ಇನ್ಫೋಸಿಸ್ ಸಹ ಸಂಸ್ಥಾಪಕ ವಿರುದ್ಧದ ಜಾತಿ ನಿಂದನೆ ಪ್ರಕರಣಕ್ಕೆ ಕೋರ್ಟ್ ತಡೆ, ಏನಿದು ಕೇಸ್?
ಜಾತಿ ನಿಂದನೆ ಕೇಸ್ನಲ್ಲಿ ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಶ್ ಗೋಪಾಲಕೃಷ್ಣನ್ ಸೇರಿದಂತೆ ಮತ್ತಿತರರಿಗೆ ಬಿಗ್ ರಿಲೀಫ್ ಸಿಕ್ಕಿದೆ, ಸಣ್ಣ ದುರುಗಪ್ಪ ಎನ್ನುವರು ನೀಡಿದ ದೂರಿನ ಮೇರೆಗೆ ದಾಖಲಾಗಿದ್ದ ಪ್ರಕರಣಕ್ಕೆ ಇದೀಗ ಕರ್ನಾಟಕ ಹೈಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದೆ. ಹಾಗಾದ್ರೆ, ಏನಿದು ಪ್ರಕರಣ? ಎನ್ನುವ ವಿವರ ಇಲ್ಲಿದೆ.

ಬೆಂಗಳೂರು, (ಜನವರಿ 30): ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಶ್ ಗೋಪಾಲಕೃಷ್ಣನ್ ಸೇರಿದಂತೆ ಮತ್ತಿತರರ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಕೇಸ್ಗೆ ಹೈಕೋರ್ಟ್ ತಡೆ ನೀಡಿದೆ. ಸಣ್ಣ ದುರುಗಪ್ಪ ಎನ್ನುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್, ಕೇಸ್ ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಸೂಚಿಸಿತ್ತು. ಅದರಂತೆ ಸೋಮವಾರ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದ್ರೆ, ಇದೀಗ ಹೈಕೋರ್ಟ್ ಈ ಪ್ರಕರಣಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ.
ಈ ಪ್ರಕರಣಕ್ಕೆ ತಡೆ ಕೋರಿ ಕ್ರಿಶ್ ಗೋಪಾಲಕೃಷ್ಣನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಜಾತಿ ನಿಂದನೆ ಪ್ರಕರಣಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ.
2014ರಲ್ಲಿ ತನ್ನನ್ನು ಹನಿ ಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿಸಿ ಸೇವೆಯಿಂದ ವಜಾಗೊಳಿಸಲಾಗಿದೆ. ಅಲ್ಲದೇ ಜಾತಿ ನಿಂದಿಸಿ, ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿದ್ದರು ಎಂದು ಸಣ್ಣ ದುರುಗಪ್ಪ ಆರೋಪಿಸಿದ್ದರು. ಅಲ್ಲದೆ, ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ 2008ರಿಂದ 2025ರ ವರೆಗೆ ಜಾತಿನಿಂದನೆ ದೌರ್ಜನ್ಯ ನಡೆಸುತ್ತಾ ಬಂದಿದ್ದಾರೆ ಎಂದು ದೂರಿನಲ್ಲಿ ದುರುಗಪ್ಪ ಆರೋಪಿಸಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ಗೆ ಮನವಿ ಮಾಡಿದ್ದರು. ಇದನ್ನು ಪರಿಶೀಲಿಸಿದ ಕೋರ್ಟ್, ಈ ಬಗ್ಗೆ ಪ್ರಕರಣ ದಾಖಲಿಸುವಂತೆ ಹೇಳಿತ್ತು.
ಕೋರ್ಟ್ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸರು, ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಶ್ ಗೋಪಾಲಕೃಷ್ಣನ್ , ಶ್ರೀಧರ್ ವಾರಿಯರ್, ಸಂದ್ಯಾ ವಿಶ್ವೇಶ್ವರಯ್ಯ, ಹರಿ ಕೆವಿಎಸ್, ದಾಸಪ್ಪ, ಬಲರಾಮ್ ಪಿ, ಹೇಮಲತಾ ಮಹಿಷಿ, ಚಟ್ಟೋಪಾದ್ಯಾಯ ಕೆ, ಪ್ರದೀಪ್ ಡಿ ಸಾವ್ಕಾರ್, ಮತ್ತು ಮನೋಹರನ್ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.
Published On - 8:02 pm, Thu, 30 January 25