಲ್ಲಿ ಮರ ಉರುಳಿ ಬಿದ್ದಿದೆ. ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿದ ಪಾಲಿಕೆ ಸಿಬ್ಬಂದಿ ಮರ ತೆರವುಗೊಳಿಸಿದ್ದಾರೆ.

ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​​ ಗಳು

ಇನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಭಾರಿ ಮಳೆಗೆ ರಸ್ತೆಗಳು ಜಲಾವೃತಗೊಂಡಿವೆ. ಕೆಂಚಲಾಪುರ ಓಣಿ, ಬನಶಂಕರಿ ದೇಗುಲದ ರಸ್ತೆ ಸಂಪೂರ್ಣ ನೀರಿನಿಂದ ಆವೃತವಾಗಿವೆ. ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರಿ ಗಾಳಿಗೆ ನಗರದ ಮಕಾನಗಲ್ಲಿ, ಕೆ.ಎಚ್.ಪಾಟೀಲ್ ಜಿಲ್ಲಾ ಕ್ರೀಡಾಂಗಣ ಬಳಿ ಬೃಹತ್ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಇಂದು ರವಿವಾರ ಮಾರ್ಕೆಟ್ ಬಂದ್ ಇದ್ದ ಕಾರಣ ಮಕಾನಗಲ್ಲಿಯಲ್ಲಿ ದೊಡ್ಡ ದುರಂತ ತಪ್ಪಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More