ಮಳೆ ಕಡಿಯಾದ್ರೂ ನಿಲ್ಲದ ಬಿರುಗಾಳಿ: 27ರಂದು ಈ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಹಲವೆಡೆ ಧಾರಾಕಾರ ಮಳೆ ಮುಂದುವರೆದಿದೆ. ಇನ್ನು ಕೆಲವೆಡೆ ಮಳೆ ಕಡಿಯಾಗಿದ್ದರೂ ಬಿರುಗಾಳಿ ಮುಂದುವರೆದಿದೆ. ಹೀಗಾಗಿ ಧಾರವಾಡ, ಬೆಳಗಾವಿ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ಕೂಡ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಬೆಂಗಳೂರು, ಜುಲೈ 26: ಮಹಾರಾಷ್ಟ್ರ, ಪಶ್ಚಿಮ ಘಟ್ಟದಲ್ಲಿನ ವರುಣಾರ್ಭಟದ ಎಫೆಕ್ಟ್ ಕರ್ನಾಟಕಕ್ಕೆ ತಟ್ಟಿದೆ. ನಿರಂತರ ಮಳೆಗೆ (Rain) ರಾಜ್ಯದ ಬಹುತೇಕ ಜಲಾಶಯಗಳು ಭರ್ತಿ ಆಗಿವೆ. ನದಿಗಳು ಉಕ್ಕಿ ಹರಿಯುತ್ತಿವೆ. ಹೀಗಾಗಿ ಜನರಲ್ಲಿ ಆತಂಕ ಶುರುವಾಗಿದೆ. ಮತ್ತೆ ಕೆಲವೆಡೆ ಧಾರಾಕಾರ ಮಳೆ ಕಡಿಯಾಗಿದ್ದು, ಬಿರುಗಾಳಿ ಬೀಸುತ್ತಿದೆ. ಅಲ್ಲಲ್ಲಿ ಕೆಲ ಅವಾಂತರಗಳು ಸಂಭವಿಸಿದ್ದು, ಹೀಗಾಗಿ ಮುಂಜಾಗ್ರತ ಕ್ರಮವಾಗಿ ಕೆಲವು ಜಿಲ್ಲೆಗಳಿಗೆ ನಾಳೆ ಕೂಡ ಶಾಲಾ, ಕಾಲೇಜುಗಳಿಗೆ ರಜೆ (School Holiday) ನೀಡಲಾಗಿದೆ. ಚಿಕ್ಕಮಗಳೂರು (6 ತಾಲೂಕು), ಧಾರವಾಡ, ಕೊಡಗು ಜಿಲ್ಲೆಗಳಿಗೆ ರಜೆ ಘೊಷಿಸಲಾಗಿದೆ.
6 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಕಡಿಮೆಯಾದ್ರೂ ಬಿರುಗಾಳಿ ಹಿನ್ನೆಲೆ ಜಿಲ್ಲೆಯ 6 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಎನ್.ಆರ್.ಪುರ ಹಾಗೂ ಕೊಪ್ಪ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಪದವಿ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ಇದನ್ನೂ ಓದಿ: ಅಪಾಯದ ಮಟ್ಟ ಮೀರಿ ಹರಿಯುತ್ತಿರೋ ಜೀವನದಿ ಕಾವೇರಿ; ಸ್ನಾನಘಟ್ಟ ಮುಳುಗಡೆ, ದೇವಸ್ಥಾನಕ್ಕೆ ಜಲದಿಗ್ಬಂಧನ
ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನಾಳೆಯೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಮಳೆ ಹಾಗೂ ಶೀತ ಗಾಳಿ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ. ನಿನ್ನೆ ಮತ್ತು ಇಂದು ರಜೆ ನೀಡಲಾಗಿತ್ತು. ಆದರೆ ಮಳೆ ಮತ್ತು ಶೀತ ಗಾಳಿ ಇರುವುದರಿಂದ ನಾಳೆಯೂ ರಜೆ ಮುಂದುವರೆಸಲಾಗಿದೆ. ಮುಂದಿನ ಸಾರ್ವಜನಿಕ ರಜಾ ದಿನಗಳಲ್ಲಿ ಹೆಚ್ಚುವರಿ ವರ್ಗಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ನಾಳೆಯೂ ಜಿಲ್ಲೆಯಲ್ಲಿ ರಜೆ ಮುಂದುವರಿಕೆ ಆಗಿದೆ. ಮಕ್ಕಳ ಹಿತದೃಷ್ಟಿಯಿಂದ ಪದವಿ ಪೂರ್ವ ಕಾಲೇಜು ಹಾಗೂ ಅಂಗನವಾಡಿ, ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ರಿಂದ ರಜೆ ಘೋಷಿಸಲಾಗಿದೆ. ರಾಮದುರ್ಗ ತಾಲೂಕಿನಲ್ಲಿ ಮಳೆ ಇಲ್ಲದ ಕಾರಣ ರಜೆ ಹೊರತುಪಡಿಸಿ ಉಳಿದೆಲ್ಲ ತಾಲೂಕುಗಳಿಗೆ ರಜೆ ನೀಡಲಾಗಿದೆ.
10 ತಾಲೂಕಿನ ಶಾಲಾ ಕಾಲೇಜಿಗೆ ನಾಳೆ ರಜೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನಾಳೆ ಶಾಲಾ ಕಾಲೇಜಿಗೆ ರಜೆ ನೀಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಯಿಡಾ, ಯಲ್ಲಾಪುರ, ಶಿರಸಿ ಹಾಗೂ ಸಿದ್ದಾಪುರ ತಾಲೂಕಿನ ಪ್ರಾಥಮಿಕ & ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜು, ಐಟಿಐ, ಡಿಪ್ಲೋಮಾ ಕಾಲೇಜಿಗೆ ನಾಳೆ ರಜೆ ನೀಡಿ ಉತ್ತರ ಕನ್ನಡ ಡಿಸಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಭಾರಿ ಮಳೆ ಹಿನ್ನೆಲೆ ಜಿಲ್ಲೆಯ 4 ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಸಾಗರ, ಹೊಸನಗರ, ಸೊರಬ ಹಾಗು ತೀರ್ಥಹಳ್ಳಿ ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿ ಆಯಾ ತಾಲೂಕಿನ ತಹಶೀಲ್ದಾರ್ ಆದೇಶಿಸಿದ್ದಾರೆ.
ಇದನ್ನೂ ಓದಿ: ಗದಗ: ನಿರಂತರ ಮಳೆಗೆ ಕುಸಿಯುತ್ತಿದೆ ಭೂಮಿ; ಹೆಚ್ಚಿದ ಜನರ ಆತಂಕ
ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನಲೆ ಜುಲೈ 27ರ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹಾಗೂ ಬೇಲೂರು ತಾಲ್ಲೂಕಿನ, ಬಿಕ್ಕೋಡು, ಅರೇಹಳ್ಳಿ ಹೋಬಳಿಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಸಕಲೇಶಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ, ಬೇಲೂರು ತಾಲ್ಲೂಕಿನ, ಬಿಕ್ಕೋಡು, ಅರೇಹಳ್ಳಿ ಹೋಬಳಿಯ ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಕೆ.ಪಾಂಡು ಆದೇಶ ಹೊರಡಿಸಿದ್ದಾರೆ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:16 pm, Fri, 26 July 24