ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿಕೆ ನೀಡಿದ್ದಾರೆ. ದಕ್ಷಿಣ ಒಳನಾಡಿನಲ್ಲಿ ಜುಲೈ 14ರಿಂದ 18ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಆಗುವ ಸಂಭವ ಇದೆ ಎಂದು ಅವರು ಹೇಳಿದ್ದಾರೆ.
ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಧಾರಕಾರ ಮಳೆಯಾಗುತ್ತಿದೆ. ಜುಲೈ 14, 15, 17ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 16ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಕೂಡ ಯಲ್ಲೋ ಅಲರ್ಟ್ ಸೂಚನೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಇಂದು ಕರಾವಳಿ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಸುಬ್ರಹ್ಮಣ್ಯ 10 ಸೆಂ.ಮೀ, ಸುಳ್ಯ ಮತ್ತು ಉಪ್ಪಿನಂಗಡಿಯಲ್ಲಿ 9 ಸೆಂ.ಮೀ ಮಳೆಯಾಗಿದೆ. ಕರಾವಳಿ ಉತ್ತರ ಒಳನಾಡು ದಕ್ಷಿಣ ಒಳನಾಡು ಜುಲೈ 14 ರಿಂದ 18 ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಯ ಕೆಲವು ಕಡೆ ಅತ್ಯಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಜುಲೈ 15ರಂದು ಆರೆಂಜ್ ಅಲರ್ಟ್, 16ರಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಜೋರಾಗಿದೆ. ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್ ಪುರ ತಾಲೂಕಿನಲ್ಲಿ ಭಾರಿ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಸುತ್ತಮುತ್ತಲೂ ಉತ್ತಮ ಮಳೆಯಾಗಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮೂಡಿಗೆರೆ ತಾಲೂಕಿನ ಗೌಡಳ್ಳಿಯಲ್ಲಿ ನದಿ ನೀರು ಸೇತುವೆ ಮಟ್ಟದಲ್ಲಿ ಹರಿಯುತ್ತಿದೆ.
ಕೋಟೆನಾಡು ಚಿತ್ರದುರ್ಗದಲ್ಲಿ ಕೂಡ ಧಾರಾಕಾರ ಮಳೆ ಸುರಿದಿದೆ. ಕೆಲ ದಿನದಿಂದ ಮೋಡ ಮುಸುಕಿದ ವಾತಾವರಣ, ತುಂತುರು ಮಳೆ ಇತ್ತು. ಇಂದು ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ ಸುರಿದಿದೆ.
ಇದನ್ನೂ ಓದಿ: ಸೂರ್ಯೋದಯಕ್ಕೆ ಅವಕಾಶವೇ ಕೊಡದೆ ಬೆಂಗಳೂರಿನಲ್ಲಿ ಮಳೆ, ಹವಾಮಾನ ಮುನ್ಸೂಚನೆ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು!?
Himachal Pradesh Rain: ಹಿಮಾಚಲ ಪ್ರದೇಶದಲ್ಲಿ ನಿಲ್ಲದ ಪ್ರವಾಹ; ಭಾರೀ ಮಳೆಯಿಂದ ಸೂಫಿ ಗಾಯಕ ಸೇರಿ 8 ಜನ ಸಾವು