
ಬೆಂಗಳೂರು, (ಜುಲೈ 08): ಗ್ರೆಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಕೆಲವು ವಾರ್ಡ್ಗಳಲ್ಲಿ ಪರ್ಯಾಯ ಎಸ್ಐಆರ್ (SIR) ನಡೆಸಲು ರಾಜ್ಯ ಚುನಾವಣಾ ಆಯೋಗದ (Karnataka Election Commission) ಆದೇಶ ಪ್ರಶ್ನಿಸಿ ವಿವೇಕ್ ಹಾಗೂ ಇತರರು ಹೈಕೋರ್ಟ್ಗೆ (Karnataka High Court) ರಿಟ್ ಅರ್ಜಿ ಸಲ್ಲಿಸಿದ್ದು, ಇಂದು (ಜುಲೈ 08) ಈ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠವು ರಾಜ್ಯ ಸರ್ಕಾರ, ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ.
ಜಿಬಿಎ ವ್ಯಾಪ್ತಿಯ ವಾರ್ಡ್ಗಳಲ್ಲಿ ಪರ್ಯಾಯ ಎಸ್ಐಆರ್ ನಡೆಸಲು ರಾಜ್ಯ ಚುನಾವಣಾ ಆಯೋಗವು ಜೂನ್ 19ರಂದು ಹೊರಡಿಸಿರುವ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿ ಎಂ ವಿವೇಕ್ ಸೇರಿದಂತೆ ಒಟ್ಟು ಐವರು ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಸರ್ಕಾರವು ಸಹ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೇಳಿದೆ. ಹೀಗಾಗಿ ಕೋರ್ಟ್, ರಾಜ್ಯ ಸರ್ಕಾರ, ರಾಜ್ಯ ಚುನಾವಣಾ ಆಯೋಗ, ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿ ವಿಚಾರಣೆಯನ್ನು ಜುಲೈ 15ಕ್ಕೆ ನಿಗದಿಪಡಿಸಿದೆ.
ಜಿಬಿಎ ವ್ಯಾಪ್ತಿಯಲ್ಲಿ ಪ್ರತ್ಯೇಕ ಎಸ್ಐಆರ್ ನಡೆಸಲಾಗುತ್ತಿದೆ. ಆದ್ರೆ, ಕೇಂದ್ರ ಚುನಾವಣಾ ಆಯೋಗದ SIR, ವೋಟರ್ ಲಿಸ್ಟ್ ಪರಿಗಣಿಸುತ್ತಿಲ್ಲ. ರಾಜ್ಯ ಚುನಾವಣಾ ಆಯೋಗದ ಈ ನಡೆಯಿಂದ ಮತದಾರರಲ್ಲಿ ಗೊಂದಲ ಹೆಚ್ಚಿದೆ. ಹೀಗಾಗಿ ಪ್ರತ್ಯೇಕ ಎಸ್ಐಆರ್ಗೆ ತಡೆ ನೀಡುವಂತೆ ರಿಟ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಕೇಂದ್ರ ಸರ್ಕಾರವು ಎಸ್ಐಆರ್ ನಡೆಸುವುದಾಗಿ 2025ರ ಅಕ್ಟೋಬರ್ 27ರಂದು ಪ್ರಕಟಿಸಿತ್ತು. ಅದರಂತೆ 2026ರ ಜೂ.16ರಂದು ರಾಜ್ಯದಲ್ಲಿ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಫ್ರೀಜ್ ಮಾಡಿತ್ತು. ಇದಾದ ಮೂರೇ ದಿನಗಳಲ್ಲಿ ಅಂದರೆ ಜೂ.19 ರಾಜ್ಯ ಚುನಾವಣಾ ಆಯೋಗ ಸಹ ಜಿಬಿಎಯ ಕೆಲವು ವಾರ್ಡ್ ಗಳ ಮತಪಟ್ಟಿ ಪರಿಷ್ಕರಣೆ ನಡೆಸಲು ಆದೇಶಿಸಿದೆ. ಅಲ್ಲದೇ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಜೂ.26ರಿಂದ ಈಗಾಗಲೇ ಜಿಬಿಎ ಸೇರಿ ರಾಜ್ಯಾದ್ಯಾಂತ ಎಸ್ಐಆರ್ ಮನೆ ಮನೆ ಸರ್ವೇ ಆರಂಭವಾಗಿದೆ. ಒಂದೇ ಅವಧಿಯಲ್ಲಿ ಪ್ರತ್ಯೇಕವಾಗಿ ಪರ್ಯಾಯ ಎಸ್ ಐ ಆರ್ ನಡೆಸುವುದರಿಂದ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಲಿವೆ. ಮೇಲಾಗಿ ಇದು ಕೇಂದ್ರ ಚುನಾವಣಾ ಆಯೋಗದ ನಿರ್ದೇಶನಗಳಿಗೆ ವಿರುದ್ಧವಾಗಿದೆ. ಹಾಗಾಗಿ ರಾಜ್ಯ ಚುನಾವಣಾ ಆಯೋಗವು ಜೂ.19ರಂದು ಹೊರಡಿಸಿರುವ ಆದೇಶ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
Published On - 1:03 pm, Wed, 8 July 26