ಬೆಂಗಳೂರು: ಬೆಂಗಳೂರಿನಲ್ಲಿ 2 ದಿನಗಳಿಂದ ಸಂಜೆಯ ವೇಳೆ ಮಳೆ ಅಬ್ಬರಿಸುತ್ತಿದೆ. ಇಂದಿನಿಂದ 4 ದಿನಗಳ ಕಾಲ ಕರ್ನಾಟಕದ (Karnataka Rains) ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
ಹಾಗೇ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕೂಡ ಹೆಚ್ಚು ಮಳೆಯಾಗಲಿದೆ. ಆಗಸ್ಟ್ 29ರಂದು ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಕೊಡಗು, ತುಮಕೂರು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 30ರಂದು ಸಹ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 4 ದಿನ ಅಂದರೆ ಆಗಸ್ಟ್ 31ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ. ಆಗಸ್ಟ್ 31ರಂದು ಬುಧವಾರ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಟ 12 ಸೆಂ.ಮೀ.ವರೆಗೆ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ. ಇನ್ನು ಒಂದು ವಾರ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯಗಳಲ್ಲೂ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲೂ ಕಳೆದ 2 ದಿನಗಳಿಂದ ಮಳೆ ಹೆಚ್ಚಾಗಿದೆ. ಇಂದಿನಿಂದ ಆಗಸ್ಟ್ 31ರವರೆಗೂ ಕರ್ನಾಟಕದ ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Rain: ತುಮಕೂರು ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಗೊರವನಹಳ್ಳಿ ಬಳಿ ಇರುವ ತೀತಾ ಸೇತುವೆ ಸಂಪೂರ್ಣ ಕುಸಿತ
ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಇಂದು ಭಾರೀ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಹಿಮಾಲಯ ಪ್ರದೇಶ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಜಾರ್ಖಂಡ್, ಉತ್ತರ ಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ಮಾಹೆ ಮತ್ತು ಲಕ್ಷದ್ವೀಪದಲ್ಲೂ ಮಳೆ ಹೆಚ್ಚಾಗಲಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಬಿಹಾರ, ಹಿಮಾಚಲ ಪ್ರದೇಶ, ವಿದರ್ಭ, ಆಂಧ್ರ ಪ್ರದೇಶ, ಯಾನಂ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್ನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯ ಮುನ್ಸೂಚನೆ ಇದೆ.
ಒಡಿಶಾ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಮಧ್ಯಪ್ರದೇಶ, ಗೋವಾದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ರಾಜಸ್ಥಾನ, ಗುಜರಾತ್, ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.