
ಬೆಂಗಳೂರು, ಆಗಸ್ಟ್ 09: ಕರ್ನಾಟಕದಾದ್ಯಂತ ಮಳೆ (rain) ಮುಂದುವರೆದಿದೆ. ಇಂದಿನಿಂದ ಐದು ದಿನ ಅಂದರೆ ಆ. 09ರಿಂದ 13ರ ವರೆಗೆ ಗಾಳಿಯೊಂದಿಗೆ ಭಾರೀ ಮಳೆ ಆಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರಿನಲ್ಲಿ (bangaluru) ಎಂದಿನಂತೆ ಮೋಡ ಕವಿದ ವಾತಾವರಣವಿದ್ದು, ಮಳೆ ಬರುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯಪುರ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಅದೇ ರೀತಿಯಾಗಿ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆಯಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆಗುತ್ತಿದ್ದು, ಹಳ್ಳ-ಕೊಳ್ಳಗಳು ಭೋರ್ಗರೆಯುತ್ತಿದ್ದರೆ, ಇನ್ನೊಂದೆಡೆ ಮಳೆ ಹೊಡೆತಕ್ಕೆ ಎಲ್ಲವೂ ಅವಾಂತರಗಳು ಸೃಷ್ಟಿಯಾಗಿವೆ. ಮಳೆಯಿಂದಾಗಿ ಹೆಚ್.ಡಿ.ಕೋಟೆ ತಾಲೂಕಿನ ರಸ್ತೆಗಳು ಕೆಸರು ಗದ್ದೆಯಂತೆ ಆಗಿವೆ. ಹೆಚ್.ಡಿ.ಕೋಟೆ ತಾಲೂಕು ಕೇಂದ್ರದ ಹೌಸಿಂಗ್ ಬೋರ್ಡ್, ಕೆಂಪಾಲಮ್ಮ ಬಡಾವಣೆ, ರಂಗಯ್ಯ ಅಯ್ಯಂಗಾರ್ ಬಡಾವಣೆ, ಬೆಳಗನಹಳ್ಳಿ ರಸ್ತೆ, ಸ್ಟೇಡಿಯಂ ಬಡಾವಣೆ, ಹನುಮಂತ ನಗರ ರಸ್ತೆಗಳಲ್ಲಿ ಮಳೆ ನೀರು ನಿಂತು ಸಮಸ್ಯೆ ಉಂಟಾಗಿದೆ.
ಇದನ್ನೂ ಓದಿ: Karnataka Rains: ಕರ್ನಾಟಕದ 16 ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ
ರಸ್ತೆಗಳಲ್ಲಿ ಓಡಾಡಲು ವಿದ್ಯಾರ್ಥಿಗಳು, ಮಹಿಳೆಯರು, ಮಕ್ಕಳು, ವೃದ್ಧರು ಪರದಾಟ ನಡೆಸಿದ್ದಾರೆ. ಸಮಸ್ಯೆ ಪರಿಹರಿಸುವಂತೆ ಹಲವು ಬಾರಿ ಮನವಿ ಮಾಡಿದರೂ ತಾಲೂಕು ಆಡಳಿತ ಸ್ಪಂದಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಆದಷ್ಟು ಬೇಗ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ರಾತ್ರಿ ಸುರಿದ ಮಳೆಯಿಂದ ಜಿಲ್ಲೆಯ ಹಲವೆಡೆ ಅವಾಂತರಗಳು ಸಂಭವಿಸಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಗಂಗಮ್ಮನ ಪಾಳ್ಯದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳು ಜಲಾವೃತವಾಗಿ ಜನರು ಓಡಾಡಲು ಪರದಾಡುವಂತಾಗಿದೆ.
ಇದನ್ನೂ ಓದಿ: ರಭಸವಾಗಿ ಹರಿಯುತ್ತಿರುವ ಹಳ್ಳ: ಯಲ್ಲಮ್ಮನ ಗುಡ್ಡಕ್ಕೆ ಹೋಗುವ ರಸ್ತೆ ಬಂದ್, ಪರ್ಯಾಯ ಮಾರ್ಗ ಇಲ್ಲಿದೆ
ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಸಮಸ್ಯೆಗೆ ಕಾರಣವಾಗಿದ್ದು, ಈ ಬಗ್ಗೆ ಹಲವು ಬಾರಿ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎನ್ನುತ್ತಿದ್ದಾರೆ ಸ್ಥಳೀಯರು. ಕಳೆದ ಹಲವು ವರ್ಷಗಳಿಂದ ಇದೇ ಪರಿಸ್ಥಿತಿಯಿದ್ದು, ಸಮಸ್ಯೆ ಬಗೆಹರಿಸದ ಅಧಿಕಾರಿಗಳ ವಿರುದ್ದ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಇನ್ನು ಅಂತರಗಂಗೆ ಬಳಿಯ ದರ್ಗಾ ಬಳಿ ಬೃಹತ್ ಮರ ನೆಲಕ್ಕರುಳಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:20 am, Sat, 9 August 25