ಬೆಂಗಳೂರು: ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಹೆಚ್ಚುತ್ತಿರುವ ಕೊವಿಡ್ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರು ಮತ್ತು ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ಮುಂದುವರೆಸಬೇಕೆಂದು ಅವರು ಕಿವಿಮಾತು ಹೇಳಿದ್ದಾರೆ.
ಕೊರೊನಾ 2ನೇ ಅಲೆ ತೀವ್ರಗತಿಯಲ್ಲಿ ಹರಡುತ್ತಿರುವ ಕಾರಣ ಅನೇಕ ಪರೀಕ್ಷೆಗಳನ್ನು ಕೇಂದ್ರ ಸರ್ಕಾರವೇ ಮುಂದೂಡಿದೆ. ಆದರೆ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳನ್ನು ನಡೆಯಲಿದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ ಎಂದು ಹಲವು ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಹಿಂದೆ ಪ್ರಾಯೋಗಿಕ ಪರೀಕ್ಷೆಗಳ ದಿನಾಂಕ ಪ್ರಕಟಿಸಿದ್ದ ಪಿಯು ಬೋರ್ಡ್
ಏಪ್ರಿಲ್ 28ರಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಕಾಲೇಜುಗಳ ಹಂತದಲ್ಲೇ ನಡೆಸಲು ಪಿಯು ಬೋರ್ಡ್ ಮಾರ್ಗಸೂಚಿ ಬಿಡುಗಡೆಗೊಳಿಸಿತ್ತು. ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೋವಿಡ್ ರಿಪೋರ್ಟ್ ಕಡ್ಡಾಯವಲ್ಲ, ದೇಹದ ಉಷ್ಣಾಂಶ ಪರಿಶೀಲಿಸಿ ಒಳಗೆ ಪ್ರವೇಶ ನೀಡಬೇಕು ಎಂದು ಮಾರ್ಗಸೂಚಿ ತಿಳಿಸಿತ್ತು. ಏಪ್ರಿಲ್ 28ರಿಂದ ಮೇ 18ರವರೆಗೆ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಬಳಿಕ ಆಯಾ ಕಾಲೇಜುಗಳು ಆನ್ಲೈನ್ನಲ್ಲಿ ಅಂಕ ನಮೂದಿಸಬೇಕು. ಮಾಹಿತಿ ಕೊರತೆಯಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾದರೆ ಆಯಾ ಕಾಲೇಜಿನ ಪ್ರಾಂಶುಪಾಲರೇ ನೇರ ಹೊಣೆಯಾಗಲಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿತ್ತು. ಆದರೆ ಈ ವೇಳಾಪಟ್ಟಿ ಇದೀಗ ರದ್ದುಗೊಂಡಂತಾಗಿದೆ.
ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಸ್ಥಗಿತಗೊಳಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಸುತ್ತೋಲೆ ಹೊರಡಿಸಿತ್ತು. ಮೇ 4ರವರೆಗೆ ಪಿಯುಸಿ ಭೌತಿಕ ತರಗತಿಗಳು ಸ್ಥಗಿತಗೊಳ್ಳಲಿದ್ದು, ಪ್ರಥಮ, ದ್ವಿತೀಯ ಪಿಯು ತರಗತಿಗಳಿಗೆ ಆನ್‌ಲೈನ್ ಕ್ಲಾಸ್ ಮಾತ್ರ ನಡೆಯಲಿದೆ. ದ್ವಿತೀಯ ಪಿಯು ಪೂರ್ವ ಸಿದ್ಧತೆ ಪರೀಕ್ಷೆಗಳೂ ಸ್ಥಗಿತಗೊಳ್ಳಲಿದ್ದು, ಪ್ರಶ್ನೆ ಪತ್ರಿಕೆಗಳನ್ನು ಅಭ್ಯಾಸ ಪ್ರಶ್ನೆ ಪತ್ರಿಕೆಗಳಾಗಿ ವಿದ್ಯಾರ್ಥಿಗಳಿಗೆ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕಾಲೇಜುಗಳಿಗೆ ನಿರ್ದೇಶನ ನೀಡಿತ್ತು. ಆದರೆ, ಇಗ ಈ ಸುತ್ತೋಲೆ ರದ್ದುಗೊಂಡಿದೆ.
ಮೇ 4ರವರೆಗೆ ಪಿಯುಸಿ ತರಗತಿಗಳು ಬಂದ್ ಆಗುವ ಕಾರಣ ವರ್ಕ್ ಫ್ರಂ ಹೋಂ ನೀಡಲು ಪಿಯು ಉಪನ್ಯಾಸಕರು ಮನವಿ ಸಲ್ಲಿಸಿದ್ದಾರೆ.
ಮನೆಯಿಂದಲೆ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಡುವಂತೆ ಉಪನ್ಯಾಸಕರ ಸಂಘದಿಂದ ಶಿಕ್ಷಣ ಸಚಿವ ಸುರೇಶ್ ಕುಮಾರ್ಗೆ ಮನವಿ ಸಲ್ಲಿಸಲಾಗಿದೆ.
Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ
(Karnataka PU Practical exams are postponed due to Covid case surge says Education Minister S Suresh Kumar)
Published On - 5:09 pm, Sun, 25 April 21