
ಬೆಂಗಳೂರು, ಅಕ್ಟೋಬರ್ 12: ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಸೇರಿದಂತೆ 14 ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ಘೋಷಿಸಿದ್ದು, ಅಕ್ಟೋಬರ್ 13ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಕೆಲವೆಡೆ ಭೂ ಕುಸಿತದ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆಗೆ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಇಂದು ಕೂಡ ಬೆಂಗಳೂರಿನಲ್ಲಿ (Bengaluru Rains) ವರುಣನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 15ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಭಾರತೀಯ ಹವಾಮಾನ ಇಲಾಖೆ ಇಂದು 14 ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಿದೆ. ಅವುಗಳೆಂದರೆ, ದಕ್ಷಿಣ ಕನ್ನಡ , ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ. ಈ ಪ್ರದೇಶಗಳಲ್ಲಿ 10 ಮಿ.ಮೀ.ಯಿಂದ 30 ಮಿ.ಮೀ.ವರೆಗೂ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಜಿಲ್ಲೆಗಳಲ್ಲಿ ಭೂ ಕುಸಿತ ಉಂಟಾಗುವ ಸಾಧ್ಯತೆಗಳ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಹಾಗೇ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕೂಡ ಇಂದು ಮಳೆ ಮುಂದುವರಿಯಲಿದೆ.
ಇದನ್ನೂ ಓದಿ: Bengaluru Rains: ಬೆಂಗಳೂರಲ್ಲಿ ಮಳೆಯ ಅಬ್ಬರಕ್ಕೆ ಹೊಳೆಯಂತಾಗಿರುವ ರೈನ್ಬೋ ಡ್ರೈವ್ ಲೇಔಟ್
ಚಿತ್ರದುರ್ಗ ಮತ್ತು ಗದಗ ಜಿಲ್ಲೆಗಳಲ್ಲೂ ಅಲ್ಪ ಪ್ರಮಾಣದ ಮಳೆಯಾಗಲಿದೆ. ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಹ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇಂದು ಮತ್ತು ನಾಳೆ (ಅಕ್ಟೋಬರ್ 13) ತಮಿಳುನಾಡು, ದಕ್ಷಿಣ ಒಳನಾಡು ಕರ್ನಾಟಕ, ಕರಾವಳಿ ಆಂಧ್ರಪ್ರದೇಶ, ಕೇರಳ ಹಾಗೂ ಮಾಹೆ ಪ್ರದೇಶಗಳಲ್ಲಿ ಹಗುರದಿಂದ ಮಧ್ಯಮ ಮಟ್ಟದ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರಪ್ರದೇಶ ಮತ್ತು ಯಾಣಂ ಪ್ರದೇಶಗಳಲ್ಲಿ ಪ್ರತಿ ಗಂಟೆಗೆ 40 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಒಡಿಶಾ, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢ ರಾಜ್ಯಗಳ ಕೆಲವು ಭಾಗಗಳಲ್ಲಿ ಇಂದು ಹಗುರದಿಂದ ಮಧ್ಯಮ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ