Bangalore Rains: ಕರ್ನಾಟಕದಲ್ಲಿ ಮಳೆಯ ಆರ್ಭಟ (Heavy Rainfall) ಮುಂದುವರೆದಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಉತ್ತಮ ಮಳೆಯಾಗುತ್ತಿದೆ. ಹೀಗಾಗಿ, ಇನ್ನು 4 ದಿನ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಉಡುಪಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, 13ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಕರಾವಳಿ ಸೇರಿ ಕರ್ನಾಟಕದ 10 ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ.
ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ 3 ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ‘ಹಳದಿ ಅಲರ್ಟ್’ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕೂಡ ಇಂದು ‘ಹಳದಿ ಅಲರ್ಟ್’ ನೀಡಲಾಗಿದೆ.
ಇದನ್ನೂ ಓದಿ: Karnataka Rain: ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ
ಬೆಂಗಳೂರು ನಗರದ ಉತ್ತರ ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಿದ್ದರೆ, ದಕ್ಷಿಣ ಭಾಗದಲ್ಲಿ ಅಲ್ಲಲ್ಲಿ ತುಂತುರು ಮಳೆ ಹಾಗೂ ಸಾಧಾರಣ ಮಳೆಯಾಗುತ್ತಿದೆ. ಈ ಮಳೆಯ ಆರ್ಭಟ ಇಂದು ಕೂಡ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರ, ಗೋವಾ, ಕೇರಳ, ಆಂಧ್ರಪ್ರದೇಶ, ಒಡಿಶಾ, ಛತ್ತೀಸ್‌ಗಢ, ತೆಲಂಗಾಣ ಮತ್ತು ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಜಾರ್ಖಂಡ್ ಮತ್ತು ಗುಜರಾತ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ, ಬಿಹಾರ, ಮಧ್ಯಪ್ರದೇಶ, ತಮಿಳುನಾಡು, ಲಕ್ಷದ್ವೀಪ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಅಲ್ಲಲ್ಲಿ ಮಳೆಯಾಗಲಿದೆ. ಲಡಾಖ್, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.