ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ
ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ನೋಟಿಸ್ ಜಾರಿ ಮಾಡುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಪ್ರಕರಣದ ತನಿಖೆ ಸಿಬಿಐಗೆ ನೀಡುವಂತೆ ಸಾಮಾಜಿಕ ಕಾರ್ಯಕರ್ತರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಗುರುವಾರ ಹೈಕೋರ್ಟ್ನಲ್ಲಿ ನಡೆಯಿತು.
ಬೆಂಗಳೂರು, 10: ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪತ್ನಿಗೆ ನೋಟಿಸ್ ಜಾರಿಗೊಳಿಸುವಂತೆ ಹೈಕೋರ್ಟ್ (High Court) ಆದೇಶ ನೀಡಿದೆ. ಮುಡಾದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ 14 ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಗುರುವಾರ (ಜು.10) ನಡೆಯಿತು.
ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ನೋಟಿಸ್ ಜಾರಿಯಾಗಿರದ ಹಿನ್ನೆಲೆಯಲ್ಲಿ, ಈಗ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ನೋಟಿಸ್ ಜಾರಿಯಾಗದ ಪ್ರತಿವಾದಿಗಳಿಗೆ ನೋಟಿಸ್ ನೀಡಲು ಮುಖ್ಯ ನ್ಯಾ. ವಿ.ಕಾಮೇಶ್ವರ ರಾವ್ ಹಾಗೂ ಸಿ.ಎಂ.ಜೋಶಿ ಅವರಿದ್ದ ಪೀಠ ಸೂಚನೆ ನೀಡಿದೆ. ನ್ಯಾಯಾಲಯ ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿದೆ.
ಸಂಚಲನ ಸೃಷ್ಟಿಸಿದ್ದ ಪ್ರಕರಣ
ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನೇರವಾದ ಆರೋಪ ಕೇಳಿಬಂದಿತ್ತು. ಏಕೆಂದರೆ, ಸಿಎಂ ಪತ್ನಿ ಪಾರ್ವತಿ ಅವರಿಗೆ 14 ಸೈಟ್ಗಳನ್ನು ಅಕ್ರಮವಾಗಿ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಆ ನಂತರ ಇಡಿ ಕೂಡ ಪ್ರಕರಣ ದಾಖಲಿಸಿಕೊಂಡಿತ್ತು. ಬಳಿಕ ಪ್ರಕರಣ ದೊಡ್ಡ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸಿಎಂ ಪತ್ನಿ ಪಾರ್ವತಿ ಸೈಟ್ಗಳನ್ನು ಮುಡಾಕ್ಕೆ ವಾಪಸ್ ನೀಡಿದ್ದರು. ಉಳಿದಂತೆ, ಮುಡಾ ಹಗರಣದಲ್ಲಿನ ಹಣಕಾಸು ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಅಕ್ರಮವಾಗಿ ಹಂಚಿಕೆಯಾದ ಸೈಟ್ಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಸದ್ಯ ಇಡಿ ತನಿಖೆ ಪ್ರಗತಿಯಲ್ಲಿದೆ.
ಇದನ್ನೂ ಓದಿ: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ವಿಭಾಗೀಯ ಪೀಠ ನೋಟಿಸ್
ಏಕಸದಸ್ಯ ಪೀಠದಿಂದ ತಾತ್ಕಾಲಿಕ ರಿಲೀಫ್
ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾ ಗೊಳಿಸಿತ್ತು. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಪ್ರಕರಣವನ್ನು ಸಿಬಿಐಗೆ ನೀಡಲು ನಿರಾಕರಿಸಿ ಆದೇಶ ಹೊರಡಿಸಿತ್ತು. ನಂತರ ಸ್ನೇಹಮಯಿ ಕೃಷ್ಣ ಅವರು ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವಿಭಾಗೀಯ ಪೀಠ ಇಂದು ಕೃಷ್ಣ ಅವರ ಅರ್ಜಿಯ ವಿಚಾರಣೆಯನ್ನು ಮುಂದುವರಿಸಿ ಈ ಮೇಲಿನಂತೆ ಆದೇಶ ನೀಡಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:06 pm, Thu, 10 July 25







