
ಬೆಂಗಳೂರು, (ಏಪ್ರಿಲ್ 22): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಶಾಸಕ ಸ್ಥಾನವನ್ನು ಅಸಿಂಧು ಕೋರಿ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka high Court) ವಜಾಗೊಳಿಸಿದೆ. ಗ್ಯಾರಂಟಿ ಕಾರ್ಡ್ ಯೋಜನೆಗಳ (guarantee scheme) ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯನವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಮೈಸೂರಿನ(Mysuru) ವರುಣ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆಎಂ ಶಂಕರ್ ಅವರು ಚುನಾವಣಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಿಎಂ ಸಿದ್ದರಾಮಯ್ಯ ಸಹ ಆಕ್ಷೇಪಣೆ ಸಲ್ಲಿಸಿದ್ದರು. ಅಷ್ಟೇ ಅಲ್ಲದೇ ಈ ಚುನಾವಣಾ ತಕರಾರು ಅರ್ಜಿಯನ್ನು ವಜಾ ಮಾಡುವಂತೆ ಸಿದ್ದರಾಮಯ್ಯ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು ವಾದ ಮಂಡಿಸಿದ್ದರು. ಈ ವಾದವನ್ನು ಆಲಿಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ, ಶಂಕರ್ ಅವರ ತಕರಾರು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗಿದೆ. ಇದು ಲಂಚಕ್ಕೆ ಸಮವಾಗಿದ್ದು, ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ 123 (1) ಮತ್ತು ಸೆಕ್ಷನ್ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧ. ಹಾಗಾಗಿ, ಅಕ್ರಮ ಎಸಗುವ ಮೂಲಕ ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧು ಗೊಳಿಸಬೇಕು ಎಂದು ಕೆಎಂ ಶಂಕರ್ ಅವರು ಹೈಕೋರ್ಟ್ಗೆ ಚುನಾವಣಾ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು.
ಕಾಂಗ್ರೆಸ್ ಮತ್ತು ಅಭ್ಯರ್ಥಿ ಸಿದ್ದರಾಮಯ್ಯ ಅವರು ಪ್ರಕಟಿಸಿದ ಗ್ಯಾರಂಟಿ ಯೋಜನೆಗಳು ಕೊಡುಗೆ ಹಾಗೂ ಭರವಸೆ ಸ್ವರೂಪದ್ದಾಗಿವೆ. ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಅವರ ಸಮ್ಮತಿಯೊಂದಿಗೆ ಪ್ರಕಟಿಸಲಾಗಿದೆ. ಅವು ವರುಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಲು ಮತದಾರರನ್ನು ಪ್ರೇರೇಪಿಸಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.
ಇನ್ನು, ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಅವರು ಭರ್ಜರಿ ಜಯ ಗಳಿಸಿದ್ದಾರೆ. ಬಾದಾಮಿ ಕ್ಷೇತ್ರವನ್ನು ತೊರೆದು ವರುಣಾ ಕ್ಷೇತ್ರದಲ್ಲಿ ಬಂದು ನಿಂತ ಅವರಿಗೆ ಬಿಜೆಪಿಯ ವಿ ಸೋಮಣ್ಣ ಅವರು ಎದುರಾಳಿಯಾಗಿದ್ದರು. ಆದರೆ, ಸಿದ್ದರಾಮಯ್ಯ 46,163 ಮತಗಳಿಂದ ಗೆಲುವು ಸಾಧಿಸಿದ್ದರು. ಸಿದ್ದರಾಮಯ್ಯ ಅವರು 1,19,816 ಮತಗಳನ್ನು ಪಡೆದ್ದರೆ, ಸೋಮಣ್ಣ 73,653 ಮತಗಳನ್ನು ಪಡೆದು ಸೋಲೊಪ್ಪಿಕೊಂಡಿದ್ದರು. ಬಳಿಕ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮಖ್ಯಮಂತ್ರಿ ಹುದ್ದೆಗೇರಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:25 pm, Tue, 22 April 25