ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆ ದಾಖಲಾಗಿದೆ. ಇದೇ ರೀತಿ ಬುಧವಾರದಿಂದ ಮುಂದಿನ ಐದು ದಿನವು ಬರಲಿದೆ. ಐದು ದಿನಗಳ ಪೈಕಿ ಏಪ್ರಿಲ್ 8ರವರೆಗೆ ಕರಾವಳಿ ಭಾಗದಲ್ಲಿ ಮಳೆ ತುಸು ಬಿರುಸುಕೊಳ್ಳಲಿದೆ. ಇದನ್ನು ಬಿಟ್ಟರೆ ದಕ್ಷಿಣ ಒಳನಾಡಿನ ಭಾಗದಲ್ಲಿ ಹಗುರ ಇಲ್ಲವೇ ಸಾಧಾರಣವಾಗಿ ಮಳೆ ಬರಬಹುದು.
ಶನಿವಾರ (ಏಪ್ರಿಲ್ 8) ಮಳೆ ಸುರಿಸುವ ಮಾರುತಗಳು ಹೆಚ್ಚು ಚುರುಕಾಗಿರಲಿವೆ. ಹೀಗಾಗಿ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಅಧಿಕ ಮಳೆ ಆಗಲಿದೆ.
ದಿಢೀರ್ ಹವಾಮಾನದಲ್ಲಿ ಬದಲಾವಣೆಯಾಗಿದ್ದು, ಕೋಲಾರ, ಮಂಡ್ಯ, ಮಸೂರು, ಚಾಮರಾಜನಗರ ಹಾಗೂ ಕೊಡಗು ಭಾಗದಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ. ಬಿರುಗಾಳಿ, ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮತ್ತಷ್ಟು ಓದಿ: Bengaluru Rain: ಬೆಂಗಳೂರಿನಲ್ಲಿ ಮುಂದಿನ 3 ದಿನಗಳ ಕಾಲ ಸುರಿಯಲಿದೆ ಭಾರಿ ಮಳೆ
ಈ ಭಾಗದಲ್ಲಿ ಗಂಟೆಗೆ 30-40 ಕಿ.ಮೀ.ವೇಗದಲ್ಲಿ ಗಾಳಿ ಬೀಸುತ್ತಿದೆ. ಮಾರುತುಗಳು ರಾಜ್ಯದ ಗಡಿ ದಾಟಿ ಹೋದ ನಂತರ ಮಳೆಯಾಗುವ ಸಾಧ್ಯೆತೆಗಳಿವೆ. ಆದರೂ ಜಿಲ್ಲಾಡಳಿತಗಳಿಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ಎಚ್ಎಎಲ್ ಹಾಗೂ ಕೆಐಎಎಲ್ನಲ್ಲಿ ಮಳೆಯಾಗಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮೈಸೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಭಾಗಶಃ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕಲಬುರಗಿಯಲ್ಲಿ 39.9 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ