ಬೆಂಗಳೂರು, ಡಿಸೆಂಬರ್ 19: ಕೊರೊನಾ ವೈರಸ್ನ ಜೆಎನ್1 ರೂಪಾಂತರಿಯಿಂದಾಗಿ (Coronavirus JN1) ಕೋವಿಡ್-19 ಸೋಂಕು ಹರಡುವಿಕೆ ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿ (Covid 19 Guidelines) ಬಿಡುಗಡೆ ಮಾಡಿದೆ. ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ ವರದಿಯನ್ನು ಇಲಾಖೆಗೆ ಸಲ್ಲಿಸಲು ಸೂಚನೆ ನೀಡಲಾಗಿದೆ. ತೀವ್ರ ಶ್ವಾಸಕೋಶ ಹಾಗೂ ಉಸಿರಾಟದ ಸಮಸ್ಯೆ ಇರುವವರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲು ಸೂಚಿಸಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ರಂದಿಪ್ ಅವರು ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಸದ್ಯಕ್ಕೆ ಯಾವುದೇ ರೀತಿಯ ನಿರ್ಬಂಧ ವಿಧಿಸುವುದಿಲ್ಲ ಎಂದು ತಿಳಿಸಿದ್ದಾರೆ. ಕೋವಿಡ್ – 19 ರಾಜ್ಯ ತಾಂತ್ರಿಕ ಸಲಹಾ ಸಮಿತಿ 202ನೇ ಸಭೆಯ ಶಿಫಾರಸಿನ ಅನ್ವಯ ಈ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೋವಿಡ್ ಬಗ್ಗೆ ಎರಡು ಪ್ರತ್ಯೇಕ ಮಾರ್ಗಸೂಚಿಗಳನ್ನು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ. ಒಂದು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ, ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆಗಿದ್ದರೆ ಮತ್ತೊಂದು ಸಾರ್ವಜನಿಕ ಸಲಹಾ ಮಾರ್ಗಸೂಚಿಯಾಗಿದೆ. ಜಿಲ್ಲಾಧಿಕಾರಿ, ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕೋವಿಡ್ ಸರ್ವೇಕ್ಷಣೆ ಹಾಗೂ ಮೇಲುಸ್ತುವಾರಿ ಕೈಗೊಳ್ಳುವ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸಲಾಗಿದೆ. ಮತ್ತೊಂದಡೆ, ಕೋವಿಡ್ ಹೆಚ್ಚಳ ಆಗುತ್ತಿರುವ ಕಾರಣ ಸಾರ್ವಜನಿಕರಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ: ಕೊರೊನಾ ಜೆಎನ್1 ಭೀತಿ: ಮದ್ದೂರು ತಾಲೂಕಿನ ವ್ಯಕ್ತಿಗೆ ಕೋವಿಡ್ ಪಾಸಿಟಿವ್
ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗಿರುವುದು ಮತ್ತು ಶಬರಿಮಲೆ ಅಯ್ಯಪ್ಪ ಭಕ್ತರ ಓಡಾಟದ ಬಗ್ಗೆ ಆತಂಕ ವ್ಯಕ್ತವಾಗಿರುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ. ಸದ್ಯ ನಾವು ಕೇರಳ ಗಡಿ ಭಾಗದಲ್ಲಿ ನಿಗಾ ವಹಿಸಿದ್ದೇವೆ. ಹಾಗೆಂದು ಅಲ್ಲಿಗೆ ಹೋಗಿ ಬರುವ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸುತ್ತಿಲ್ಲ. ಬದಲಾಗಿ ಶಬರಿಮಲೆಗೆ ಹೋಗಿಬಂದವರಲ್ಲಿ ರೋಗ ಲಕ್ಷಣಗಳು ಇದ್ದರೆ ದಯವಿಟ್ಟು ನಿರ್ಲಕ್ಷ್ಯ ವಹಿಸಬಾರದು ಎಂದು ಮನವಿ ಮಾಡುತ್ತಿದ್ದೇವೆ. ಕಡ್ಡಾಯ ಕೋವಿಡ್ ಟೆಸ್ಟ್ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:28 pm, Tue, 19 December 23