ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌: 3 ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್​!

| Updated By: ರಮೇಶ್ ಬಿ. ಜವಳಗೇರಾ

Updated on: Oct 21, 2024 | 3:37 PM

ಅತ್ಯಾಚಾರ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ. ಎರಡು ಅತ್ಯಾಚಾರ, ಒಂದು ಮಹಿಳೆ ಅಶ್ಲೀಲ ದೃಶ್ಯ ಸೆರೆಹಿಡಿದ ಪ್ರಕರಣದ ಜಾಮೀನು ಅರ್ಜಿ ವಜಾಗೊಂಡಿದ್ದು, ಇನ್ನೊಂದು ಅತ್ಯಾಚಾರ ಪ್ರಕರಣದ ಆದೇಶ ಪ್ರಕಟಿಸುವುದು ಬಾಕಿಯಿದೆ. ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್​ ಮೆಟ್ಟಿಲೇರಿದ್ದ ಪ್ರಜ್ವಲ್​ ರೇವಣ್ಣಗೆ ನಿರಾಸೆಯಾಗಿದೆ.

ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌: 3 ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್​!
ಪ್ರಜ್ವಲ್​ ರೇವಣ್ಣ
Follow us on

ಬೆಂಗಳೂರು, (ಅಕ್ಟೋಬರ್ 21): ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನುಗಾಗಿ ಹೈಕೋರ್ಟ್​ ಮೆಟ್ಟಿಲೇರಿದ್ದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್​ ರೇವಣ್ಣಗೆ ಹಿನ್ನೆಡೆಯಾಗಿದೆ. ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು (ಅಕ್ಟೋಬರ್ 21) ಕರ್ನಾಟಕ ಹೈಕೋರ್ಟ್​ ಏಕಸದಸ್ಯ ಪೀಠ ವಜಾಗೊಳಿಸಿದೆ. ಒಂದಲ್ಲ ಎರಡಲ್ಲ ನಾಲ್ಕು ಕೇಸ್​ಗಳ ಪೈಕಿ ಮೂರೂ ಪ್ರಕರಣಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಎರಡು ಅತ್ಯಾಚಾರ, ಒಂದು ಮಹಿಳೆ ಅಶ್ಲೀಲ ದೃಶ್ಯ ಸೆರೆಹಿಡಿದ ಪ್ರಕರಣದ ಜಾಮೀನು ಅರ್ಜಿ ವಜಾಗೊಂಡಿದ್ದು, ಇನ್ನೊಂದು ಅತ್ಯಾಚಾರ ಪ್ರಕರಣದ ಆದೇಶ ಪ್ರಕಟಿಸುವುದು ಬಾಕಿಯಿದೆ.

ಪ್ರಜ್ವಲ್‌ ವಿರುದ್ಧ ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ, ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದ ಆರೋಪದ ಸಂಬಂಧ ಪ್ರತ್ಯೇಕವಾಗಿ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ. ಈ ಪೈಕಿ ಮೂರು ಪ್ರಕರಣಗಳಲ್ಲಿ ಪ್ರಜ್ವಲ್‌ ಜಾಮೀನು ಕೋರಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇಂದು ವಜಾ ಮಾಡಿದೆ.

ಇನ್ನು ಪ್ರಜ್ವಲ್‌ ರೇವಣ್ಣ ಪರವಾಗಿ ವಕೀಲ ಜಿ ಅರುಣ್‌ ವಕಾಲತ್ತು ಹಾಕಿದ್ದು, ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದರೆ. ರಾಜ್ಯ ಸರ್ಕಾರದ ವಿಶೇಷ ತನಿಖಾ ದಳದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್‌ ಅವರು ಪ್ರತಿವಾದ ಮಂಡಿಸಿದ್ದಾರೆ.

ಇದನ್ನೂ ಓದಿ: ಬಲವಂತವಾಗಿ ಸೀರೆ, ಬ್ಲೌಸ್ ಬಿಚ್ಚಿಸಿ ದೌರ್ಜನ್ಯ: ಚಾರ್ಜ್​ಶೀಟ್​ನಲ್ಲಿ ಬಯಲಾಯ್ತು ಪ್ರಜ್ವಲ್ ರೇವಣ್ಣ ಕರ್ಮಕಾಂಡ

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣಗೆ ಸೇರಿದ ಗನ್ನಿಗಡ ತೋಟದ ಮನೆಯಲ್ಲಿನ ಕೆಲಸದಾಕೆಯ ದೂರಿನ ಅನ್ವಯ ದಾಖಲಾಗಿರುವ ಅತ್ಯಾಚಾರ ಪ್ರಕರಣ ಮತ್ತು ಪುತ್ರನಿಗೆ ಪ್ರತಿಷ್ಠಿತ ಶಾಲೆಯಲ್ಲಿ ಪ್ರವೇಶ ಕಲ್ಪಿಸುವ ನೆಪದಲ್ಲಿ ಹಾಸನದ ಮಹಿಳೆಯ ನಗ್ನ ಚಿತ್ರ/ವಿಡಿಯೊ ಸೆರೆ ಹಿಡಿದ ಆರೋಪಕ್ಕೆ ಸಂಬಂಧಿಸಿದ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದ ಪ್ರಜ್ವಲ್‌ ಅರ್ಜಿಗಳನ್ನು ಹೈಕೋರ್ಟ್‌ ತಿರಸ್ಕರಿಸಿದೆ. ಈ ಎರಡೂ ಪ್ರಕರಣಗಳು ಬೆಂಗಳೂರಿನ ಸಿಐಡಿ ಸೈಬರ್‌ ಠಾಣೆಯಲ್ಲಿ ದಾಖಲಾಗಿವೆ.

ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿರುವ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಇನ್ನೆರಡು ದಿನದಲ್ಲಿ ಪ್ರಕಟಿಸುವುದಾಗಿ ನ್ಯಾಯಾಲಯ ಹೇಳಿದೆ.

ಹಾಸನದ ಮೂಲದ ಮಹಿಳೆಯೊಬ್ಬರು ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಸಂಬಂಧ ಜಾಮೀನು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಏಕಸದಸ್ಯ ಪೀಠ ಜಾಮೀನು ನೀಡಲು ನಿರಾಕರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:02 pm, Mon, 21 October 24