Monsoon 2022: ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. 2 ದಿನಗಳಿಂದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು (ಆ. 25) ಹಳದಿ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ. ಹಾಗೇ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಕೋಲಾರ ಜಿಲ್ಲೆಗಳಲ್ಲಿ ಕೂಡ ಮಳೆ ಹೆಚ್ಚಾಗಲಿದೆ.
ಕರಾವಳಿಯಲ್ಲಿ ಗಾಳಿ, ಮಳೆಯಾಗುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಭಾಗದಲ್ಲಿ ಇಂದು ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಕೊಡಗು ಜಿಲ್ಲೆಗಳ ವಿವಿಧೆಡೆ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆ ಆಗುವ ಸಾಧ್ಯತೆಯಿದ್ದು, ‘ಹಳದಿ ಅಲರ್ಟ್’ ಘೋಷಿಸಲಾಗಿದೆ.
ಇದನ್ನೂ ಓದಿ: Madhya Pradesh Rain: ಭಾರೀ ಮಳೆಯಿಂದ ಮಧ್ಯಪ್ರದೇಶದ 39 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ; ಪ್ರವಾಹದಿಂದ 400 ಜನರ ರಕ್ಷಣೆ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು ಮಳೆ ಮುಂದುವರೆಯಲಿದೆ. ಹೀಗಾಗಿ, ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜೊತೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಮೈಸೂರು, ಹಾಸನ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ಬಂಟ್ವಾಳ ತಾಲೂಕಿನ ನರಿಕೊಂಬು ಮತ್ತು ನಾವೂರಿನಲ್ಲಿ ಕ್ರಮವಾಗಿ 201 ಮತ್ತು 173.5 ಮಿ.ಮೀ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ತೆಕ್ಕಾರು 168.5 ಮಿ.ಮೀ ಮಳೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 18.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ರಾಯಚೂರಿನಲ್ಲಿ ಸರಾಸರಿ ಗರಿಷ್ಠ ತಾಪಮಾನ 33.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇಂದು ಮಲೆನಾಡು, ಕರಾವಳಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಧಾರವಾಡದಲ್ಲಿ 28 ಮಿ.ಮೀ ಮಳೆಯಾಗಿದ್ದು, ಬಾಗಲಕೋಟೆಯಲ್ಲಿ ಶೇ.100ರಷ್ಟು ಆರ್ದ್ರತೆ ದಾಖಲಾಗಿದೆ.
ಇದನ್ನೂ ಓದಿ: Karnataka Rain: ಕರಾವಳಿ, ಮಲೆನಾಡು, ಕೊಡಗು, ಮೈಸೂರು, ಕೋಲಾರ, ಹಾಸನದಲ್ಲಿ ಇನ್ನು 3 ದಿನ ಮಳೆ; ಹಳದಿ ಅಲರ್ಟ್ ಘೋಷಣೆ
ಇಂದು ಯಾವ ರಾಜ್ಯಗಳಲ್ಲಿ ಮಳೆ ಹೆಚ್ಚಳ?:
ಕರ್ನಾಟಕ ಮಾತ್ರವಲ್ಲದೆ ಲಡಾಖ್, ಜಮ್ಮು ಮತ್ತು ಕಾಶ್ಮೀರ, ಛತ್ತೀಸ್‌ಗಢ, ಒಡಿಶಾ, ಕೊಂಕಣ ಕರಾವಳಿ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ, ಗೋವಾ, ತಮಿಳುನಾಡಿನಲ್ಲಿ ಚದುರಿದ ಮಳೆಯಾಗುವ ಮುನ್ಸೂಚನೆ ಇದೆ. ಸಿಕ್ಕಿಂ, ಪಂಜಾಬ್, ಹರಿಯಾಣ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ.
ಮಧ್ಯಪ್ರದೇಶದ ಉಳಿದ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಭೂಪಾಲ್, ವಿದಿಶಾ, ರಾಜ್‌ಗಢ, ಗುನಾ, ದೇವಾಸ್, ಬೇತುಲ್ ಮತ್ತು ಛಿಂದ್ವಾರಾದಲ್ಲಿ ಇದುವರೆಗೆ ಹೆಚ್ಚಿನ ಮಳೆಯಾಗಿದೆ. ಒಡಿಶಾದಲ್ಲಿ ಪ್ರವಾಹ ಪೀಡಿತ ಮಹಾನದಿ ಡೆಲ್ಟಾ ಪ್ರದೇಶ ಮತ್ತು ರಾಜ್ಯದ ಉತ್ತರ ಜಿಲ್ಲೆಗಳು ಸೇರಿದಂತೆ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ. ಭುವನೇಶ್ವರ, ಜಗತ್‌ಸಿಂಗ್‌ಪುರ, ಕೇಂದ್ರಪಾರ, ಕಟಕ್ ಮತ್ತು ಖುರ್ದಾದಲ್ಲಿ ಬುಧವಾರ ಲಘು ಮಳೆಯಾಗಿದ್ದು, ಪಶ್ಚಿಮ ಪ್ರದೇಶದ ಸುಂದರ್‌ಗಢ್, ಝಾರ್ಸುಗುಡ, ಸಂಬಲ್‌ಪುರ್ ಮತ್ತು ದಿಯೋಗರ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಅರುಣಾಚಲ ಪ್ರದೇಶದಲ್ಲಿ ಆಗಸ್ಟ್ 26 ಮತ್ತು 27ರಂದು ಗುಡುಗು ಸಹಿತ ವ್ಯಾಪಕವಾದ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮುಂದಿನ 3 ದಿನಗಳ ಕಾಲ ಇದೇ ರೀತಿಯ ಮಳೆಯಾಗುವ ನಿರೀಕ್ಷೆಯಿದೆ.