ಬೆಂಗಳೂರು, ಏಪ್ರಿಲ್ 20: ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ (President’s Rule) ಹೇರಲು ಬಿಜೆಪಿ ಗೋಪ್ಯವಾಗಿ ಯೋಜನೆ ರೂಪಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ತುಂಬಾ ಚೆನ್ನಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ. ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಹಾಗೂ ರಾಜ್ಯದಲ್ಲಿ ಗುರುವಾರ ಒಂದೇ ದಿನ 12ಕ್ಕೂ ಹೆಚ್ಚು ಹತ್ಯೆಗಳಾದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ಟೀಕಿಸಿತ್ತು. ಇದಕ್ಕೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನೇಹಾ ಹಿರೇಮಠ್ರನ್ನು ಫಯಾಜ್ ಚಾಕುವಿನಿಂದ ಇರಿದು ಕೊಂದಿದ್ದ.
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕರ್ತವ್ಯ. ಅದನ್ನು ನಾವು ಮಾಡುತ್ತಿದ್ದೇವೆ ಎಂದು ಹೇಳಿದ ಸಿದ್ದರಾಮಯ್ಯ, ‘ವೈಯಕ್ತಿಕ ಕಾರಣದಿಂದ’ ನೇಹಾ ಕೊಲೆಯಾಗಿದೆ ಎಂದು ಹೇಳಿದ್ದಾರೆ.
ಈ ಮಧ್ಯೆ, ನೇಹಾ ಹತ್ಯೆಯನ್ನು ಶಿವಕುಮಾರ್ ಸಹ ಖಂಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಯಾರೇ ಕಾನೂನನ್ನು ಕೈಗೆ ತೆಗೆದುಕೊಂಡರೂ ನಾವು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಇದಕ್ಕೆ ಸರ್ಕಾರ ಬದ್ಧವಾಗಿದೆ. ಯಾರೊಬ್ಬರೂ (ಸರ್ಕಾರದಿಂದ) ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಶಿವಕುಮಾರ್ ಹೇಳಿದ್ದಾರೆ.
ಬಿಜೆಪಿ ನಮಗೆ ಬೆದರಿಕೆ ಹಾಕಲು ಪ್ರಯತ್ನಿಸುತ್ತಿದೆ. ಕರ್ನಾಟಕವು ಅತ್ಯುತ್ತಮ ಕಾನೂನು ಮತ್ತು ಸುವ್ಯವಸ್ಥೆಯನ್ನು ಹೊಂದಿದೆ. ಬಿಜೆಪಿಯವರು ರಾಷ್ಟ್ರಪತಿ ಆಡಳಿತವನ್ನು ಹೇರಲಿದ್ದೇವೆ ಎಂದು ಪರೋಕ್ಷವಾಗಿ ಮತದಾರರಿಗೆ ಹೇಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಆರ್ ಅಶೋಕ ಗೋಪ್ಯವಾಗಿ ಅದನ್ನೇ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿಯೇ ನಾಟಕ ಮಾಡುತ್ತಿದ್ದಾರೆ. ಆದರೆ ಅವರು ಅದನ್ನು ಮಾಡಲು ಸಾಧ್ಯವಿಲ್ಲ. ಇದು ಅಸಾಧ್ಯ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: ‘ನೇಹಾ ಹಿರೇಮಠ್ ಹತ್ಯೆ ಅತ್ಯಂತ ಹೀನ ಕೃತ್ಯ’: ಧ್ರುವ ಸರ್ಜಾ ಆಕ್ರೋಶ
‘ವೈಯಕ್ತಿಕ ಕಾರಣದಿಂದ ನೇಹಾ ಹತ್ಯೆ ನಡೆದಿದೆ’ ಎಂಬ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಹಳೆಯ ಕಥೆಯನ್ನೇ ಹಲವಾರು ಬಾರಿ ಪುನರಾವರ್ತಿಸಿದ್ದಾರೆ. ಕಾಂಗ್ರೆಸ್ ಯಾರನ್ನು ಮೂರ್ಖರನ್ನಾಗಿಸಲು ಪ್ರಯತ್ನಿಸುತ್ತಿದೆ? ಸೂಕ್ತ ತನಿಖೆ ನಡೆಸದೆ ಸಿಎಂ ಅವರೇ ಇಂತಹ ಹೇಳಿಕೆ ನೀಡಿದರೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಯನ್ನು ನಿರೀಕ್ಷಿಸಬಹುದೇ ಎಂದು ವಿಜಯೇಂದ್ರ ಪ್ರಶ್ನಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:02 am, Sat, 20 April 24