Karnataka Rain: ಇಂದಿನಿಂದ 3 ದಿನ ಮಲೆನಾಡು, ಕರಾವಳಿ, ಬೆಂಗಳೂರಿನಲ್ಲಿ ವ್ಯಾಪಕ ಮಳೆ; ಹಳದಿ ಅಲರ್ಟ್ ಘೋಷಣೆ
Bengaluru Rain: ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 9ರವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
Bangalore Rains: ಕರ್ನಾಟಕದ ಬೆಂಗಳೂರು, ಮಲೆನಾಡು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಜೂನ್ 9ರವರೆಗೂ ಮಳೆ ಸುರಿಯುವ ಸಾಧ್ಯತೆಯಿದೆ. ರಾಜ್ಯಕ್ಕೆ ಈಗಾಗಲೇ ಮುಂಗಾರು (Monsoon) ಪ್ರವೇಶವಾಗಿದ್ದು, ಇಂದಿನಿಂದ 3 ದಿನ ಮಳೆ ಹೆಚ್ಚಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ (ಜೂನ್ 7) ಜೂನ್ 9ರವರೆಗೆ ಹಳದಿ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ.
ಜೂನ್ 9ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಹಾಗೂ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿಯಲ್ಲಿ ಇಂದಿನಿಂದ ಮಳೆ ಬಿರುಸು ಪಡೆಯುವ ನಿರೀಕ್ಷೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಮಳೆ ಹೆಚ್ಚಾಗಲಿದೆ.
ಇಂದಿನಿಂದ ಜೂನ್ 9ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ (Bengaluru Rain), ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕರ್ನಾಟಕದ ಹಲವು ಸ್ಥಳಗಳಲ್ಲಿ ಮತ್ತು ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದಲ್ಲಿ ಈಗಾಗಲೇ ಮೇ ತಿಂಗಳಲ್ಲಿ ಸಾಕಷ್ಟು ಪ್ರಮಾಣದ ಅಕಾಲಿಕ ಮಳೆಯಾಗಿದೆ. ಮೇ 15-21ರ ನಡುವೆ ರಾಜ್ಯದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು 400ಕ್ಕೂ ಹೆಚ್ಚು ಪ್ರಾಣಿಗಳು ಸಹ ಪ್ರಾಣ ಕಳೆದುಕೊಂಡಿವೆ. 4,500ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ಅಕಾಲಿಕ ಮಳೆಯಿಂದಾಗಿ 7,010 ಹೆಕ್ಟೇರ್ ಕೃಷಿ ಭೂಮಿ ಮತ್ತು 5,736 ಹೆಕ್ಟೇರ್ ತೋಟಗಾರಿಕೆ ಭೂಮಿಯಲ್ಲಿ ಬೆಳೆ ನಷ್ಟವಾಗಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?: ಕರ್ನಾಟಕ ಮಾತ್ರವಲ್ಲದೆ ಇಂದು ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು, ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಸಿಕ್ಕಿಂ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಹಾಗೇ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಕರ್ನಾಟಕದಲ್ಲಿ ಸಾಕಷ್ಟು ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಪಶ್ಚಿಮ ಬಂಗಾಳ, ರಾಯಲಸೀಮಾ ಮತ್ತು ತಮಿಳುನಾಡಿನಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಜಾರ್ಖಂಡ್, ಬಿಹಾರ, ಮಹಾರಾಷ್ಟ್ರ, ಛತ್ತೀಸ್‌ಗಢ, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ