ಬೆಂಗಳೂರು: ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದೆ. ಈ ವರ್ಷ ವಿಶೇಷವಾಗಿ ಕರಾವಳಿ, ಮಲೆನಾಡಿನ ಪ್ರದೇಶಗಳಲ್ಲಿ ಭೂಕುಸಿತ ಮತ್ತು ಮನೆ ಕುಸಿದು 2 ತಿಂಗಳಲ್ಲಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಇಂದು ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದ ಹಗುರವಾದ ಮಳೆಯಾಗಬಹುದು. ಜೊತೆಗೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶಗಳಲ್ಲಿ ಕೂಡ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆಯಾಗಲಿದೆ.
ಉತ್ತರ ಕರ್ನಾಟಕದ ರಾಯಚೂರಿನಲ್ಲಿ ಬುಧವಾರ ಗರಿಷ್ಠ ತಾಪಮಾನ 30.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಚಿಕ್ಕಮಗಳೂರಿನಲ್ಲಿ ಕನಿಷ್ಠ 19.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಮಲೆನಾಡು ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ. ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ.
ಈ ವರ್ಷ ಕರ್ನಾಟಕದಲ್ಲಿ ಜೂನ್ 1ರಿಂದ ಆಗಸ್ಟ್ 15ರ ಅವಧಿಯಲ್ಲಿ ವಾಡಿಕೆಗಿಂತ ಶೇ. 34ರಷ್ಟು ಅಧಿಕ ಮಳೆಯಾಗಿದ್ದರೆ, ಗುಜರಾತ್‌ನಲ್ಲಿ ಶೇ. 31ರಷ್ಟು, ಮಹಾರಾಷ್ಟ್ರದಲ್ಲಿ ಶೇ. 30ರಷ್ಟು ಮತ್ತು ಮಧ್ಯಪ್ರದೇಶದಲ್ಲಿ ಶೇ. 16ರಷ್ಟು ಅಧಿಕ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದೇಶಾದ್ಯಂತ ಆರ್ಭಟ ತೋರಿಸಿದ್ದ ಮಳೆ ಕೆಲವು ದಿನಗಳಿಂದ ಬಿಡುವು ನೀಡಿದೆ. ಆದರೆ, ಒಟ್ಟಾರೆ ಮಳೆ ಪ್ರಮಾಣವನ್ನು ನೋಡಿದಾಗ ಜೂನ್ 1ರಿಂದ ಆಗಸ್ಟ್ 15ರ ಅವಧಿಯಲ್ಲಿ ದೇಶದಲ್ಲಿ ಸಾಮಾನ್ಯಕ್ಕಿಂತ ಶೇ. 15ರಷ್ಟು ಕಡಿಮೆ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಇದನ್ನೂ ಓದಿ: Karnataka Rain: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇನ್ನೆರಡು ದಿನ ತುಂತುರು ಮಳೆ; ಮಲೆನಾಡಿನಲ್ಲಿ ತಗ್ಗಿದ ವರುಣನ ಆರ್ಭಟ
ಮುಂಗಾರು ಅವಧಿಯಲ್ಲಿ ಉತ್ತರ ಪ್ರದೇಶದಲ್ಲಿ ದೇಶದ ಇತರೆ ರಾಜ್ಯಗಳಿಗಿಂತ ಕಡಿಮೆ ಮಳೆಯಾಗಿದೆ. ಉತ್ತರ ಪ್ರದೇಶ ರಾಜ್ಯದಲ್ಲಿ ಜೂನ್ 1ರಿಂದ ಆಗಸ್ಟ್ 15ರ ಅವಧಿಯಲ್ಲಿ ಸಾಮಾನ್ಯ ಮಳೆಗಿಂತ ಶೇ. 44ರಷ್ಟು ಕಡಿಮೆ ಮಳೆಯಾಗಿದೆ. ಇತರ ರಾಜ್ಯಗಳ ಪೈಕಿ ಬಿಹಾರದಲ್ಲಿ ಇದೇ ಅವಧಿಯಲ್ಲಿ ಸಾಮಾನ್ಯ ಮಳೆಗಿಂತ ಶೇ. 39ರಷ್ಟು ಕಡಿಮೆ ಮಳೆ ಬಿದ್ದಿದ್ದರೆ, ಪಶ್ಚಿಮ ಬಂಗಾಳದಲ್ಲಿ ಶೇ. 20ರಷ್ಟು ಮಳೆಯ ಕೊರತೆ ದಾಖಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತಡವಾಗಿ ಮುಂಗಾರು ಆರಂಭವಾದ ಪರಿಣಾಮ, ಈ ಅವಧಿಯಲ್ಲಿ ದಾಖಲಾದ ಮಳೆಯು ಸಾಮಾನ್ಯ ಮಳೆಗಿಂತ ಶೇ. 19ರಷ್ಟು ಕಡಿಮೆಯಾಗಿದೆ. ಜಾರ್ಖಂಡ್ ರಾಜ್ಯದಲ್ಲೂ ಕೂಡ ಇದೇ ಅವಧಿಯಲ್ಲಿ ಸಾಮಾನ್ಯ ಮಳೆಯ ಪ್ರಮಾಣಕ್ಕಿಂತ ಶೇ. 34ರಷ್ಟು ಕಡಿಮೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂಗಾರು ಮಳೆಯ ವಿರಾಮದಿಂದ ದಕ್ಷಿಣ ಭಾರತದ ರಾಜ್ಯಗಳು ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಂತೆ, ಉತ್ತರ ಭಾರತದ ಕೆಲವು ಭಾಗಗಳು ಭಾರೀ ಮಳೆಯಿಂದ ತತ್ತರಿಸುತ್ತಿವೆ. ಇಂದು ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಭಾರತದ ಪಶ್ಚಿಮ ಕರಾವಳಿಯಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಒಡಿಶಾ, ಕೊಂಕಣ ಮತ್ತು ಗೋವಾದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಜಾರ್ಖಂಡ್, ಉತ್ತರಾಖಂಡ, ಗುಜರಾತ್ ಮತ್ತು ಛತ್ತೀಸ್‌ಗಢದಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕವಾದ ಬೀಳುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮುಂದುವರಿದ ಮಳೆ; ಬೆಂಗಳೂರಿನಲ್ಲಿ ಚಳಿ ಶುರು
ಅರುಣಾಚಲ ಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಮಧ್ಯಪ್ರದೇಶ, ಮಹಾರಾಷ್ಟ್ರ, ವಿದರ್ಭ, ಆಂಧ್ರಪ್ರದೇಶ, ಯಾನಂ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಚದುರಿದ ಮಳೆಯನ್ನು ನಿರೀಕ್ಷಿಸಲಾಗಿದೆ. ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ರಾಜಸ್ಥಾನ, ಮರಾಠವಾಡ, ರಾಯಲಸೀಮಾ, ತೆಲಂಗಾಣ, ಕೇರಳ ಮತ್ತು ಮಾಹೆಯಲ್ಲಿ ಮಿಂಚು ಸಹಿತ ಮಳೆಯ ಮುನ್ಸೂಚನೆ ಇದೆ.