ಬೆಂಗಳೂರು, ಏಪ್ರಿಲ್ 30: ಅಶ್ಲೀಲ ವಿಡಿಯೋ ಬಹಿರಂಗ ವಿಚಾರವಾಗಿ ಹಾಸನ (Hassan) ಸಂಸದ ಪ್ರಜ್ವಲ್ ರೇವಣ್ಣರನ್ನು (Prajwal Revanna) ಪಕ್ಷದಿಂದ ಅಮಾನತುಗೊಳಿಸಿ ಜೆಡಿಎಸ್ ಮಂಗಳವಾರ ಆದೇಶ ಹೊರಡಿಸಿದೆ. ಪಕ್ಷದ ಕೋರ್ ಕಮಿಟಿ ಸಭೆಯ ನಂತರ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಅಮಾನತು ನಿರ್ಧಾರ ಪ್ರಕಟಿಸಿದ್ದು, ರಾಷ್ಟ್ರೀಯ ಅಧ್ಯಕ್ಷರಿಗೆ ಶಿಫಾರಸು ಮಾಡಲಾಗಿದೆ ಎಂದು ಹೇಳಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ಪ್ರಜ್ವಲ್ ಅಮಾನತು ಮಾಡಿ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೆಆರ್ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
‘ಹಾಸನ ಲೋಕಸಭಾ ಕ್ಷೇತ್ರದ ಸದಸ್ಯ ಪ್ರಜ್ವಲ್ ರೇವಣ್ಣನವರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಪಕ್ಷದ ಘನತೆ ಮತ್ತು ಗೌರವಗಳಿಗೆ ಹಾಗೂ ಮುಖಂಡತ್ವಕ್ಕೆ ಸಾಕಷ್ಟು ಧಕ್ಕೆ ಉಂಟಾಗಿರುತ್ತದೆ. ಮುಂದುವರೆದು, ರಾಜ್ಯದಲ್ಲಿನ ಪ್ರಸ್ತುತ ಕಾಂಗ್ರೆಸ್ ಸರ್ಕಾರ ವಿಡಿಯೋಗಳ ಬಗ್ಗೆ ತನಿಖೆ ನಡೆಸಲು ಎಸ್ಐಟಿ ರಚಿಸಿದ್ದು, ತನಿಖಾ ತಂಡವು ಕಾರ್ಯಗಳನ್ನು ಪ್ರಾರಂಭಿಸಿದೆ. ಈ ಜೆಡಿಎಸ್ ಪಕ್ಷದ ಸಂವಿಧಾನ ಮತ್ತು ನಿಯಮಾವಳಿಗಳ ಅಡಿಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರಜ್ವಲ್ ರೇವಣ್ಣರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ರಾಷ್ಟ್ರೀಯ ಅಧ್ಯಕ್ಷರ ಅನುಮೋದನೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅಶ್ಲೀಲ ವಿಡಿಯೋ ಸಂಬಂಧ ಈಗಾಗಲೇ ರಾಜ್ಯ ಸರ್ಕಾಟ ಎಸ್ಐಟಿ ರಚನೆ ಮಾಡಿದ್ದು, ತನಿಖೆ ಪ್ರಗತಿಯಲ್ಲಿದೆ. ಈ ಮಧ್ಯೆ, ಪ್ರಕರಣದ ವರದಿಯನ್ನು ಮೂರು ದಿನಗಳಲ್ಲಿ ಆಯೋಗಕ್ಕೆ ಸಲ್ಲಿಸುವಂತೆ ಕರ್ನಾಟಕ ಡಿಜಿ-ಐಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ನೀಡಿದೆ.
ಇದನ್ನೂ ಓದಿ: ಅಶ್ಲೀಲ ವಿಡಿಯೋ ಪೆನ್ಡ್ರೈವ್ ಬಹಿರಂಗಕ್ಕೆ ಬಿಗ್ ಟ್ವಿಸ್ಟ್: ದೇವರಾಜೇಗೌಡಗಷ್ಟೇ ಕೊಟ್ಟಿದ್ದೆ ಎಂದ ಪ್ರಜ್ವಲ್ ಮಾಜಿ ಕಾರು ಚಾಲಕ
ಇಷ್ಟೇ ಅಲ್ಲದೆ, ಪ್ರಕರಣದ ಬಗ್ಗೆ ಕ್ರಿಮಿನಲ್ ತನಿಖೆಗೆ ಸೈಬರ್ ಕ್ರೈಂ ವಿಭಾಗಕ್ಕೆ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿದೆ. ವಿಡಿಯೋಗಳು ವೈರಲ್ ಆಗದಂತೆ ತಡೆಯಲು ಕ್ರಮ ಕೈಗೊಳ್ಳಬೇಕು. ಮಹಿಳೆಯರ ರಕ್ಷಣೆ ವಿಚಾರವಾಗಿ ಕ್ರಮ ಕೈಗೊಳ್ಳಬೇಕು ಎಂದು ಆಯೋಗ ಹೇಳಿದೆ.
ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ