Karnataka Weather: ಕರ್ನಾಟಕದಲ್ಲಿ ಮುಂದುವರೆದ ವರುಣನ ಅಬ್ಬರ; ಈ ಕೆಳಗಿನ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್
Karnataka Weather Updates: ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಜುಲೈ 19ರಿಂದ 23 ರವರೆಗೆ ವ್ಯಾಪಕ ಮಳೆಯಾಗಬಹುದು ಎಂದು ಅಂದಾಜಿಸಲಾಗಿದ್ದು, ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಭಾಗಗಳಲ್ಲೂ ಭಾರೀ ಮಳೆ ಸುರಿಯುವ ಸಂಭವವಿದೆ.
ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಅಧಿಕ ಪ್ರಮಾಣದ ಮಳೆಯಾಗುತ್ತಿದೆ (Heavy Rain). ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಂಗಳೂರು ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆ ಕಳೆದ ಕೆಲ ದಿನಗಳಿಂದ ಬಿಡುವು ನೀಡದೇ ಮಳೆ (Monsoon 2021) ಸುರಿಯುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಮಳೆಯ (Bengaluru Rain) ವಾತಾವರಣವಿದ್ದು ನಿತ್ಯವೂ ಸುರಿವ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.
ಕರ್ನಾಟಕದಲ್ಲಿ ಜುಲೈ 19ರಿಂದ ಜುಲೈ 23ರವರೆಗೆ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಹೀಗಾಗಿ ಇನ್ನೂ ಮೂರ್ನಾಲ್ಕು ದಿನಗಳ ತನಕ ಮಳೆಯ ವಾತಾವರಣ ಮುಂದುವರೆಯಲಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಂಗಳೂರು ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯ ಆರ್ಭಟ ಸದ್ಯಕ್ಕೆ ನಿಲ್ಲುವುದು ಅನುಮಾನ ಎನ್ನಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆಯಿಂದ ಮೂರು ದಿನಗಳ ಕಾಲ ಅಂದರೆ ಜುಲೈ 21, 22 ಮತ್ತು 23ರಂದು ಗುಡುಗು ಸಹಿತ ಭಾರೀ ಮಳೆ ಸುರಿಯಬಹುದು ಎಂದು ಅಂದಾಜಿಸಲಾಗಿರುವುದರಿಂದ ಸದರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇತ್ತ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನ ಅಧಿಕ ಪ್ರಮಾಣದ ಮಳೆಯಾಗಲಿದೆ. ನಾಳೆ ಮತ್ತು ನಾಡಿದ್ದು (ಜುಲೈ 21 ಮತ್ತು 22) ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಜುಲೈ 23ರಂದು ಮಳೆ ಹೆಚ್ಚಾಗುವ ಸಂಭವ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರ್ಗಿ, ಗದಗ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗಲಿದ್ದು, ಜುಲೈ 22 ಮತ್ತು 23ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ನಿನ್ನೆ ಮಧ್ಯಾಹ್ನ ಕೆಲ ಭಾಗಗಳಲ್ಲಿ ಮಳೆಯ ಅಬ್ಬರ ಕೊಂಚ ಹೆಚ್ಚಾಗಿದೆ. ಸದ್ಯದ ಮಾಹಿತಿ ಪ್ರಕಾರ ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ವಾಹನ ಸವಾರರು, ಸಾರ್ವಜನಿಕರು ರಸ್ತೆಗಿಳಿಯುವ ಮುನ್ನ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಒಳ್ಳೆಯದು. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಜುಲೈ 19ರಿಂದ 23 ರವರೆಗೆ ವ್ಯಾಪಕ ಮಳೆಯಾಗಬಹುದು ಎಂದು ಅಂದಾಜಿಸಲಾಗಿದ್ದು, ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಭಾಗಗಳಲ್ಲೂ ಭಾರೀ ಮಳೆ ಸುರಿಯುವ ಸಂಭವವಿದೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಮಳೆಯ ಅಬ್ಬರ; ತುಂಬಿ ಹರಿದ ಹಳ್ಳ-ಕೊಳ್ಳ, ಜನಜೀವನ ಅಸ್ತವ್ಯಸ್ತ
Gurugram Rains: ಭಾರೀ ಮಳೆಯಿಂದ ನದಿಗಳಾದ ಗುರುಗ್ರಾಮದ ರಸ್ತೆಗಳು; ನೀರಿನಲ್ಲಿ ತೇಲಿಬಂದ ಕಾರುಗಳ ವಿಡಿಯೋ ವೈರಲ್