Bangalore Rains: ಬೆಂಗಳೂರಿನಲ್ಲಿ ನಾಲ್ಕೈದು ದಿನಗಳಿಂದ ಸಂಜೆಯ ಬಳಿಕ ಭಾರೀ ಮಳೆಯಾಗುತ್ತಿದೆ. ಇಂದು ಕೂಡ ಸಿಲಿಕಾನ್ ಸಿಟಿಯಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆ (Rain in Karnataka) ಮುಂದುವರೆಯಲಿದೆ. ಬೆಂಗಳೂರು (Bengaluru Rain) ಮಾತ್ರವಲ್ಲದೆ ಮಲೆನಾಡು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲೂ ಮೇ 9ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಒಡಿಶಾದಲ್ಲಿ ಚಂಡಮಾರುತ ಏಳುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಇಂದು ಕೂಡ ಮಳೆಯಾಗಲಿದೆ. ಬೆಳಿಗ್ಗೆ, ಮಧ್ಯಾಹ್ನ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆಯ ಬಳಿಕ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ. ಕರಾವಳಿ, ಮಲೆನಾಡಿನಲ್ಲಿ ಕೂಡ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಕೂಡ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಬಿಸಿಲು ಹೆಚ್ಚಾಗಿ, ಉಷ್ಣ ಅಲೆ ಉಂಟಾಗುವ ಎಚ್ಚರಿಕೆ ನೀಡಲಾಗಿದೆ.
ಇಂದಿನಿಂದ 4 ದಿನ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲೂ ಮಳೆಯ ಅಬ್ಬರ ಹೆಚ್ಚಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ವ್ಯಾಪಕವಾದ ಮಳೆಯನ್ನು ನಿರೀಕ್ಷಿಸಲಾಗಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ದಕ್ಷಿಣ ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಸಿಕ್ಕಿಂ, ಅರುಣಾಚಲ ಪ್ರದೇಶ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಒಡಿಶಾ, ಆಂಧ್ರಪ್ರದೇಶ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಿಮಾಲಯದ ಪ್ರದೇಶದಲ್ಲಿ ಹಿಮ ಹೆಚ್ಚಾಗಲಿದೆ. (Source)
ಹಾಗೇ, ರಾಜಸ್ಥಾನ, ದಕ್ಷಿಣ ಪಂಜಾಬ್, ದಕ್ಷಿಣ ಹರಿಯಾಣ, ದೆಹಲಿ, ಗುಜರಾತ್, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌ಗಢ, ತೆಲಂಗಾಣ, ಕರ್ನಾಟಕದ ಉತ್ತರ ಒಳನಾಡು, ಆಂಧ್ರಪ್ರದೇಶದಲ್ಲಿ ಬಿಸಿಗಾಳಿ ಪರಿಸ್ಥಿತಿಗಳನ್ನು ನಿರೀಕ್ಷಿಸಲಾಗಿದೆ.