Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಮಳೆಯ ಅಬ್ಬರ

| Updated By: ಸುಷ್ಮಾ ಚಕ್ರೆ

Updated on: Nov 27, 2022 | 6:18 AM

Bangalore Weather Today: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಮಳೆ ಹೆಚ್ಚಾಗಲಿದೆ.

Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಮಳೆಯ ಅಬ್ಬರ
ಮಳೆ
Image Credit source: Weather.com
Follow us on

Bengaluru Rains: ಕರ್ನಾಟಕದಲ್ಲಿ (Rain in Karnataka) ಇನ್ನೆರಡು ದಿನ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ (Bangalore Rain) 2 ದಿನಗಳಿಂದ ತುಂತುರು ಮಳೆಯಾಗುತ್ತಿದ್ದು, ನವೆಂಬರ್ 28ರವರೆಗೆ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಮಳೆ ಹೆಚ್ಚಾಗಲಿದೆ.

ಇಂದು (ಭಾನುವಾರ) ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಕರಾವಳಿಯ ಜಿಲ್ಲೆಗಳು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ವ್ಯಾಪಕ ಮಳೆ; ಬೆಂಗಳೂರಿನ ಹವಾಮಾನ ಹೀಗಿದೆ

ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಮುನ್ಸೂಚನೆಯಿದೆ. ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಕೊಡಗು ಮತ್ತು ಹಾಸನದ ಗುಡ್ಡಗಾಡು ಪ್ರದೇಶಗಳಲ್ಲೂ ಜೋರು ಮಳೆಯಾಗಲಿದೆ. ಅದೇ ರೀತಿ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ದಾವಣಗೆರೆ, ಮೈಸೂರು, ತುಮಕೂರು ಹಾಗೂ ಉತ್ತರ ಕರ್ನಾಟಕದ ವಿಜಯಪುರ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಇಂದು ತುಂತುರು ಮಳೆಯಾಗುವ ಸಾಧ್ಯತೆಯಿದೆ.

ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಇಂದಿನಿಂದ 2 ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ದಕ್ಷಿಣ ಕನ್ನಡ, ಶಿವಮೊಗ್ಗ, ಮೈಸೂರು, ಮಂಡ್ಯ, ಮಡಿಕೇರಿ, ಹಾಸನ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಇರಲಿದೆ.

ಇದನ್ನೂ ಓದಿ: Karnataka Rain: ಮಲೆನಾಡು, ಕರಾವಳಿಯಲ್ಲಿ ಇಂದು ಗುಡುಗು ಸಹಿತ ಮಳೆ; ಉತ್ತರ ಒಳನಾಡಿನಲ್ಲೂ ಹಗುರ ಮಳೆ ಸಾಧ್ಯತೆ

ನವೆಂಬರ್ 28ರವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಒಂದೆರಡು ಕಡೆಗೆ ತುಂತುರು ಇಲ್ಲವೇ ಹಗುರ ಮಳೆ ಸುರಿಯುವ ಸಾಧ್ಯತೆ ಇದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ತುಂತುರು ಮಳೆ ಬೀಳಬಹುದು ಎನ್ನಲಾಗಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಕಷ್ಟು ವ್ಯಾಪಕವಾದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಗೋವಾ, ಆಂಧ್ರಪ್ರದೇಶ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮುಂತಾದೆಡೆ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಪ್ರದೇಶಗಳಲ್ಲಿ ಒಣ ಹವಾಮಾನ ಇರಲಿದೆ ಎಂದು ನಿರೀಕ್ಷಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ