ಬೆಂಗಳೂರು: ಕರ್ನಾಟಕದಲ್ಲಿ ಕಳೆದೊಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದ್ದು (Karnataka Rain), ಮಲೆನಾಡು, ಕರಾವಳಿ ಭಾಗದಲ್ಲಿ ಹನಿ ಕಡಿಯದೇ ಮಳೆ ಸುರಿಯುತ್ತಿದೆ. ಈ ವಾತಾವರಣ ಇನ್ನೂ ಮೂರು ದಿನ ಮುಂದುವರೆಯುವ ಸಾಧ್ಯತೆ ಇದ್ದು, ಜುಲೈ 18ರ ತನಕ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಅಧಿಕ ಮಳೆಯಾಗಲಿದೆ (Heavy Rain) ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲೂ ಮುಂದಿನ ಎರಡು ದಿನ ಮಳೆಯಾಗಲಿದ್ದು (Bengaluru Rain) ತಂಪಾದ ವಾತಾವರಣ ಇರಲಿದೆ ಎಂದು ಹವಾಮಾನ ವರದಿಗಳು (Weather Reports) ತಿಳಿಸಿವೆ.
ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದು ರಾಜ್ಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕೆಲ ದಿನಗಳಿಂದ ಮಲೆನಾಡು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಆಯಾ ಪ್ರದೇಶಗಳಿಗೆ ಅನುಗುಣವಾಗಿ ಸೂಕ್ತ ಎಚ್ಚರಿಕೆಯನ್ನೂ ಹವಾಮಾನ ಇಲಾಖೆ ನೀಡಿದೆ. ಸದ್ಯದ ಮಾಹಿತಿ ಪ್ರಕಾರ ಇಂದಿನಿಂದ ಜುಲೈ 18ರ ತನಕವೂ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಇಂದು ಮತ್ತು ನಾಳೆ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಇಂದು ಮುಂಜಾನೆ 8.30ರ ತನಕ ಅನ್ವಯವಾಗುವಂತೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಹಾವೇರಿ, ರಾಯಚೂರು, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಪ್ರದೇಶಗಳಿಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
Source IMD:(1/2)
Orange alert: Uttara Kannada Udupi Dakshina Kannada Chikkamagaluru Hassan Kodagu Shimoga Belagavi Dharwad Haveri Raichur Bengaluru Rural & Bengaluru Urban districts valid till 8:30 AM of 16.07.2021.— KSNDMC (@KarnatakaSNDMC) July 15, 2021
ಅಂತೆಯೇ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಈ ಪ್ರದೇಶಗಳಲ್ಲಿ 64.5 ಮಿಲಿ ಮೀಟರ್ಗೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿಗಳು ತಿಳಿಸಿವೆ.
(2/2) Yellow alert: Bagalkote Bidar Gadag Kalaburagi Koppala Vijayapura Chikkaballapura Kolar Ramanagara Tumkuru & Yadgir districts valid till 8:30 AM of 16.07.2021.
Orange alert -isolated very heavy rains (>115.6mm) likely. Yellow alert -isolated heavy rains (>64.5mm) likely.
— KSNDMC (@KarnatakaSNDMC) July 15, 2021
ಕೊಡಗು ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಬಿಟ್ಟೂಬಿಡದೆ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ರಸ್ತೆಗಳ ಮೇಲೆ ಮರ ಉರುಳಿ ಸಂಚಾರಕ್ಕೆ ಅಡಚಣೆಯಾಗಿದ್ದು, ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಕಾವೇರಿ ನದಿಯ ಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ನದಿ ತೀರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ. ಭಾರೀ ಮಳೆಯ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವು ಕೂಡಾ ಹೆಚ್ಚಾಗಿರುವುದರಿಂದ ಜಲಾಶಯ ಭರ್ತಿಯಾಗಲು ಇನ್ನು ಕೇವಲ ಎರಡೇ ಅಡಿ ಬಾಕಿ ಇದೆ.
ಅತ್ತ ನೆರೆಯ ಮಹಾರಾಷ್ಟ್ರದಲ್ಲೂ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ತಗ್ಗು ಪ್ರದೇಶಗಳಲ್ಲಿನ ಮನೆಗಳು ಜಲಾವೃತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಒಟ್ಟಾರೆಯಾಗಿ ಜೂನ್ ತಿಂಗಳ ಆರಂಭದಲ್ಲಿ ಭಾರೀ ಪ್ರಮಾಣದಲ್ಲಿ ಸುರಿದಿದ್ದ ಮುಂಗಾರು ನಂತರ ಕೆಲ ದಿನಗಳ ಕಾಲ ಬಿಡುವು ನೀಡಿ ಇದೀಗ ಮತ್ತೆ ತನ್ನ ಅಬ್ಬರವನ್ನು ತೋರಿಸುತ್ತಿದೆ.