Monsoon 2022: ಕರ್ನಾಟಕದ ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇಂದು ಕೂಡ ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ. ಅಲ್ಲದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಶಾಲೆ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಇಂದು ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಬೆಳಗಾವಿ, ಕಲಬುರ್ಗಿ, ಬೀದರ್ನಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಇಂದು (ಶನಿವಾರ) ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಕರಾವಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಚೆಂಡಿಯಾದಲ್ಲಿ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮಳೆ ಆಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಮಾಹಿತಿ ನೀಡಿದೆ. ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿರುವ ಮಾಹಿತಿಯನ್ನು KSNDMC ಟ್ವೀಟ್ ಮಾಡಿದೆ.
With heavy rains smashing parts of Karnataka, Revenue Minister @RAshokaBJP has ordered the release of an additional ₹55 crore for relief measures. Deputy commissioners now have ₹735 crore to tackle the situation. @DeccanHerald @KarnatakaSNDMC #KarnatakaRain pic.twitter.com/cJlsGjZx7o
— Bharath Joshi (@bharathjoshi) July 8, 2022
ಭಾರೀ ಮಳೆಯಿಂದ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ ಭೂಕುಸಿತ ಉಂಟಾಗಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆಯ ಆರ್ಭಟ ಉಂಟಾಗಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ ಜಿಲ್ಲಾಡಳಿತಕ್ಕೆ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸಿದ್ಧವಿರುವಂತೆ ಸಚಿವ ಕಾರಜೋಳ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: Kerala Rain: ಕೇರಳದಲ್ಲಿ ಐದು ದಿನ ಭಾರೀ ಮಳೆ: ಮುಖ್ಯಮಂತ್ರಿ ಕಚೇರಿಯಿಂದ ಸಿದ್ಧತೆಗೆ ಸೂಚನೆ
ಮಕ್ಕಳು, ಮೀನುಗಾರರು ಮತ್ತು ಪ್ರವಾಸಿಗರು ಮುಂದಿನ ಎರಡು ದಿನಗಳ ಕಾಲ ತಗ್ಗು ಪ್ರದೇಶಗಳು ಮತ್ತು ಕಡಲತೀರಗಳಿಗೆ ಹೋಗದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಅಗತ್ಯ ಬಿದ್ದರೆ ತುರ್ತು ಕರ್ತವ್ಯ ಹಾಗೂ ರಕ್ಷಣಾ ಕಾರ್ಯಾಚರಣೆಗೆ ಸಿದ್ಧರಾಗಿರುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ತಾಲೂಕಿನಲ್ಲಿ ತುರ್ತು ಸ್ಪಂದನಾ ಕೇಂದ್ರ ತೆರೆಯಲು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇನ್ನೂ 2 ದಿನಗಳ ಕಾಲ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಸಿದ್ಧಾಪುರ, ಕುಮಟಾ, ಭಟ್ಕಳಗಳಲ್ಲಿ ಸಂಜೆಯಿಂದ ಭಾರೀ ಮಳೆಯಾಗುತ್ತಿದೆ. ಯಲ್ಲಾಪುರ ಹಾಗೂ ಸಿದ್ಧಾಪುರದಲ್ಲಿ ಮಳೆ ಮುಂದುವರಿದಿದ್ದು, ಗಂಗಾವಳಿ ಹಾಗೂ ಅಘನಾಶಿನಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ, ಸಾಗರ, ತೀರ್ಥಹಳ್ಳಿಯಲ್ಲೂ ವರುಣನ ಆರ್ಭಟ ಜೋರಾಗಿದೆ.
ಇಂದು ಯಾವೆಲ್ಲ ರಾಜ್ಯಗಳಲ್ಲಿ ಮಳೆ?:
ಇಂದು ಉತ್ತರಾಖಂಡ, ತೆಲಂಗಾಣ, ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ರಾಜಸ್ಥಾನ, ಗುಜರಾತ್, ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕೇರಳ, ಮಾಹೆ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಉತ್ತರ ಪ್ರದೇಶ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಒಡಿಶಾ, ಮರಾಠವಾಡದಲ್ಲಿ ಭಾರೀ ಮಳೆಯಾಗಲಿದೆ.
ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿಲ್ಲುತ್ತಿಲ್ಲ ಮಳೆ, ಎಲ್ಲ ನದಿಗಳು ಉಕ್ಕಿ ಹರಿಯುತ್ತಿವೆ, ಜನಜೀವನ ಸಂಪೂರ್ಣ ಅಸ್ತವ್ಯಸ್ತ
ಆಂಧ್ರ ಪ್ರದೇಶದ ಕರಾವಳಿ, ಯಾನಂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆ ಹೆಚ್ಚಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಉತ್ತರಾಖಂಡ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಹಿಮಾಚಲ ಪ್ರದೇಶ, ಪಶ್ಚಿಮ ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ಛತ್ತೀಸ್‌ಗಢ, ತೆಲಂಗಾಣ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಪಶ್ಚಿಮ ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ರಾಜಸ್ಥಾನ, ಮಧ್ಯಪ್ರದೇಶ, ಆಂಧ್ರಪ್ರದೇಶ ಮತ್ತು ಯಾನಂನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ರಾಯಲಸೀಮಾದಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಬಿಹಾರ ಮತ್ತು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.