ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಎಲ್ಲೆಲ್ಲಿ ‘ಯೆಲ್ಲೋ ಅಲರ್ಟ್’?
ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದಲ್ಲಿ ಮುಂಗಾರು ಹಾಗೂ ವಾಯುಭಾರ ಕುಸಿತದಿಂದ ವ್ಯಾಪಕ ಮಳೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು, ಒಳನಾಡು ಜಿಲ್ಲೆಗಳು ಹಾಗೂ ಬೆಂಗಳೂರಿನಲ್ಲಿ ಮುಂದಿನ 24-48 ಗಂಟೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ 'ಎಲ್ಲೋ ಅಲರ್ಟ್' ಘೋಷಿಸಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು, ಸೆ.16: ರಾಜ್ಯದಲ್ಲಿ ಮುಂಗಾರು ಹಾಗೂ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಕರಾವಳಿ, ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 24 ರಿಂದ 48 ಗಂಟೆಗಳ ಕಾಲ ಮೋಡಕವಿದ ವಾತಾವರಣದೊಂದಿಗೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಸಮುದ್ರ ಮಟ್ಟದಲ್ಲಿ ಉಂಟಾಗಿರುವ ಸುಳಿಗಾಳಿ ಹಾಗೂ ಗಾಳಿಯ ವೇಗ ಹೆಚ್ಚಿರುವುದರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಬೆಟ್ಟಗುಡ್ಡ ಪ್ರದೇಶಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ‘ಎಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ತುಮಕೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ. ಕೆಲವು ಕಡೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳೆಲ್ಲಾ ಜಲಾವೃತ,ವಾಹನ ಸವಾರರು ಪರದಾಟ
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ದಿನಪೂರ್ತಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 28°C ಯಿಂದ 29°C ತನಕ ದಾಖಲಾಗಬಹುದು. ಕನಿಷ್ಠ ತಾಪಮಾನ 20°C ಯಿಂದ 21°C ತನಕ ಇರುವ ಸಾಧ್ಯತೆಯಿದೆ. ಹಾಗೂ ಗಾಳಿಯ ವೇಗ ಸಾಧಾರಣವಾಗಿರಲಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:17 am, Wed, 16 September 26




