Bengaluru Rains: ಕರ್ನಾಟಕದಲ್ಲಿ ಇನ್ನೆರಡು ದಿನಗಳ ಕಾಲ ಭಾರೀ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ (Bangalore Rain) 2 ದಿನಗಳಿಂದ ತುಂತುರು ಮಳೆಯಾಗುತ್ತಿದ್ದು, ಶನಿವಾರದವರೆಗೂ ಈ ಮಳೆ ಮುಂದುವರೆಯಲಿದೆ. ಹಾಗೇ, ದಿನವಿಡೀ ಮೋಡ ಕವಿದ ವಾತಾವರಣವಿರಲಿದೆ. ಇಂದು (ಶುಕ್ರವಾರ) ಮತ್ತು ನಾಳೆ ಕರ್ನಾಟಕದ (Rain in Karnataka) 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಹಾಗೂ ತಮಿಳುನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ ನವೆಂಬರ್ 26ರವರೆಗೆ ಕರ್ನಾಟಕದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಕರಾವಳಿಯ ಜಿಲ್ಲೆಗಳು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
#Bengaluru: Partly cloudy sky with one or two spells of passing showers. Max & Min temparatures to be around 26°C & 19°C respectively. Overcast windy conditions likely to prevail over the city#BengaluruRains #Bangalore #BengaluruRain #BangaloreRains
— ಕರ್ನಾಟಕ/ಬೆಂಗಳೂರು ಹವಾಮಾನ (@Bnglrweatherman) November 24, 2022
ಬೆಂಗಳೂರಿನಲ್ಲಿ ಬುಧವಾರ 2 ಮಿಮೀ ಮಳೆಯಾಗಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಮುಂಜಾನೆ ಸಮಯದಲ್ಲಿ ಮಂಜು ಕವಿಯುವ ಸಾಧ್ಯತೆ ಇರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26 ಡಿಗ್ರಿ ಮತ್ತು 19 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.
ಇದನ್ನೂ ಓದಿ: Bengaluru Rain: ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ತುಂತುರು ಮಳೆ; ಚಳಿಯೂ ಹೆಚ್ಚಳ
ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಮುನ್ಸೂಚನೆಯಿದೆ. ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಕೊಡಗು ಮತ್ತು ಹಾಸನದ ಗುಡ್ಡಗಾಡು ಪ್ರದೇಶಗಳಲ್ಲೂ ಜೋರು ಮಳೆಯಾಗಲಿದೆ. ಅದೇ ರೀತಿ ಕರ್ನಾಟಕದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ದಾವಣಗೆರೆ, ಮೈಸೂರು, ತುಮಕೂರು ಹಾಗೂ ಉತ್ತರ ಕರ್ನಾಟಕದ ವಿಜಯಪುರ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಇಂದು ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಲಕ್ಷದ್ವೀಪದಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಮುನ್ಸೂಚನೆ ಇದೆ. ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರ್ನಾಟಕ, ಕೇರಳ ಮತ್ತು ಮಾಹೆಯಲ್ಲಿ ಮಿಂಚು ಸಹಿತ ಮಳೆಯಾಗಲಿದೆ. ಇತರ ಪ್ರದೇಶಗಳಲ್ಲಿ ಒಣ ಹವಾಮಾನವು ಮುಂದುವರಿಯಲಿದೆ.