ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ಕರ್ನಾಟಕದ (Karnataka Rain) ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದು ಕೂಡ ಮಳೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಕೂಡ 2 ದಿನಗಳಿಂದ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಕೊಂಚ ಕಡಿಮೆಯಾಗಿದೆ. ಇನ್ನೆರಡು ದಿನ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ಗರಿಷ್ಠ ತಾಪಮಾನದಲ್ಲಿ ಇಳಿಕೆಯಾಗಿದ್ದು, ಚಳಿಯ ವಾತಾವರಣ ಹೆಚ್ಚಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಇಂದು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಗುಡುಗುಸಹಿತ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಉಳಿದಂತೆ ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಅಂತ್ಯ, ಆದರೂ ಅ.15ರವರೆಗೆ ಮಳೆ ಅಬ್ಬರ ಸಾಧ್ಯತೆ
ಇಂದು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಇಂದು ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಒಡಿಶಾ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಆಂಧ್ರಪ್ರದೇಶ ಮತ್ತು ಯಾನಂನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ತೆಲಂಗಾಣ, ಕೇರಳದಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ.
ಅಕ್ಟೋಬರ್ 5ರಂದು ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ಅ. 5ರಂದು ಛತ್ತೀಸ್‌ಗಢದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಅಕ್ಟೋಬರ್ 6 ಮತ್ತು 7ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.