ಕರ್ನಾಟಕದಲ್ಲಿ ಭಾರಿ ಮಳೆ: ರಾಜ್ಯದ 4 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಮಳೆಯಿಂದ ಗುಡ್ಡ ಕುಸಿತದಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಜೂನ್ 16 ರಂದು ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿಗಳಿಂದ ಪ್ರೌಢಶಾಲೆಗಳವರೆಗೆ ರಜೆ ಇದೆ. ಹಾಸನದಲ್ಲಿಯೂ ಮಳೆಯಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

ಚಿಕ್ಕಮಗಳೂರು/ ಮಂಗಳೂರು, ಜೂನ್ 15: ರಾಜ್ಯದಲ್ಲಿ ಮುಂಗಾರು ಮಳೆಯ (Monsoon rain) ಆರ್ಭಟ ಜೋರಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗುಡ್ಡಗಳು ಕುಸಿಯುತ್ತಿದ್ದು, ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು (Chikkamagaluru), ಉಡುಪಿ (Udupi), ಮಂಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಶಾಲೆಗಳಿಗೆ ಸೋಮವಾರ (ಜೂ.16) ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಸೋಮವಾರ (ಜೂ.16) ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಎನ್. ಆರ್.ಪುರ ಮತ್ತು ಕೊಪ್ಪ ತಾಲೂಕಿನಲ್ಲಿನ ಶಾಲೆಗಳಿಗೆ ರಜೆ ಘೋಷಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವುದರಿಂದ ಅಂಗನವಾಡಿಯಿಂದ ಫ್ರೌಡ ಶಾಲೆವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆ ಆದೇಶ ಹೊಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದೆ. ಹೀಗಾಗಿ, ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಮತ್ತು ಉಳ್ಳಾಲ ತಾಲೂಕಿನಲ್ಲಿ ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ರಜೆ ನೀಡಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಕೊಡಗಿನಲ್ಲಿಯೂ ಕೂಡ ಬೆಂಬಿಡದೆ ಮಳೆಯಾಗುತ್ತಿದೆ. ಆದ್ದರಿಂದ ಜಿಲ್ಲೆಯ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ವೆಂಕಟರಾಜಾ ರಜೆ ನೀಡಿದ್ದಾರೆ.
ಇದನ್ನೂ ಓದಿ: ಸೊಲ್ಲಾಪುರ-ಮಂಗಳೂರು ಸಂಪರ್ಕಿಸುವ ರಾ.ಹೆದ್ದಾರಿ ಬಂದ್: ಬದಲಿ ಮಾರ್ಗ ಇಲ್ಲಿದೆ
ಹಾಸನದಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿ
ಹಾಸನ ಜಿಲ್ಲೆಯ ಹಾಸನ, ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಆಲೂರು ತಾಲೂಕಿನ ಬಿಕ್ಕೋಡು ಬಳಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರ ಉರುಳಿ ಬಿದ್ದಿದ್ದರಿಂದ ಬಿಕ್ಕೋಡು ಹಾಗೂ ಆಲೂರು ನಡುವೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಕಂದಾಯ ಇಲಾಖೆಯ ಸಿಬ್ಬಂದಿ ಮರ ತೆರವುಗೊಳಿಸುತ್ತಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ದೇವಿಮನೆ ಘಟ್ಟದಲ್ಲಿ ಪದೆ ಪದೆ ಗುಡ್ಡ ಕುಸಿಯುತ್ತಿದೆ. ಈ ಹಿನ್ನೆಲೆಯಲ್ಲಿ ದೇವಿಮನೆ ಘಟ್ಟ ಮೂಲಕ ಹಾದು ಹೋಗುವ ಶಿರಸಿ ಕುಮಟಾ ರಸ್ತೆಯಲ್ಲಿ ರಾತ್ರಿ ಹೊತ್ತು ವಾಹನ ಸಂಚಾರವನ್ನು ಜಿಲ್ಲಾಡಳಿತ ನಿರ್ಬಂಧಿಸಿದೆ. ಕಳೆದ ಮೂರು ದಿನಗಳಲ್ಲಿ ದೇವಿಮನೆ ಘಟ್ಟದಲ್ಲಿ ಐದು ಬಾರಿ ಗುಡ್ಡ ಕುಸಿದಿದೆ. ದೇವಿಮನೆ ಘಟ್ಟದಲ್ಲಿ ಇನ್ನಷ್ಟು ಗುಡ್ಡ ಕುಸಿಯುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.








