Bangalore Rain: ಬೆಂಗಳೂರು : ಬೆಂಗಳೂರಿನಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದ್ದರೂ ಈ ಹಿಂದೆ ಸುರಿದ ಮಳೆಯ ಪರಿಣಾಮದಿಂದ ಆದ ಅನಾಹುತಗಳೇ ಇನ್ನೂ ಸರಿಯಾಗಿಲ್ಲ. ಬೆಂಗಳೂರಿನಲ್ಲಿ ಇನ್ನೂ 3 ದಿನ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಹಾಗೇ, ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಇಂದಿನಿಂದ (ಸೆ. 7) ಸೆ. 9ರವರೆಗೆ ಹಳದಿ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 9 ಅಂದರೆ ಶುಕ್ರವಾರದವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು, ಕರಾವಳಿ ಕರ್ನಾಟಕದ 3 ಜಿಲ್ಲೆಗಳು ಮತ್ತು ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇಂದಿನಿಂದ ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದು ಹಳದಿ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: Bangalore Rain: ಮಳೆಯಿಂದಾಗಿ ತೊಂದರೆ ಸಿಲುಕಿದರೆ ನಿಮ್ಮ ನೆರವಿಗೆ ದಾವಿಸಲಿದೆ ಎನ್ಜಿಒ ತಂಡ; ಸಹಾಯವಾಣಿ ನಂಬರ್ ಇಲ್ಲಿದೆ
ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯಲ್ಲಿ ಅಪಾಯಕಾರಿ ಗಾಳಿ ಬೀಸುವ ಮುನ್ಸೂಚನೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಬೀದರ್, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ ಮಳೆ ಸುರಿಯುವ ನಿರೀಕ್ಷೆಯಿದೆ. ಮಳೆಯಿಂದಾಗಿ ಬೆಂಗಳೂರಿನಲ್ಲಿ ನಿನ್ನೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಬೆಂಗಳೂರು ನಗರವು ಸೋಮವಾರ ತೀವ್ರ ಪ್ರವಾಹ ಮತ್ತು ಜಲಾವೃತಕ್ಕೆ ಸಾಕ್ಷಿಯಾಯಿತು. ಇದರಿಂದಾಗಿ ಕಂಪನಿಗಳ ಉದ್ಯೋಗಿಗಳು ಮತ್ತು ಸಾರ್ವಜನಿಕರು ಟ್ರ್ಯಾಕ್ಟರ್ ಮತ್ತು ದೋಣಿಗಳ ಸಹಾಯದಿಂದ ಪ್ರಯಾಣಿಸಿರುವ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಕರ್ನಾಟಕ, ಗೋವಾ, ಕೇರಳ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಸಿಕ್ಕಿಂ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡುಗಳಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಬಿಹಾರ ಮತ್ತು ಮಧ್ಯಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದಲ್ಲಿ ಒಣಹವೆಯಾಗುವ ಸಾಧ್ಯತೆ ಇದೆ.