ರಾಜ್ಯದಲ್ಲಿ ಅತಿಯಾಗಿ ಮಳೆಯಾಗುತ್ತಿದ್ದು ಹಾಗೂ ಪ್ರಕೃತಿ ವಿಕೋಪ ಕೂಡ ಸಂಭವಿಸುತ್ತಿದೆ. ಹೀಗಾಗಿ ನಾಳೆ (ಜುಲೈ 8) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಳೆಯಿಂದ ಹಾನಿಗೆ ಒಳಗಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಇತರೆ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ. ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮತ್ತು ಅದರಿಂದ ಉಂಟಾಗಿರುವ ಹಾನಿ ಕುರಿತು ಮಾಹಿತಿ ಪಡೆಯಲಿದ್ದಾರೆ. ಸಭೆಯಲ್ಲಿ ಸಂಬಂಧಪಟ್ಟ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಕರಾವಳಿ ಭಾಗದಲ್ಲಿ ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ 2-3 ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದ್ದು, ರಾಜ್ಯದ 22 ಭಾಗದಲ್ಲಿ ಭಾರಿ ಮಳೆ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ನಿನ್ನೆ (ಜುಲೈ 6) ರಂದು 21 ಸೆಂ.ಮೀ ಮಳೆಯಾಗಿದೆ. ಮಹಾರಾಷ್ಟ್ರದ ದಕ್ಷಿಣ ಕರಾವಳಿಯಿಂದ ಬೀಸುತ್ತಿರುವ ಗಾಳಿ, ಕೇರಳ ರಾಜ್ಯದ ಉತ್ತರ ಕರಾವಳಿಯತ್ತ ಬೀಸುತ್ತಿದೆ. ಹೀಗಾಗಿ ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ, ರಾಮನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ದೊರೆತಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ (Karnataka Rain) ಮುಂದುವರೆದಿದ್ದು, ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ, ಜೋಯಿಡಾ, ಕಾರವಾರದಲ್ಲಿ ರಾತ್ರಿಯಿಂದ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ನಿನ್ನೆ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಪ್ರಾರಂಭವಾಗಿದೆ. ನಿರಂತರ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆ ಮುಂದುವರೆದ ಹಿನ್ನಲೆ, ಮಕ್ಕಳ ಹಿತದೃಷ್ಟಿಯಿಂದ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ರೆಡ್ ಅಲಟ್೯ ಘೋಷಿಸಿದ್ದು, ನದಿ ಪಾತ್ರದ ಮತ್ತು ತಗ್ಗು ಪ್ರದೇಶಗಳಲ್ಲಿರುವ ಜನ ಸುರಕ್ಷಿತವಾಗಿರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಏರ್ಪೋರ್ಟ್ ರನ್ವೇ (Runway) ಬದಿಯಲ್ಲೇ ರಸ್ತೆ ಕುಸಿದಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅದ್ಯಪಾಡಿ ಬಳಿ ಇರುವ ರನ್ ವೇ ಸಮೀಪ ಕುಸಿತವಾಗಿದ್ದು, ಅದ್ಯಪಾಡಿಯಿಂದ ಕೈ ಕಂಬ ಹೋಗುವ ರಸ್ತೆ ಬಂದ್ ಮಾಡಲಾಗಿದೆ. ಏರ್ರ್ಪೋರ್ಟ್ ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಧಿಕ ಮಳೆ, ನೀರಿನ ಹೊರಹೊಮ್ಮುವಿಕೆಯಿಂದ ಕುಸಿತ ಉಂಟಾಗಿದೆ ಎನ್ನಲಾಗುತ್ತಿದೆ. ನಗರದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳೂರು ವಿಮಾನ ನಿಲ್ದಾಣವು ಸೂಕ್ಷ್ಮ ಟೇಬಲ್ ಟಾಪ್ ರನ್ವೇ (Table Top Runway) ಹೊಂದಿರುವುದರಿಂದ ಈ ವಿದ್ಯಮಾನ ದೇಶದ ಗಮನ ಸೆಳೆದಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದಾದ್ಯಂತ ಜುಲೈ 9ರವರೆಗೆ ಭಾರೀ ಮಳೆ; ಕರಾವಳಿಯಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ
Published On - 1:21 pm, Thu, 7 July 22