Karnataka Rains: ಮುಂದುವರೆದ ಭಾರೀ ಮಳೆ: ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ
ಕಳೆದ ನಾಲ್ಕು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮುಂಜಾಗ್ರತಾ ಕ್ರಮವಾಗಿ ಸುಳ್ಯ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ಶಾಲಾ ಕಾಲೇಜು, ಅಂಗನವಾಡಿಗಳಿಗೆ ನಾಳೆಯೂ ರಜೆ ಘೋಷಿಸಲಾಗಿದೆ.
ಬೆಂಗಳೂರು, ಜುಲೈ 24: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಬಿಟ್ಟು ಬಿಡದೇ ಧಾರಾಕಾರ ಮಳೆ (Rain) ಸುರಿಯುತ್ತಿದ್ದು, ಜನಜೀನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆಯ ಅಬ್ಬರಕ್ಕೆ ಹಲವೆಡೆ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿವೆ. ಮಳೆ ಇನ್ನೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸುಳ್ಯ, ಉಡುಪಿ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜು, ಅಂಗನವಾಡಿಗಳಿಗೆ ನಾಳೆಯೂ ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ನಾಳೆ ಬೆಳಗ್ಗೆವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅದೇ ರೀತಿಯಾಗಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ನಾಳೆಯೂ ರಜೆ ನೀಡಿ ಡಿಸಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: Karnataka Rain: ಮುಂದುವರಿದ ಮಳೆ; ಕೊಡಗು, ಉತ್ತರ ಕನ್ನಡ ಸೇರಿದಂತೆ 9 ಜಿಲ್ಲೆಗಳಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ
ಸುಳ್ಯ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಕಳೆದ 21 ತಾಸುಗಳಲ್ಲಿ ಅತೀ ಹೆಚ್ಚು ಮಳೆ ದಾಖಲಾಗಿದೆ. ಹಾಗಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 25 ರಂದು ರಜೆ ನೀಡಲಾಗಿದೆ. ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಆರೆಂಜ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರೆದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಅದೇ ರೀತಿಯಾಗಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಪರೀಕ್ಷೆ ಮುಂದೂಡಿಕೆ
ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಿ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ಆದೇಶಿಸಿದ್ದಾರೆ. ಶೀಘ್ರದಲ್ಲೇ ಪರಿಷ್ಕೃತ ದಿನಾಂಕ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಮಂಗಳವಾರ ಬೆಳಗ್ಗಿನವರೆಗೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಪ್ರದೇಶಗಳಲ್ಲಿ 200 ಮಿ.ಮೀ.ಗೂ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಇದನ್ನೂ ಓದಿ: ಮುಂದುವರೆದ ಭಾರೀ ಮಳೆ: ಬೆಳಗಾವಿ ತಾಲೂಕಿನ ಶಾಲೆಗಳಿಗೆ ನಾಳೆ ರಜೆ, ಡಿಸಿ ನಿತೇಶ್ ಪಾಟೀಲ್ ಆದೇಶ
ಕೊಡಗು, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಹಾಸನ, ಶಿವಮೊಗ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಕೂಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ಮಡಿಕೇರಿ-ಮಂಗಳೂರು ಮಾರ್ಗ ಸಂಚಾರ ತಾತ್ಕಾಲಿಕ ಸ್ಥಗಿತ
ಕೊಡಗು ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಮತ್ತು ಬೃಹತ್ ಮರ ಕುಸಿದು ಬಿದ್ದಿದೆ. ಮಡಿಕೇರಿ ತಾಲೂಕಿನ ಎರಡನೇ ಮೊಣ್ಣಂಗೇರಿ ಬಳಿ ಘಟನೆ ನಡೆದಿದ್ದು, ಮಡಿಕೇರಿ-ಮಂಗಳೂರು ಮಾರ್ಗದಲ್ಲಿ ವಾಹನ ಸಂಚಾರ ತಾತ್ಕಾಲಿಕ ಸ್ಥಗಿತವಾಗಿದೆ.
5 ತಾಲೂಕುಗಳ ಅಂಗನವಾಡಿ, ಶಾಲೆಗಳಿಗೆ ನಾಳೆಯೂ ರಜೆ
ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ 5 ತಾಲೂಕುಗಳಾದ ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು, ಹಾಸನ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ನಾಳೆಯೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಆದೇಶಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:05 pm, Mon, 24 July 23