Bangalore Rains: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ 2 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಮಂಗಳೂರಿನ (Mangaluru Rain) ರಸ್ತೆಗಳೆಲ್ಲ ಜಲಾವೃತವಾಗಿ ಮನೆಯೊಳಗೂ ನೀರು ನುಗ್ಗಿದೆ. ಇತ್ತ ಮಲೆನಾಡಿನಲ್ಲೂ ಮಳೆ ಹೆಚ್ಚಾಗಿರುವುದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೆ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ ಸುರಿಯಲಿದೆ. ಉತ್ತರ ಕರ್ನಾಟಕದಲ್ಲಿ ಇಂದಿನಿಂದ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಇಂದಿನಿಂದ ಜುಲೈ 5ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ.
ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಭಾರೀ ಮಳೆಗೆ ಸೃಷ್ಟಿಯಾದ ಪ್ರವಾಹದಿಂದ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಪ್ಪಳ, ಹಾಸನದ ಕೆಲ ಭಾಗಗಳಲ್ಲಿ ಭರ್ಜರಿ ಮಳೆಯಾಗಿದ್ದು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿಯೂ ಮಳೆ ಹೆಚ್ಚಾಗಿದೆ. ಇಂದು ಕೂಡ ಕರಾವಳಿ ಭಾಗದಲ್ಲಿ ಮಳೆಯಿಂದ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Few schools in Mangaluru city have also been given a holiday due to excessive rainfall. pic.twitter.com/IfeDyg57hV
— Ananth Shreyas (@ananthshreyas) June 30, 2022
ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹೇಳಲಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ ತುಂತುರು ಮಳೆ ಮುಂದುವರೆಯಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಅತಿಯಾಗಿ ಮಳೆ ಸುರಿಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: Karnataka Rain: ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ ಸಾಧ್ಯತೆ
ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಬೆಳಗಾವಿ, ಹಾವೇರಿ, ಧಾರವಾಡ ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯಾಗಲಿದೆ. ಹೀಗಾಗಿ, ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಯಾದ್ಯಂತ ಮುಂಗಾರು ವೇಗ ಪಡೆದುಕೊಂಡಿದೆ.
Several places water logging is being reported #Mangalore #Karnataka pic.twitter.com/JutNTvGVRZ
— Imran Khan (@KeypadGuerilla) June 30, 2022
ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಡೀ ದಿನ ಮಳೆಯಾಗುತ್ತಿದೆ. ಕರಾವಳಿ ಕರ್ನಾಟಕದಾದ್ಯಂತ ಭಾರೀ ಮಳೆಯಿಂದಾಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಹಾಗೂ ಉಡುಪಿಯಲ್ಲೂ ಭಾರೀ ಮಳೆಯಾಗಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ರಾಜಸ್ಥಾನ, ಕೊಂಕಣ ಮತ್ತು ಮಲಬಾರ್ ಕರಾವಳಿಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಿಂದ ತೇವದ ಹರಿವಿನಿಂದಾಗಿ ಈಶಾನ್ಯ ಭಾರತದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ, ಪಶ್ಚಿಮ ಬಂಗಾಳ, ಗುಜರಾತ್, ಗೋವಾ, ತೆಲಂಗಾಣ, ಕರ್ನಾಟಕ, ಕೇರಳ, ಭಾಗದಲ್ಲಿ ಅಲ್ಲಲ್ಲಿ ತುಂತುರು ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡು, ಆಂಧ್ರಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪಗಳಲ್ಲಿಯೂ ಮಳೆ ಮುಂದುವರೆಯಲಿದೆ. ಲಡಾಖ್ ಮತ್ತು ಮಹಾರಾಷ್ಟ್ರದ ಒಳನಾಡಿನಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.