ಬೆಳಗಾವಿ, ಜೂನ್ 26: 2024-25 ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವರ್ಷ ಆರಂಭವಾಗಿದೆ. ಶಾಲಾ, ಕಾಲೇಜುಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು (Students) ಶಾಲೆಗಳತ್ತ ಮುಖ ಮಾಡಿದ್ದಾರೆ. ಸಾಕಷ್ಟು ವಿದ್ಯಾರ್ಥಿಗಳು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶದಲ್ಲಿ ಶಾಲಾ, ಕಾಲೇಜುಗಳಿಗೆ ತೆರಳಲು ಸರ್ಕಾರಿ ಬಸ್ಗಳನ್ನು ಅವಲಂಬಿಸಿದ್ದಾರೆ. ಆದರೆ ಸದ್ಯ ಇದೇ ಸಾರಿಗೆ ಬಸ್ಗಳು ಶಕ್ತಿ ಯೋಜನೆಯಿಂದ (Shakti scheme) ತುಂಬಿ ತುಳುಕುತ್ತಿದ್ದು, ವಿದ್ಯಾರ್ಥಿಗಳಿಗೆ ಜಾಗವಿಲ್ಲದಂತಾಗಿದೆ. ಇನ್ನು ಸರಿಯಾದ ಸಮಯಕ್ಕೆ ಬಸ್ಗಳು ಬಾರದ ಹಿನ್ನಲೆ ನಿಗದಿತ ಸಮಯಕ್ಕೆ ತಲುಪಲಾಗುತ್ತಿಲ್ಲ. ಹೀಗಾಗಿ ಬಸ್ ಸಂಖ್ಯೆ ಹೆಚ್ಚಳ ಮಾಡುವಂತೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಮಾಡಲಾಗಿದೆ.
ಶಕ್ತಿ ಯೋಜನೆಯಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಸ್ಯೆ ಆಗುತ್ತಿದೆ. ಶಕ್ತಿ ಯೋಜನೆ ಅನುಗುಣವಾಗಿ ಬಸ್ ಸಂಖ್ಯೆ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ಮಾಡಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಶುಭ ಸುದ್ದಿ; ಬರಲಿವೆ ಹೆಚ್ಚುವರಿ ಬಸ್
ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿ ಅನುಗುಣವಾಗಿ ಬಸ್ ಪಾಸ್ ವಿತರಣೆ ಮಾಡಬೇಕು. ಸರಿಯಾದ ಸಮಯಕ್ಕೆ ತರಗತಿಗಳಿಗೆ ತೆರಳಲು ಆಗುತ್ತಿಲ್ಲ. ಶಾಲಾ ತರಗತಿಗಳು ಪ್ರಾರಂಭವಾದರೂ ಬಸ್ ಪಾಸ್ ವಿತರಣೆ ಮಾಡಿಲ್ಲ. ನೂರಾರು ರೂ. ಖರ್ಚು ಮಾಡಿ ಶಾಲಾ ಕಾಲೇಜುಗಳಿಗೆ ಬರುತ್ತಿದ್ದಾರೆ. ಹೀಗಾಗಿ ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ಅದೇ ರೀತಿಯಾಗಿ ಗದಗ ನಗರದ ಹಳೆಯ ಡಿಸಿ ಕಚೇರಿ ಬಳಿ ಮಾನವ ಸರಪಳಿ ನಿರ್ಮಿಸಿ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಬಾಲಾ ಬಾದಾಮಿ ರಸ್ತೆ ತಡೆದು ಎಬಿವಿಪಿ ವತಿಯಿಂದ ಬೃಹತ್ ಪ್ರತಿಭಟನೆ ಮಾಡಲಾಗಿದೆ. ಪ್ರತಿಭಟನೆಯಿಂದಾಗಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು.
ಇದನ್ನೂ ಓದಿ: KSRTC Sudent Bus Pass: ವಿದ್ಯಾರ್ಥಿ ಬಸ್ ಪಾಸ್ ವಿತರಣೆ ಆರಂಭ; ದರ, ಅರ್ಜಿ ಸಲ್ಲಿಕೆ ವಿಧಾನ ಇಲ್ಲಿದೆ
ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಹೆಚ್ಚುವರಿ ಬಸ್ ಕಲ್ಪಿಸಿ ಮಕ್ಕಳಿಗೆ ಅನುಕೂಲವಾಗುವಂತೆ ಎನ್ಡಬ್ಲ್ಯು ಕೆಎಸ್ಆರ್ಟಿಸಿ ವಿಭಾಗ ನಿಯಂತ್ರಕರಿಗೆ ಮನವಿ ಸಲ್ಲಿಸಲಾಗಿದೆ.
ಶೈಕ್ಷಣಿಕ ವರ್ಷದ ಅನುಗುಣವಾಗಿ ಬಸ್ ಸೌಲಭ್ಯ ಕಲ್ಪಿಸಬೇಕು. ಸುಗಮ ಸಂಚಾರಕ್ಕೆ, ವಿದ್ಯಾರ್ಥಿಗಳ ಅನುಕೂಲಕ್ಕೆ ಬಸ್ ಸಂಖ್ಯೆ ಹೆಚ್ಚಳಕ್ಕೆ ಆಗ್ರಹಿಸಲಾಗಿದೆ. ಬಸ್ ಪಾಸ್ ನೀಡುವಲ್ಲಿ ವಿಳಂಬ ಮಾಡದೇ ಆದಷ್ಟು ಬೇಗ ವಿತರಿಸುವಂತೆ ಮನವಿ ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:02 pm, Wed, 26 June 24