ಫೋಕ್ಸೋ ಕೇಸ್: ಬಿಎಸ್ ಯಡಿಯೂರಪ್ಪಗೆ ರಿಲೀಫ್ ನೀಡಿದ ಹೈಕೋರ್ಟ್
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ತಮ್ಮ ಮೇಲಿರುವ ಪೋಕ್ಸೊ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣದಲ್ಲಿ ಜಾಮೀನು ನೀಡುವ ಸಂದರ್ಭದಲ್ಲಿ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ಹೋಗದಂತೆ ಷರತ್ತು ವಿಧಿಸಿದೆ. ಇದರಿಂದ ರಾಜ್ಯದಲ್ಲಿ ಸಂಚರಿಸುವುದಕ್ಕೆ ಅವಕಾಶ ಇಲ್ಲವಾಗಿದೆ ಎಂದು ಹೇಳಿದ್ದು, ಷರತ್ತು ಸಡಿಸಲಿಸಬೇಕು ಎಂದು ಕೋರಿದ್ದಾರೆ. ಇದೀಗ ಈ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ.

ಬೆಂಗಳೂರು, ಜೂನ್ 08): ಪೋಕ್ಸೋ ಪ್ರಕರಣಕ್ಕೆ (pocso case) ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಅವರಿಗೆ ಕರ್ನಾಟಕ ಹೈಕೋರ್ಟ್ (Karnataka High Court ರಿಲೀಫ್ ನೀಡಿದೆ. ಜಾಮೀನು ನೀಡುವ ಸಂದರ್ಭದಲ್ಲಿ ಅನುಮತಿಯಿಲ್ಲದೇ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ ಅನ್ನು ಸಡಿಲಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಈ ಸಡಿಲಿಕೆ ಸಿಕ್ಕಿರುವುದರಿಂದ ಬಿಎಸ್ ಯಡಿಯೂರಪ್ಪ ಅವರು ಯಾವುದೇ ಕಾನೂನಾತ್ಮಕ ಅಡೆತಡೆ ಅಥವಾ ಮುಂಚಿತ ಅನುಮತಿಯ ಕಿರಿಕಿರಿ ಇಲ್ಲದೇ ಮುಕ್ತಾವಾಗಿ ದೇಶಾದ್ಯಂತ ಪ್ರವಾಸ ಕೈಗೊಳ್ಳಬಹುದಾಗಿದೆ.
ಮುಖ್ಯಾಂಶಗಳು
- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೊಕ್ಸೊ ಕೇಸ್
- ಜಾಮೀನು ಷರತ್ತು ಸಡಿಲಿಕೆ ಕೋರಿ ಬಿಎಸ್ ಯಡಿಯೂರಪ್ಪ ಮನವಿಯನ್ನು ಪುರಸ್ಕರಿಸಿದ ಕೋರ್ಟ್
- ಜಾಮೀನು ಸಂದರ್ಭದಲ್ಲಿ ಕೋರ್ಟ್ ಅನುಮತಿಯಿಲ್ಲದೇ ವ್ಯಾಪ್ತಿ ಬಿಟ್ಟು ತೆರಳದಂತೆ ಷರತ್ತು ವಿಧಿಸಲಾಗಿತ್ತು.
- ಇದೀಗ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ ಷರತ್ತು ಸಡಿಲಿಸಿದ ಹೈಕೋರ್ಟ್
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ದಾಖಲಾಗಿರುವ ಫೋಕ್ಸೋ ಪ್ರಕರಣ ಸಂಬಂಧ ಜಾಮೀನು ನೀಡುವ ಸಂದರ್ಭದಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ತು ಸಡಿಲಗೊಳಿಸಬೇಕೆಂದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನು ವಿಚಾರಣೆ ನಡೆಸಿದ ಕೋರ್ಟ್, ಯಡಿಯೂರಪ್ಪನವರಿಗೆ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಲಾಗಿದ್ದ ಷರತ್ತು ಸಡಿಲಿಕೆ ಮಾಡಿ ಆದೇಶಿಸಿದೆ.
ಇದನ್ನೂ ಓದಿ: BS Yediyurappa: ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್; ಸುಪ್ರೀಂಕೋರ್ಟ್ನಿಂದ ಮಹತ್ವದ ಆದೇಶ
ಪ್ರಕರಣದ ಹಿನ್ನೆಲೆ
2024ರ ಫೆಬ್ರವರಿ 2ರಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿಯ ತಾಯಿ ಮಾರ್ಚ್ 14, 2024ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಳೆಯ ಲೈಂಗಿಕ ದೌರ್ಜನ್ಯ ಪ್ರಕರಣವೊಂದಕ್ಕೆ ನ್ಯಾಯ ಒದಗಿಸುವಂತೆ ಕೋರಿ ಬಾಲಕಿ ಮತ್ತು ಆಕೆಯ ತಾಯಿ ಯಡಿಯೂರಪ್ಪ ಅವರನ್ನು ಭೇಟಿಯಾಗಲು ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೂರು ದಾಖಲಾದ ನಂತರ ಈ ಪ್ರಕರಣವನ್ನು ಸಿಐಡಿ (CID) ತನಿಖೆಗೆ ವಹಿಸಲಾಗಿದ್ದು, ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ದೋಷಾರೋಪಣ ಪಟ್ಟಿ (Chargesheet) ಸಲ್ಲಿಸಲಾಗಿದ್ದು, ಈಗಾಗಲೇ ಕೋರ್ಟ್ ಸಹ ಜಾಮೀನು ನೀಡಿತ್ತು.




