ಜೆಪಿ ನಡ್ಡಾ ವಿರುದ್ಧದ ಎಫ್ಐಆರ್ ರದ್ದು; ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ತೀರ್ಪು
ವಿಧಾನಸಭಾ ಚುನಾವಣೆ ವೇಳೆ ವಿಜಯನಗರ ಜಿಲ್ಲೆ ಹರಪನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. 2023ರ ಮೇ 7ರಂದು ಬಹಿರಂಗ ಸಭೆಯಲ್ಲಿ ಭಾಷಣ ಮಾಡಿದ್ದ ನಡ್ಡಾ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತರಾಗಿ ಎಫ್ಐಆರ್ ದಾಖಲಿಸಿಕೊಂಡಿದ್ದರು.
ಧಾರವಾಡ: ಮತದಾರರಿಗೆ ಆಮಿಷವೊಡ್ಡಿದ ಆರೋಪದಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ವಿರುದ್ಧ ದಾಖಲಿಸಲಾಗಿದ್ದ ಎಫ್ಐಆರ್ ಅನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ನ (Karnataka High Court) ಧಾರವಾಡ ಪೀಠ ಮಹತ್ವದ ತೀರ್ಪು ನೀಡಿದೆ. ವಿಧಾನಸಭಾ ಚುನಾವಣೆ ವೇಳೆ ವಿಜಯನಗರ ಜಿಲ್ಲೆ ಹರಪನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. 2023ರ ಮೇ 7ರಂದು ಬಹಿರಂಗ ಸಭೆಯಲ್ಲಿ ಭಾಷಣ ಮಾಡಿದ್ದ ನಡ್ಡಾ ವಿರುದ್ಧ ಪೊಲೀಸರು ಮೇ 11ರಂದು ಸ್ವಯಂ ಪ್ರೇರಿತರಾಗಿ ಎಫ್ಐಆರ್ ದಾಖಲಿಸಿಕೊಂಡಿದ್ದರು. ಇದರ ರದ್ದತಿಗೆ ಮನವಿ ಮಾಡಿ ನಡ್ಡಾ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದರ ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ಎಫ್ಐಆರ್ ರದ್ದುಗೊಳಿಸಿ ತೀರ್ಪು ನೀಡಿದೆ.
ಜುಲೈ 8ರಂದು ನಡ್ಡಾ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ನಂತರ ಜುಲೈ 21ಕ್ಕೆ ವಿಚಾರಣೆ ನಡೆಸಿತ್ತು.
ಏನು ಹೇಳಿದ್ದರು ನಡ್ಡಾ?
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳಿಂದ ಮತದಾರರು ವಂಚಿತರಾಗಬೇಕಾಗುತ್ತದೆ ಎಂದು ಹೇಳಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಿಸಾನ್ ಸಮ್ಮಾನ್ ನಿಧಿ ಸೇರಿದಂತೆ ಕೇಂದ್ರದ ಹಲವು ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂದೂ ಅವರು ಹೇಳಿದ್ದರು.
ಇದನ್ನೂ ಓದಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಜೆಪಿ ನಡ್ಡಾಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್
ಈ ಭಾಷಣ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಜಾಗೃತ ವಿಭಾಗದ ಅಧಿಕಾರಿಗಳು ಹರಪ್ಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ನಂತರ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ನಡ್ಡಾ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಐಪಿಸಿ ಸೆಕ್ಷನ್ 171 ಎಫ್ ಅಡಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಕೇಸ್ ದಾಖಲಾಗಿತ್ತು. ಪ್ರಕರಣ ರದ್ದು ಕೋರಿ ಜೆಪಿ ನಡ್ಡಾ ಪರ ವಕೀಲ ವಿನೋದ್ ಕುಮಾರ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಮತದಾರರ ಮೇಲೆ ಪ್ರಭಾವ ಬೀರಿದ ಆರೋಪ ಎದುರಿಸುತ್ತಿದ್ದ ಪ್ರಕರಣದಿಂದ ಬಿಜೆಪಿ ರಾಷ್ಟ್ರಾಧ್ಯಕ್ಷರಿಗೆ ರಿಲೀಫ್ ಸಿಕ್ಕಿದಂತಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:54 pm, Mon, 7 August 23