ಜನೌಷಧ ಕೇಂದ್ರ ಸ್ಥಗಿತಕ್ಕೆ ಹೈಕೋರ್ಟ್ ತಡೆ, ರಾಜ್ಯ ಸರ್ಕಾರಕ್ಕೆ ಹಿನ್ನಡೆ
ಬಡ ವರ್ಗದ ಜನರಿಗೆ ಕೈಗೆಟುಕುವ ದರದಲ್ಲಿ ಜೆನೆರಿಕ್ ಔಷಧಗಳನ್ನು ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳನ್ನು ಜಾರಿಗೆ ತರಲಾಗಿದೆ. ಆದ್ರೆ, ಸರ್ಕಾರ ಆಸ್ಪತ್ರೆ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದ್ರೆ, ಇದೀಗ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾದಂತಾಗಿದೆ.

ಬೆಂಗಳೂರು, ಜುಲೈ 08): ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು (janaushadhi kendra) ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ (Karnataka High Court)ತಡೆ ನೀಡಿದೆ. ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿತ್ತು. ಇದಕ್ಕೆ ಭಾರೀ ವೀರೋಧಗಳು ವ್ಯಕ್ತವಾಗಿದ್ದವು. ಅಲ್ಲದೇ ಸರ್ಕಾರದ ಈ ಕ್ರಮ ಪ್ರಶ್ನಿಸಿ 16 ಜನರು ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು (ಜುಲೈ 08) ಈ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ ,ಮುಂದಿನ ವಿಚಾರಣೆವರೆಗೂ ಅರ್ಜಿದಾರರ ಜನೌಷಧ ಕೇಂದ್ರ ಸ್ಥಗಿತ ಬೇಡ ಎಂದು ಮಧ್ಯಂತರ ಆದೇಶ ಹೊರಡಿಸಿದೆ.
ಜನೌಷಧ ಕೇಂದ್ರ ತೆರೆಯಲು ಮೂಲಸೌಕರ್ಯ ಕಲ್ಪಿಸಲು ವೆಚ್ಚವಾಗಿದೆ. ಜನರಿಗೆ ಶೇ.50ರಿಂದ ಶೇ.90ರ ರಿಯಾಯಿತಿ ದರದಲ್ಲಿ ಔಷಧ ನೀಡಲಾಗುತ್ತಿದೆ. ಸರ್ಕಾರದ ಆದೇಶದಿಂದ ತಮ್ಮ ಮೂಲಭೂತ ಹಕ್ಕಿಗೆ ಧಕ್ಕೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು. ಈ ವಾದ ಆಲಿಸಿದ ಹೈಕೋರ್ಟ್, ಮುಂದಿನ ವಿಚಾರಣೆವರೆಗೆ ಅರ್ಜಿದಾರರ ಜನೌಷಧ ಕೇಂದ್ರ ಸ್ಥಗಿತಗೊಳಿಸದಂತೆ ಮಧ್ಯಂತರ ಆದೇಶ ನೀಡಿದೆ.
ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನ ಔಷಧಿ ಕೇಂದ್ರಗಳನ್ನು ಬಂದ್ ಮಾಡಲು ನಿರ್ಧರಿಸಿದ ಸರ್ಕಾರ: ಕಾರಣ ಇಲ್ಲಿದೆ
ರಾಜ್ಯ ಆರೋಗ್ಯ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಅಂದರೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ಮಾತ್ರ ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಆದೇಶ ಈಗಾಗಲೇ ಜಿಲ್ಲಾ ಆರೋಗ್ಯಾಧಿಕಾರಿಗಳ ಕೈಸೇರಿದ್ದು, ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಪಿಎಂ ಜನ ಔಷಧ ಕೇಂದ್ರಗಳು ಬಾಗಿಲು ಮುಚ್ಚಿವೆ. ಇದಕ್ಕೆ ಬಿಜೆಪಿ ಸೇರಿದಂತೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬಡವರಿಗೆ ಕಡಿಮೆ ದರದಲ್ಲಿ ನೀಡುವ ಜನೌಷಧ ಕೇಂದ್ರಗಳನ್ನು ಮುಚ್ಚುವುದು ಸರಿಯಲ್ಲ. ರಾಜ್ಯ ಸರ್ಕಾರ ಆದೇಶವನ್ನು ವಾಪಸ್ ಪಡೆಯಬೇಕೆಂದು ವಿಪಕ್ಷಗಳು ಆಗ್ರಹಿಸಿದ್ದವು.
ರಾಜ್ಯ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರುಗಳು ಬ್ರಾಂಡೆಡ್ ಔಷಧಿಗಳನ್ನು ಹೊರಗಡೆಯಿಂದ ತರುವಂತೆ ರೋಗಿಗಳಿಗೆ ಸಲಹಾ ಚೀಟಿಗಳನ್ನು ನೀಡುವುದನ್ನು ಸರ್ಕಾರ ನಿಷೇಧಿಸಿದೆ. ಈ ಮೂಲಕ ಸರ್ಕಾರಿ ಆಸ್ಪತ್ರೆಗಳು ರೋಗಿಗಳಿಗೆ ಯಾವುದೇ ತರಹದ ಔಷಧಿಗಳನ್ನು ಹೊರಗೆ ಖರೀದಿಸುವಂತೆ ಶಿಫಾರಸ್ಸು ಮಾಡದಂತೆ ನೋಡಿಕೊಳ್ಳುವುದು ಸರ್ಕಾರದ ನೀತಿಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿನಲ್ಲಿನ ಜನ ಔಷಧಿ ಕೇಂದ್ರಗಳನ್ನು ತೆರೆಯುವುದು ಸರ್ಕಾರದ ನೀತಿಗೆ ವಿರುದ್ಧವಾಗಿದೆ. ಈ ಕಾರಣದಿಂದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನ ಔಷಧಿ ಕೇಂದ್ರಗಳನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಭಾರತೀಯ ಔಷಧ ಮಂಡಳಿಯು(ಬಿಪಿಪಿಐ) ಜನೌಷಧ ಕೇಂದ್ರಗಳಿಗೆ ನೋಡಲ್ ಸಂಸ್ಥೆಯಾಗಿದೆ. ಸದ್ಯ ಇಲಾಖೆ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತತ್ತಿರುವ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಲು, ಒಪ್ಪಂದದ ನಿಯಮಗಳ ಅನುಸಾರ ಕ್ರಮಕೈಗೊಳ್ಳಬೇಕು ಎಂದು ಹೇಳಲಾಗಿದೆ. ಅಲ್ಲದೇ ಪರಿಶೀಲನೆ ಹಂತದಲ್ಲಿ ಇರುವ 31 ಜನ ಔಷಧ ಕೇಂದ್ರಗಳ ಅರ್ಜಿಗಳಿಗೆ ಅನುಮತಿ ನೀಡದಂತೆ ಆರೋಗ್ಯ ಇಲಾಖೆಗೆ ಸರ್ಕಾರ ಸೂಚನೆ ನೀಡಿತ್ತು. ಆದ್ರೆ,,ಇದೀಗ ಇದಕ್ಕೆ ಹೈಕೋರ್ಟ್ ತಡೆ ನೀಡಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:56 pm, Tue, 8 July 25



