Karnataka Weather Forecast: ಆ 13ರವರೆಗೆ ರಾಜ್ಯದಲ್ಲಿ ಮಳೆ; ಯಾವ ದಿನದಂದು ಎಲ್ಲೆಲ್ಲಿ ಮಳೆ; ಇಲ್ಲಿದೆ ಮಾಹಿತಿ
Monsoon 2026: ಸದ್ಯ ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಆಗಸ್ಟ್ 13ರವರೆಗೆ ಕರ್ನಾಟಕದಾದ್ಯಂತ ಮಳೆ ಮುನ್ಸೂಚನೆ ಇದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ.

ಬೆಂಗಳೂರು, ಆಗಸ್ಟ್ 09: ಜುಲೈನಲ್ಲಿ ಬರಬೇಕಿದ್ದ ಮಳೆ (Rain) ಆಗಸ್ಟ್ನಲ್ಲಿ ಎಂಟ್ರಿಕೊಟ್ಟಿದೆ. ಹೀಗಾಗಿ ಕರ್ನಾಟಕದ್ಯಂತ (karnataka) ಮುಂಗಾರು ಮಳೆ ಚುರುಕುಗೊಂಡಿದೆ. ಆಗಸ್ಟ್ 13ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.
ಯಾವ ದಿನಾಂಕದಂದು ಎಲ್ಲೆಲ್ಲಿ ಮಳೆ?
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಆಗಸ್ಟ್ 10 ಮತ್ತು 11 ರಂದು ಹಗುರ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿಯಾಗಿ ಆಗಸ್ಟ್ 12 ಮತ್ತು 13 ರಂದು ಈ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕದ ಉತ್ತರ ಒಳನಾಡು
ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಆಗಸ್ಟ್ 10 ರಿಂದ 13 ರವರೆಗೆ ಒಂದು ಅಥವಾ ಎರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Karnataka Weather Forecast: ಉತ್ತರ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಲ್ಲಿ ಇಂದು ವರುಣನ ಅಬ್ಬರ
ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಆಗಸ್ಟ್ 10 ರಿಂದ 13 ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ
ಸಂಜೆ ಆಗುತ್ತಿದ್ದಂತೆ ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಏಕಾಏಕಿ ಧಾರಾಕಾರ ಮಳೆ ಸುರಿದಿದೆ. ವೀಕೆಂಡ್ ಮೋಜು-ಮಸ್ತಿಯಲ್ಲಿದ್ದ ಜನರಿಗೆ ಅಡ್ಡಿ ಉಂಟಾಗಿದೆ. ನಗರದ ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್, ಮಲ್ಲೇಶ್ವರಂ ಸೇರಿದಂತೆ ಐಟಿ ಕಾರಿಡಾರ್ ಎಂದೇ ಪ್ರಸಿದ್ಧವಾಗಿರುವ ವೈಟ್ಫೀಲ್ಡ್ ಭಾಗದಲ್ಲೂ ಮಳೆಯ ಅಬ್ಬರ ಜೋರಾಗಿದ್ದು, ದಿಢೀರ್ ಮಳೆಯಿಂದಾಗಿ ರಸ್ತೆ ಸಂಚಾರಕ್ಕೂ ಅಡ್ಡಿ ಉಂಟಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




